ಎಸ್. ಮಂಜುನಾಥ್, ರಾಜ್ಯಾಧ್ಯಕ್ಷರು, ಮಾದಿಗ ಸಮಾಜ
ಭದ್ರಾವತಿ, ಸೆ. ೨೫: ಕೇಂದ್ರ ಹಾಗು ರಾಜ್ಯ ಸರ್ಕಾರಗಳು ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತರಲು ಮುಂದಾಗುತ್ತಿರುವುದು ವಿಷಾದನೀಯ ಸಂಗತಿಯಾಗಿದ್ದು, ಈ ಸಂಬಂಧ ಸೆ.೨೮ರಂದು ಹಮ್ಮಿಕೊಳ್ಳಲಾಗಿರುವ ಕರ್ನಾಟಕ ಬಂದ್‌ಗೆ ಕರ್ನಾಟಕ ರಾಜ್ಯ ಮಾದಿಗ ಸಮಾಜ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ರಾಜ್ಯಾಧ್ಯಕ್ಷ ಎಸ್. ಮಂಜುನಾಥ್ ತಿಳಿಸಿದ್ದಾರೆ.
ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುಚ್ಛಕ್ತಿ ಕಾಯ್ದೆ ತಿದ್ದುಪಡಿ ಈ ೩ ಮಸೂದೆಗಳನ್ನು ಚರ್ಚೆಗೆ ಅವಕಾಶ ನೀಡದೇ ಸುಗ್ರೀವಾಜ್ಞೆ ಮೂಲಕ ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ. ಈ ಮಸೂದೆಗಳ ವಿರುದ್ಧ ರೈತ ಸಂಘ ಸೇರಿದಂತೆ ಹಲವು ಸಂಘಟನೆಗಳು ಹೋರಾಟಕ್ಕೆ ಮುಂದಾಗಿವೆ. ಈ ಹೋರಾಟಕ್ಕೆ ಮಾದಿಗ ಸಮಾಜ ಸಹ ಪೂರಕವಾಗಿ ಬೆಂಬಲ ನೀಡಲಿದೆ.
ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ಬಡವರ ಜಮೀನು ಶ್ರೀಮಂತರ ಪಾಲಾಗುವಂತೆ, ರೆಸಾರ್ಟ್, ಲೇಔಟ್, ಬಡಾವಣೆ ಸೇರಿದಂತೆ ಇನ್ನಿತರ ವಾಣಿಜ್ಯ ಕೇಂದ್ರಗಳಾಗಿ ಪರಿವರ್ತಿಸುವ ಹುನ್ನಾರ ನಡೆಸಲಾಗುತ್ತಿದೆ. ಬಂಡವಾಳ ಶಾಯಿಗಳು ನಿಗದಿಪಡಿಸಿದ ಬೆಲೆಗೆ ರೈತರು ಉತ್ಪನ್ನಗಳನ್ನು ಮಾರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುವಂತೆ ಹಾಗು ರೈತರು ಮತ್ತು ಬಡವರು ಹಸಿವಿನಿಂದ ನರಳುವಂತೆ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ರೈತರು ನಡೆಸುತ್ತಿರುವ ಹೋರಾಟಕ್ಕೆ ಬಹುತೇಕ ಸಂಘಟನೆಗಳು, ರಾಜಕೀಯ ಪಕ್ಷಗಳು, ಸಾಹಿತಿಗಳು, ಚಿಂತಕರು, ಪ್ರಗತಿಪರರು ಸೇರಿದಂತೆ ಸಮಸ್ತ ನಾಗರೀಕರು ಬೆಂಬಲ ಸೂಚಿಸಿದ್ದಾರೆ.
ಮಾದಿಗ ಸಮಾಜ ಸಹ ಎಂದೆಂದಿಗೂ ರೈತರು, ಬಡವರ ಪರವಿದ್ದು, ಹೋರಾಟದಲ್ಲಿ ಸಮಾಜ ಬಾಂಧವರು ಪಾಲ್ಗೊಂಡು ಬೆಂಬಲ ನೀಡಲಿದ್ದು, ೨೮ರಂದು ಹಮ್ಮಿಕೊಳ್ಳಲಾಗಿರುವ ಕರ್ನಾಟಕ ಬಂದ್‌ಗೆ ಸಂಪೂರ್ಣ ಬೆಂಬಲ ನೀಡಲಿದೆ. ಸಮಸ್ತ ನಾಗರೀಕರು ಬಂದ್ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಮುಂದಾಗಬೇಕೆಂದು ಮಂಜುನಾಥ್ ಕೋರಿದ್ದಾರೆ.