ಭದ್ರಾವತಿ: ೨೦೨೪ನೇ ಸಾಲಿನಲ್ಲಿ ದಾಖಲಾಗಿದ್ದ ತಾಲೂಕಿನ ೧೫ ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ೨೦ ವರ್ಷ ಕಾರವಾಸ ಗೃಹ ಶಿಕ್ಷೆ ವಿಧಿಸಿ ನ್ಯಾಯಾಧೀಶರಾದ ನಿಂಗನ ಗೌಡ ಪಾಟೀಲ್ ತೀರ್ಪು ನೀಡಿದ್ದಾರೆ.
ಲೈಂಗಿಕ ದೌರ್ಜನ್ಯಕ್ಕೊಳಗಾದ ನೊಂದ ಬಾಲಕಿಯ ದೂರಿನ ಮೇರೆಗೆ ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕಲಂ ೪೪೮ ೩೭೬(೨) (ಎನ್), ೩೭೬ (೨)(ಎಫ್) ಐಪಿಸಿ ಮತ್ತು ಕಲಂ ೫ (ಜೆ)(೨) ೫(ಎಲ್), ೬ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖಾಧಿಕಾರಿ ನಗರ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್ ಪ್ರಕರಣದ ತನಿಖೆ ಪೂರೈಸಿ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎಚ್.ಆರ್ ಶ್ರೀಧರ್ ವಾದ ಮಂಡಿಸಿದ್ದರು. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-೧, ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆಸಿದ್ದು, ಆರೋಪಿಯ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ನಿಂಗನ ಗೌಡ ಪಾಟೀಲ್‌ರವರು ಪ್ರಕರಣದ ಆರೋಪಿತನಿಗೆ ೨೦ ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರು. ೧,೬೧,೦೦೦ ದಂಡ, ದಂಡ ಕಟ್ಟಲು ವಿಫಲನಾದಲ್ಲಿ ೨ ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.