ಜನಾಕ್ರೋಶ ಬೃಹತ್ ಪ್ರತಿಭಟನೆ ಯಶಸ್ವಿಗೆ ಕರೆ
ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ನಿವಾಸಕ್ಕೆ ಪಕ್ಷದ ಜಿಲ್ಲಾ ಮುಖಂಡರೊಂದಿಗೆ ಖುದ್ದಾಗಿ ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದೃವನಾರಾಯಣ್‌ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು
ಭದ್ರಾವತಿ, ಮಾ. ೧೨: ನಗರದಲ್ಲಿ ಆಯೋಜಿಸಲಾಗಿದ್ದ ಕಬಡ್ಡಿ ಪಂದ್ಯಾವಳಿಯ ಮುಕ್ತಾಯದ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರ ನಡುವೆ ನಡೆದಿರುವ ಗಲಾಟೆಗೆ ಸಂಬಂಧಿಸಿದಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಕುಟುಂಬ ಸದಸ್ಯರು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ದಾಖಲಿಸಿರುವ ಪ್ರಕರಣಗಳನ್ನು ಖಂಡಿಸಿ ಹಾಗು ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಗಳ ವಿರುದ್ಧ ಮಾ.೧೩ರಂದು ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿರುವ ಜನಾಕ್ರೋಶ ಬೃಹತ್ ಪ್ರತಿಭಟನೆ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದೃವನಾರಾಯಣ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹೆಚ್ಚಿನ ಬೆಂಬಲ ನೀಡಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲೆ ಉಳಿದುಕೊಂಡಿರುವ ದೃವನಾರಾಯಣ್ ಎಲ್ಲಾ ಸಿದ್ದತೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಶಾಸಕ ಬಿ.ಕೆ ಸಂಗಮೇಶ್ವರ್ ನಿವಾಸಕ್ಕೆ ಪಕ್ಷದ ಜಿಲ್ಲಾ ಮುಖಂಡರೊಂದಿಗೆ ಖುದ್ದಾಗಿ ಭೇಟಿ ನೀಡಿ ಗಲಾಟೆಗೆ ಸಂಬಂಧಿಸಿದಂತೆ ಇದುವರೆಗೂ ನಡೆದಿರುವ ಬೆಳವಣಿಗೆಗಳು ಹಾಗು ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಶಾಸಕರು ಹಾಗು ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿದ ದೃವನಾರಾಯಣ್ ನಂತರ ಪೂರ್ವಭಾವಿ ಸಭೆ ನಡೆಸುವ ಮೂಲಕ ಜನಾಕ್ರೋಶ ಬೃಹತ್ ಪ್ರತಿಭಟನೆ ಯಶಸ್ವಿಗೊಳಿಸಲು ಮುಂದಾಗುವಂತೆ ಕರೆ ನೀಡಿದರು.
ಪಕ್ಷದ ಜಿಲ್ಲಾಧ್ಯಕ್ಷ ಎಚ್.ಎಸ್ ಸುಂದರೇಶ್, ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಬ್ಲಾಕ್ ಕಾಂಗ್ರೆಸ್ ನಗರಸಭೆ ಅಧ್ಯಕ್ಷ ಟಿ. ಚಂದ್ರೇಗೌಡ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಮುಖಂಡ ಬಿ.ಎಸ್ ಗಣೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.