Saturday, March 6, 2021

ಕಸಾಪ ಪಾರದರ್ಶಕತೆ ಕಾಯ್ದುಕೊಳ್ಳಲು ಡಿ.ಬಿ ಶಂಕರಪ್ಪ ಸ್ಪರ್ಧೆ ಅನಿವಾರ್ಯ : ಅಪೇಕ್ಷ ಮಂಜುನಾಥ್

ಹಿರಿಯ ಸಾಹಿತ್ಯ ಎನ್.ಎಸ್ ಲಕ್ಷ್ಮೀನಾರಾಯಣಭಟ್ ನಿಧನಕ್ಕೆ ಕಸಾಪ ಸಂತಾಪ

ಭದ್ರಾವತಿ ನ್ಯೂಟೌನ್‌ನಲ್ಲಿರುವ ಕಸಾಪ ಕಛೇರಿಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಎನ್.ಎಸ್ ಲಕ್ಷ್ಮೀನಾರಾಯಣಭಟ್‌ರವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.
   ಭದ್ರಾವತಿ, ಮಾ. ೬: ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮತ್ತಷ್ಟು ಸದೃಢವಾಗಿ ಬೆಳೆಯಬೇಕಾದರೆ ಇಂದಿನ ಅಧ್ಯಕ್ಷರಾಗಿರುವ ಡಿ.ಬಿ ಶಂಕರಪ್ಪನವರು ಮುಂದುವರೆಯುವುದು ಅಗತ್ಯವಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅಪೇಕ್ಷ ಮಂಜುನಾಥ್ ಹೇಳಿದರು.
ಅವರು ಶನಿವಾರ ನ್ಯೂಟೌನ್‌ನಲ್ಲಿರುವ ಪರಿಷತ್ ಕಛೇರಿಯಲ್ಲಿ ಏರ್ಪಡಿಸಲಾಗಿದ್ದ ಹಿರಿಯ ಸಾಹಿತಿ ಎನ್.ಎಸ್ ಲಕ್ಷ್ಮೀನಾರಾಯಣ ಭಟ್‌ರವರ ನಿಧನಕ್ಕೆ ಸಂತಾಪ ಹಾಗು ಪರಿಷತ್ ಜಿಲ್ಲಾಧ್ಯಕ್ಷ ಡಿ.ಬಿ ಶಂಕರಪ್ಪನವರೊಂದಿಗೆ ಸಮಾಲೋಚನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
  ಇಳಿವಯಸ್ಸಿನಲ್ಲೂ ಶಂಕರಪ್ಪನವರ ಕಾರ್ಯ ಚಟುವಟಿಕೆಗಳು ಪರಿಷತ್‌ನ ಇತರರಿಗೆ ಸ್ಪೂರ್ತಿದಾಯಕವಾಗಿವೆ. ಪರಿಷತ್‌ನಲ್ಲಿ ಪಾರದರ್ಶಕತೆಗೆ ಮೊದಲ ಆದ್ಯತೆ ನೀಡಿದ್ದಾರೆ. ಅಲ್ಲದೆ ಪರಿಷತ್‌ನ ಎಲ್ಲಾ ಕಾರ್ಯಚಟುವಟಿಕೆಗಳಲ್ಲೂ ಕ್ರಿಯಾಶೀಲವಾಗಿ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸಿದ್ದಾರೆ. ಪ್ರಸ್ತುತ ಜಿಲ್ಲಾಧ್ಯಕ್ಷರ ಚುನಾವಣೆ ಎದುರಾಗಿದ್ದು, ಈ ಹಿಂದೆ ವಯಸ್ಸಿನ ಕಾರಣಕ್ಕಾಗಿ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಸೂಕ್ತ ಅಭ್ಯರ್ಥಿಗಳಿಗಾಗಿ ಇದುವರೆಗೂ ಹುಡುಕಾಟ ನಡೆಸಲಾಯಿತು. ಆದರೆ ಯಾವುದೇ ಸೂಕ್ತ ಅಭ್ಯರ್ಥಿ ಇಲ್ಲದ ಕಾರಣ ಪುನಃ ಚುನಾವಣೆಗೆ ಸ್ಪರ್ಧಿಸುವಂತೆ ಡಿ.ಬಿ ಶಂಕರಪ್ಪನವರಿಗೆ ಮನವಿ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಅವರು ಪರಿಷತ್ ಸದಸ್ಯರ ಅಭಿಪ್ರಾಯ ಪಡೆಯಲು ಖುದ್ದಾಗಿ ಆಗಮಿಸಿದ್ದಾರೆ ಎಂದರು.
  ಜಿಲ್ಲಾಧ್ಯಕ್ಷ ಡಿ.ಬಿ ಶಂಕರಪ್ಪ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಪರಿಷತ್ ಚುನಾವಣೆ ಎದುರಿಸಬೇಕಾದರೆ ಸ್ಪರ್ಧಿಸುವ ಅಭ್ಯರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ತಮ್ಮದೇ ಆದ ಮತದಾರರನ್ನು ಹೊಂದಿರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಷತ್‌ನ ಗೌರವ ಉಳಿಸಿಕೊಂಡು ಬರುವುದು ಎಲ್ಲರ ಜವಾಬ್ದಾರಿಯಾಗಿದೆ. ಈ ಹಿಂದಿನ ಅಧ್ಯಕ್ಷರ ಅವಧಿಯಲ್ಲಿ ನಡೆದಿರುವ ತಪ್ಪುಗಳು ಪುನಃ ಮರುಕಳುಹಿಸಬಾರದು. ಈ ಬಾರಿ ಚುನಾವಣೆಗೆ ಅವರು ಸ್ಪರ್ಧಿಸುತ್ತಿರುವ ಮಾಹಿತಿ ತಿಳಿದು ಬಂದ ಕಾರಣ ಅವರ ವಿರುದ್ಧ ಪುನಃ ಸ್ಪರ್ಧಿಸಬೇಕೆಂಬ ನಿರ್ಧಾರಕ್ಕೆ ಬಂದಿದ್ದೇನೆ. ಈ ಹಿನ್ನಲೆಯಲ್ಲಿ ನಿಮೆಲ್ಲರ ಅಭಿಪ್ರಾಯ ಬಹಳ ಮುಖ್ಯವಾಗಿದೆ ಎಂದರು.
    ಸಭೆಯಲ್ಲಿ ಪಾಲ್ಗೊಂಡಿದ್ದ ಜೆ.ಎನ್ ಬಸವರಾಜಪ್ಪ, ಅಪರಂಜಿ ಶಿವರಾಜ್, ಅರಳೇಹಳ್ಳಿ ಅಣ್ಣಪ್ಪ ಸೇರಿದಂತೆ ಪ್ರಮುಖರು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
      ಎನ್.ಎಸ್ ಲಕ್ಷ್ಮೀನಾರಾಯಣ ಭಟ್ ಸರಳ ಸಜ್ಜನಿಕೆ ಸಾಹಿತಿ:
   ಎನ್.ಎಸ್ ಲಕ್ಷ್ಮೀನಾರಾಯಣಭಟ್‌ರವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಕೊಡುಗೆಯನ್ನು ನೀಡಿದ್ದಾರೆ. ಅವರ ನಿಧನದಿಂದ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಎಂ.ಎನ್ ಸುಂದರ್‌ರಾಜ್ ತಿಳಿಸಿದರು.
   ಅಪರೂಪದ ಸಾಹಿತಿಗಳಲ್ಲಿ ಲಕ್ಷ್ಮೀನಾರಾಯಣ ಭಟ್ ಸಹ ಒಬ್ಬರಾಗಿದ್ದು, ಅವರು ತಮ್ಮ ದಿನನಿತ್ಯದ ಬದುಕಿನಲ್ಲಿ ಅತ್ಯಂತ ಸರಳತೆಯನ್ನು ಕಾಯ್ದುಕೊಂಡು ಬಂದಿದ್ದರು. ಅಲ್ಲದೆ ಇತರರಿಗೆ ಮಾದರಿಯಾಗಿ ಬದುಕಿದ್ದರು. ಇವರ ಅಗಲಿಕೆ ತುಂಬಾ ನೋವುಂಟ ಮಾಡಿದೆ ಎಂದರು.
   ಲಕ್ಷ್ಮೀನಾರಾಯಣಭಟ್‌ರವರ ನಿಧನಕ್ಕೆ ಸಂತಾಪ ಸೂಚಿಸುವ ಮೂಲಕ ಮೌನಾಚರಣೆ ನಡೆಸಿ ಗೌರವ ಸಲ್ಲಿಸಲಾಯಿತು. ಕಸಾಪ ಜಿಲ್ಲಾ ಉಪಾಧ್ಯಕ್ಷ ಎಚ್.ಎನ್ ಮಹಾರುದ್ರ, ತಾಲೂಕು ಘಟಕದ ಕೋಶಾಧ್ಯಕ್ಷ ಜಿ.ಎನ್ ಸತ್ಯಮೂರ್ತಿ, ಕಾರ್ಯದರ್ಶಿ ವೈ.ಕೆ ಹನುಮಂಯ್ಯ ಸೇರಿದಂತೆ ಉಪಸ್ಥಿತರಿದ್ದರು. ಕಾರ್ಯದರ್ಶಿ ಸಿ. ಚನ್ನಪ್ಪ ಸ್ವಾಗತಿಸಿದರು.

ಕಲಾಪದಿಂದ ಶಾಸಕರ ಅಮಾನತ್ತು, ಮುಖಂಡರು, ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು

ಯುವ ಕಾಂಗ್ರೆಸ್ ಖಂಡನೆ, ಮಧ್ಯ ಪ್ರವೇಶಕ್ಕೆ ರಾಜ್ಯಪಾಲರಿಗೆ ಮನವಿ  

ಶಾಸಕ ಬಿ.ಕೆ ಸಂಗಮೇಶ್ವರನ್ನು ವಿಧಾನಸಭೆ ಕಲಾಪದಿಂದ ಅಮಾನತ್ತುಗೊಳಿಸಿರುವುದನ್ನು ವಿರೋಧಿಸಿ ಹಾಗು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಯುವ ಕಾಂಗ್ರೆಸ್ ತಾಲೂಕು ಘಟಕದ ವತಿಯಿಂದ ಶನಿವಾರ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.  
   ಭದ್ರಾವತಿ, ಮಾ. ೬: ಶಾಸಕ ಬಿ.ಕೆ ಸಂಗಮೇಶ್ವರನ್ನು ವಿಧಾನಸಭೆ ಕಲಾಪದಿಂದ ಅಮಾನತ್ತುಗೊಳಿಸಿರುವುದನ್ನು ವಿರೋಧಿಸಿ ಹಾಗು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಯುವ ಕಾಂಗ್ರೆಸ್ ತಾಲೂಕು ಘಟಕದ ವತಿಯಿಂದ ಶನಿವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.  
    ಕಳೆದ ೨ ದಿನಗಳಿಂದ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಕ್ಷೇತ್ರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಹಾಗು ಬಿಜೆಪಿ ಪಕ್ಷದವರು ಆಡಳಿತವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ವಿಚಾರಗಳ ಬಗ್ಗೆ ತಮ್ಮ ಅಳಲನ್ನು ತೋರ್ಪಡಿಸಿಕೊಳ್ಳುವ ಉದ್ದೇಶದಿಂದ ಸದನದ ಭಾವಿಗಿಳಿದು ಅಂಗಿ ಕಳಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಕಾರಣ ಕಲಾಪದಿಂದ ಸುಮಾರು ಒಂದು ವಾರ ಕಾಲ ಶಾಸಕರನ್ನು ಅಮಾನತ್ತುಗೊಳಿಸಿರುವುದು ಸರಿಯಾದ ಕ್ರಮವಲ್ಲ. ಇದನ್ನು ಯುವ ಘಟಕ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.
    ನಗರದಲ್ಲಿ ಇತ್ತೀಚೆಗೆ ನಡೆದ ಕಬಡ್ದಿಪಂದ್ಯಾವಳಿ ವೇಳೆ ಬಿಜೆಪಿ ಹಾಗು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಗಲಭೆಯಲ್ಲಿ ಗೂಂಡಗಳಂತೆ ವರ್ತಿಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಧರ್ಮದ ಹೆಸರಿನಲ್ಲಿ ಘೋಷಣೆ ಕೂಗಿ ಕೋಮುಗಲಭೆ ಸೃಷ್ಟಿಸುವ   ವಾತಾವರಣದ ವಿರುದ್ದ ಧ್ವನಿಯೆತ್ತಿದ ಶಾಸಕರು ಹಾಗು ಕುಟುಂಬ ವರ್ಗದವರು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೇಲೆ ಆಡಳಿತ ಯಂತ್ರ ದುರುಪಯೋಗಪಡಿಸಿಕೊಂಡು ಪೊಲೀಸ್ ಠಾಣೆಯಲ್ಲಿ ಸುಳ್ಳು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಯಿತು.
     ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದ್ದು, ತಕ್ಷಣ ರಾಜ್ಯಪಾಲರು ಮಧ್ಯಪ್ರವೇಶಿಸಿ ಪ್ರಜಾಪ್ರಭುತ್ವದ ಆಶಯ ಎತ್ತಿ ಹಿಡಿಯಬೇಕು. ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಆಗ್ರಹಿಸಬೇಕು. ವಿಧಾನಸಭಾಧ್ಯಕ್ಷರ ಅಮಾನತ್ತು ಆದೇಶವನ್ನು ರದ್ದುಪಡಿಸಬೇಕೆಂದು ಒತ್ತಾಯಿಸಲಾಯಿತು.
      ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಜಿ. ವಿನೋದ್ ಕುಮಾರ್, ಗ್ರಾಮಾಂತರ ಅಧ್ಯಕ್ಷ ಅಫ್ತಾಬ್ ಅಹ್ಮದ್, ಪ್ರಧಾನ ಕಾರ್ಯದರ್ಶಿಗಳಾದ ಎ.ಪಿ ಗಣೇಶ್, ಕೇಶವ್, ವರುಣ್, ಶಿವು, ಯೋಗೀಶ್, ಶಿವರಾಜ್, ಫಯಾಜ್, ಬಾಷಾ, ಇರ್ಫಾನ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರುಗಳು ಪಾಲ್ಗೊಂಡಿದ್ದರು.

ಕಬಡ್ಡಿ ಮಾರಾಮಾರಿ : ಸಂಗಮೇಶ್ವರ್ ಪುತ್ರ ಬಂಧನ

ಬಿ.ಎಸ್ ಬಸವೇಶ್
    ಭದ್ರಾವತಿ, ಮಾ. ೬: ನಗರದಲ್ಲಿ ಕಬಡ್ಡಿ ಪಂದ್ಯಾವಳಿ ಮುಕ್ತಾಯದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದಿರುವ ಮಾರಾಮಾರಿಗೆ ಸಂಬಂಧಿಸಿದಂತೆ ಶಾಸಕ ಬಿ.ಕೆ ಸಂಗಮೇಶ್ವರ್ ೨ನೇ ಪುತ್ರ ಬಿ.ಎಸ್ ಬಸವೇಶ್‌ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
   ಹಳೇನಗರದ ಕನಕಮಂಟಪ ಮೈದಾನದಲ್ಲಿ ಫೆ. ೨೭ ಮತ್ತು ೨೮ರಂದು ಆಯೋಜಿಸಲಾಗಿದ್ದ ರಾಜ್ಯಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿ ಮುಕ್ತಾಯದ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ಉಂಟಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಬಸವೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಹಾಗು ಜಾತಿನಿಂದನೆ ದೂರು ಹಳೇನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಚಿತ್ರದುರ್ಗದಲ್ಲಿ ಬಸವೇಶ್‌ನನ್ನು ಬಂಧಿಸಲಾಗಿದೆ. ಬಸವೇಶ್‌ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ.
ಶಾಸಕ ಸಂಗಮೇಶ್ವರ್ ಖಂಡನೆ:
   ಪುತ್ರನ ಬಂಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ನನನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೆಸುತ್ತಿದ್ದಾರೆ. ಪೊಲೀಸರು ನನ್ನ ಕುಟುಂಬದವರು ಮತ್ತು ಬೆಂಬಲಿಗರ ಮೇಲೆ ಮಾತ್ರ ದೂರು ದಾಖಲಿಸಿಕೊಂಡು ದೌರ್ಜನ್ಯ ನಡೆಸುತ್ತಿದ್ದಾರೆ. ಆದರೆ ನಾವು ನೀಡಿದ ದೂರಿನ್ವಯ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಬಿಜೆಪಿ ಪಕ್ಷಕ್ಕೆ ಅಧಿಕಾರ ಮುಖ್ಯವಲ್ಲ, ಸೇವೆ ಮುಖ್ಯ : ಜಿ. ಧರ್ಮಪ್ರಸಾದ್

ಭದ್ರಾವತಿ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆ ಶನಿವಾರ ನಡೆಯಿತು.
   ಭದ್ರಾವತಿ, ಮಾ. ೬: ಬಿಜೆಪಿ ಪಕ್ಷ ಜನರ ಸೇವೆಗಾಗಿ ಇರುವ ಪಕ್ಷ. ಈ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಅಧಿಕಾರ ಮುಖ್ಯವಲ್ಲ ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ಧರ್ಮಪ್ರಸಾದ್ ಹೇಳಿದರು.
   ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ಕ್ಷೇತ್ರದ ಶಾಸಕ ಬಿ.ಕೆ ಸಂಗಮೇಶ್ವರ್ ಬಿಜೆಪಿ ಪಕ್ಷ ಹಾಗು ಸ್ಥಳೀಯ ನಾಯಕರ ಕುರಿತು ಕೆಳಮಟ್ಟದಲ್ಲಿ ಮಾತನಾಡುವುದು ಸರಿಯಲ್ಲ. ಕ್ಷೇತ್ರದಲ್ಲಿ ಇದುವರೆಗೂ ಬಿಜೆಪಿ ಪಕ್ಷಕ್ಕೆ ನೆಲೆ ಇಲ್ಲ. ಯಾವುದೇ ಅಧಿಕಾರ ಸಹ ಹಿಡಿಯುವಲ್ಲಿ ಯಶಸ್ವಿಯಾಗಿಲ್ಲ ಎಂದು ಟೀಕಿಸುತ್ತಿದ್ದಾರೆ. ಅವರ ಟೀಕೆಗೆ ಇಲ್ಲಿನ ಕಾರ್ಯಕರ್ತರು ಉತ್ತರಿಸಬೇಕಾದ ಅಗತ್ಯವಿದೆ. ಜನರ ಸೇವೆ ಮಾಡಲು ಯಾವುದೇ ಅಧಿಕಾರ ಬೇಕಿಲ್ಲ. ಕಾರ್ಯಕರ್ತರು ಪ್ರಾಮಾಣಿಕವಾಗಿ ತಮ್ಮಿಂದಾಗುವ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇದರಿಂದಾಗಿ ಕೇಂದ್ರ ಹಾಗು ರಾಜ್ಯ ಸರ್ಕಾರದಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಸ್ಥಳೀಯ ಶಾಸಕರು ಮಾಡದಿರುವ ಕಾರ್ಯಗಳನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಮಾಡುತ್ತಿದ್ದಾರೆ. ಈ ವಿಚಾರ ನಮ್ಮನ್ನು ಟೀಕಿಸುತ್ತಿರುವವರು ಅರ್ಥ ಮಾಡಿಕೊಳ್ಳಬೇಕೆಂದರು.
   ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಮಾತನಾಡಿ, ಸೇವೆಗೆ ಮೊದಲ ಆದ್ಯತೆ ನೀಡಿರುವ ಪಕ್ಷ ಬಿಜೆಪಿ. ಇದನ್ನು ಪಕ್ಷ ತನ್ನ ಸಿದ್ದಾಂತದಲ್ಲಿ ಅಳವಡಿಸಿಕೊಂಡಿದೆ. ಸೇವೆ ಮೂಲಕ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಇಂದು ದೇಶದ ಬಹುದೊಡ್ಡ ಪಕ್ಷವಾಗಿ ವ್ಯಾಪಿಸಿಕೊಂಡಿದೆ. ಕ್ಷೇತ್ರದಲ್ಲಿ ಪಕ್ಷ ಮತ್ತಷ್ಟು ಬಲಗೊಳ್ಳಬೇಕಾಗಿದೆ. ತಳಮಟ್ಟದಿಂದ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಸಂಘಟಿತ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುವುದು. ಮುಂಬರುವ ಸ್ಥಳೀಯ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಕೈಗೊಳ್ಳಲಾಗುವುದು. ರಾಜ್ಯ ಮತ್ತು ಜಿಲ್ಲಾಮಟ್ಟದ ಪಕ್ಷದ ಮುಖಂಡರು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಸಹಕರಿಸಲಿದ್ದಾರೆ ಎಂದರು.
    ವೇದಿಕೆಯಲ್ಲಿ ಹಟ್ಟಿ ಚಿನ್ನದ ಗಣಿ ನಿಗಮದ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಲಿ ನಿರ್ದೇಶಕ ಮಂಗೋಟೆ ರುದ್ರೇಶ್, ಸೂಡಾ ಸದಸ್ಯರಾದ ವಿ. ಕದಿರೇಶ್, ರಾಮಲಿಂಗಯ್ಯ, ತಾಲೂಕು ಪಂಚಾಯಿತಿ ಸದಸ್ಯ ಕೆ. ಮಂಜುನಾಥ್, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಆರ್.ಎಸ್ ಶೋಭಾ, ಗಣೇಶ್‌ರಾವ್, ಸುಬ್ರಮಣಿ, ಕೆ. ಮಂಜಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Friday, March 5, 2021

ವಿಜ್ಞಾನ ರಸಪ್ರಶ್ನೆಯಲ್ಲಿ ದ್ವಿತೀಯ ಬಹುಮಾನ

ಶಿವಮೊಗ್ಗ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಭದ್ರಾವತಿ ಕಾಗದನಗರದ ಪೇಪರ್‌ಟೌನ್ ಆಂಗ್ಲ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.
   ಭದ್ರಾವತಿ, ಮಾ. ೫: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗು ಡಯಟ್ ವತಿಯಿಂದ ಶಿವಮೊಗ್ಗ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾಗದನಗರದ ಪೇಪರ್‌ಟೌನ್ ಆಂಗ್ಲ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.
   ಶಾಲೆಯ ವಿದ್ಯಾರ್ಥಿಗಳಾದ ತೇಜಸ್ವಿ ಮತ್ತು ಭೂಮಿಕಾ ಬಹುಮಾನ ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳಿಗೆ ಎಂಪಿಎಂ ಶಿಕ್ಷಣ ಸಂಸ್ಥೆ, ಶಾಲೆಯ ಪ್ರಾಂಶುಪಾಲರು, ಶಿಕ್ಷಕ ಹಾಗು ಸಿಬ್ಬಂದಿ ವೃಂದದವರು ಅಭಿನಂದಿಸಿದ್ದಾರೆ.

ಸ್ವಾರ್ಥಕ್ಕಾಗಿ ಬೆತ್ತಲಾದ ಸಂಗಮೇಶ್ವರ : ಪ್ರವೀಣ್ ಪಟೇಲ್

ಜಿ.ಆರ್ ಪ್ರವೀಣ್ ಪಟೇಲ್
    ಭದ್ರಾವತಿ, ಮಾ. ೫: ಶಾಸಕ ಬಿ.ಕೆ.ಸಂಗಮೇಶ್ವರ ಅವರು ಸದನದಲ್ಲಿ ಅಂಗಿ ಬಿಚ್ಚುವ ಮೂಲಕ ಮತ್ತೊಮ್ಮೆ ತಮ್ಮ ಕುಟುಂಬದ ಸಾರ್ಥಕ್ಕಾಗಿ ಬೆತ್ತಲಾಗಿದ್ದಾರೆ ಎಂದು ಬಿಜೆಪಿ ಮುಖಂಡ ಜಿ.ಆರ್.ಪ್ರವೀಣ್ ಪಟೇಲ್ ಟೀಕಿಸಿದ್ದಾರೆ.
   ತಮ್ಮ ಜೀವನದಲ್ಲಿ ಎಂದೂ ಕ್ಷೇತ್ರದ ಜನರ ಪರ ಧ್ವನಿ ಎತ್ತದ ಅವರಿಗೆ ತಾವು ಮತ್ತು ತಮ್ಮ ಕುಟುಂಬ ಹೊರತಾಗಿ ಏನೂ ಕಾಣುವುದಿಲ್ಲ. ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳಿಗಿಂತ ಕುಟುಂಬದ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡುತ್ತಾರೆ. ಸದನದಲ್ಲಿ ಅಂಗಿ ಕಳಚುವ ಮೂಲಕ ಕ್ಷೇತ್ರದ ಜನರಿಗೂ ಮುಜುಗರ ತಂದಿದ್ದಾರೆ. ಇಂತಹ ನಡೆ ಸಭ್ಯ ರಾಜಕಾರಣಿಗಳಿಗೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದ್ದಾರೆ.
   ತಮ್ಮ ಕುಟುಂಬದ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ದೂರುವ ಅವರು ಮೊದಲು ಗೂಂಡಾಗಿರಿ ವರ್ತನೆ ತಿದ್ದಿಕೊಳ್ಳಬೇಕು. ಆಟದ ಉತ್ಸಾಹದಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದ ನೆಪ ಇಟ್ಟುಕೊಂಡು ಬಿಜೆಪಿ, ಭಜರಂಗ ದಳದ ಮುಖಂಡರು, ಕಾರ್ಯಕರ್ತರ ಮೇಲೆ ಶಾಸಕರು, ಅವರ ಮಕ್ಕಳು ಗಂಭೀರ ಹಲ್ಲೆ ನಡೆಸಿದ್ದಾರೆ. ಹಿಂಸೆ ಮೂಲಕವೇ ರಾಜಕೀಯ ಬದುಕು ಕಟ್ಟಿಕೊಂಡಿದ್ದಾರೆ. ಅವರ ವರ್ತನೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
   ಮುಖ್ಯಮಂತ್ರಿಗಳು, ಸಂಸದರು ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇವರ ವಿರುದ್ಧ ಮಾತನಾಡುವ ನೈತಿಕತೆ ಶಾಸಕರಿಗಿಲ್ಲ. ಅದರಲ್ಲೂ ಕೀಳುಮಟ್ಟದಲ್ಲಿ ಮಾತನಾಡುವುದು ಶಾಸಕರ ವ್ಯಕ್ತಿತ್ವ ತೋರಿಸುತ್ತದೆ. ಶಾಸಕರು ತಮ್ಮ ನಡೆ ತಿದ್ದಿಕೊಳ್ಳದಿದ್ದರೆ ಜನರು ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆಂದು ಎಚ್ಚರಿಸಿದ್ದಾರೆ.

ಬಿ.ಎನ್ ರಾಜು ವಿರುದ್ಧ ಬಾಲಕೃಷ್ಣ ದೂರು

   ಭದ್ರಾವತಿ, ಮಾ. ೫: ಯಾವುದೇ ನೋಂದಾಯಿತ ಮಾನವ ಹಕ್ಕು ಹೋರಾಟ ಸಮಿತಿ ಅಧ್ಯಕ್ಷನಾಗಿರದಿದ್ದರೂ ಸಹ ಬಿ.ಎನ್ ರಾಜು ಎಂಬಾತ ನನ್ನ ವಿರುದ್ಧ ಸುಳ್ಳು ಜಾತಿನಿಂದನೆ ದೂರು ದಾಖಸುವುದಾಗಿ ಹೇಳಿ ಜೀವ ಬೆದರಿಕೆ ಹಾಕುತ್ತಿದ್ದು, ಸೂಕ್ತ ಕಾನೂನು ಕ್ರಮ ಕೈಗೊಂಡು ರಕ್ಷಣೆ ನೀಡುವಂತೆ ನಗರಸಭೆ ಮಾಜಿ ಸದಸ್ಯ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಪೂರ್ವ ವಲಯ ಪೊಲೀಸ್ ಮಹಾನಿರ್ದೇಶಕರಿಗೆ ಹಾಗು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಅಂಚೆ ಮೂಲಕ ದೂರು ಸಲ್ಲಿಸಿದ್ದಾರೆ.
   ಸಮಾಜದಲ್ಲಿ ಹಲವಾರು ವರ್ಷಗಳಿಂದ ಯಾವುದೇ ಜಾತಿಬೇಧಭಾವವಿಲ್ಲದೆ, ಯಾವುದೇ ಫಲಾಫೇಕ್ಷೆ ಇಲ್ಲದೆ ದೀನದಲಿತರ, ನೊಂದ ಬಡವರ, ಹಿಂದುಳಿದ ವರ್ಗದ ಜನರ ಕುಂದುಕೊರತೆಗಳಿಗೆ ಸ್ಪಂದಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಜೊತೆಗೆ ರೈತ ಕುಟುಂಬಕ್ಕೆ ಸೇರಿದ ವ್ಯಕ್ತಿಯಾಗಿದ್ದು, ಜನಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದೇನೆ. ನನ್ನ ವೈಯಕ್ತಿಕ ಹಾಗು ರಾಜಕೀಯ ಬೆಳವಣಿಗೆಯನ್ನು ಸಹಿಸದ ಬಿ.ಎನ್ ರಾಜು ಎಂಬಾತ ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಘನತೆಗೆ ಕುಂದು ತರುವಂತೆ ಮಾಡಿ ಸುಳ್ಳು ಜಾತಿನಿಂದನೆ ದೂರು ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಾನೆ.
   ಈತ ಯಾವುದೇ ನೋಂದಾಯಿತ ಸಂಘ-ಸಂಸ್ಥೆ ಅಧ್ಯಕ್ಷನಾಗಿರದಿದ್ದರೂ ಸಹ ಅಧ್ಯಕ್ಷ ಎಂದು ಹೇಳಿಕೊಂಡು ರಾಜಕಾರಣಿಗಳು, ಉನ್ನತ ಸರ್ಕಾರಿ ಅಧಿಕಾರಿಗಳಿಗೆ ಬ್ಲಾಕ್‌ಮೇಲೆ ಮಾಡಿಕೊಂಡು ಬಂದಿರುತ್ತಾನೆ. ಜೊತೆಗೆ ಪೊಲೀಸ್ ಅಧಿಕಾರಿಗಳಿಗೂ ಸಹ ಬಹಿರಂಗವಾಗಿ ಅವಹೇಳನಕಾರಿಯಾಗಿ ನಿಂದಿಸಿಕೊಂಡು ಹಾಗು ಜಾತಿಯನ್ನು ದುರ್ಬಳಕೆ ಮಾಡಿಕೊಂಡು ಜಾತಿನಿಂದನೆ ಕೇಸು ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಾನೆ. ಅಲ್ಲದೆ ಈತ ಈ ಹಿಂದೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿ ಜೈಲು ಶಿಕ್ಷೆ ಸಹ ಅನುಭವಿಸಿರುತ್ತಾನೆ. ಅಲ್ಲದೆ ಈತನ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ನ್ಯಾಯಾಲಯದಲ್ಲಿವೆ.
   ಈ ಹಿನ್ನಲೆಯಲ್ಲಿ ಈತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ನನಗೆ ರಕ್ಷಣೆ ನೀಡುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.