ಸರ್ವಾಧ್ಯಕ್ಷೆ ಡಾ. ವೀಣಾ ಎಸ್. ಭಟ್‌ಗೆ ಆಹ್ವಾನ
ಭದ್ರಾವತಿ, ಮಾ. ೨೧: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ತಾಲೂಕು ೬ನೇ ಶರಣ ಸಾಹಿತ್ಯ ಸಮ್ಮೇಳನ ಮಾ.೨೮ರಂದು ಹಮ್ಮಿಕೊಳ್ಳಲಾಗಿದ್ದು, ಈ ಬಾರಿ ಸಮ್ಮೇಳನಾಧ್ಯಕ್ಷರಾಗಿ ಸ್ತ್ರೀ ರೋಗ ತಜ್ಞೆ, ವೈದ್ಯ ಸಾಹಿತಿ ಡಾ. ವೀಣಾ ಎಸ್ ಭಟ್‌ರನ್ನು ಆಯ್ಕೆ ಮಾಡಲಾಗಿದೆ.
ತಾಲೂಕಿನಲ್ಲಿ ಶರಣ ಸಾಹಿತ್ಯ ಪರಿಷತ್ ವತಿಯಿಂದ ನಿರಂತರವಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದ್ದು, ಅದರಲ್ಲೂ ವಿಶೇಷವಾಗಿ ಶರಣ ಸಾಹಿತ್ಯ ಸಮ್ಮೇಳನ ಗಮನ ಸೆಳೆಯುತ್ತಿದೆ.
ಈ ಬಾರಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಗೆ ವಿಶೇಷತೆ ಎಂಬಂತೆ ಸಮ್ಮೇಳನಾಧ್ಯಕ್ಷರಾಗಿ ಡಾ. ವೀಣಾ ಎಸ್ ಭಟ್‌ರನ್ನು ಆಯ್ಕೆ ಮಾಡಿರುವುದು ಮತ್ತಷ್ಟು ವಿಶೇಷತೆಯಿಂದ ಕೂಡಿದೆ. ವೀಣಾ ಎಸ್ ಭಟ್‌ರವರು ವೈದ್ಯಕೀಯ ಕ್ಷೇತ್ರದಲ್ಲಿ ಮಾತ್ರವಲ್ಲದೆ, ಯೋಗ ಹಾಗು ವೈದ್ಯಕೀಯ ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದಾರೆ. ಇವರು ವೈದ್ಯಕೀಯ ಸಾಹಿತ್ಯದ ಹಲವು ಪುಸ್ತಕಗಳನ್ನು ಬಿಡುಗಡೆಗೊಳಿಸಿದ್ದಾರೆ. ಮಾಸ ಪತ್ರಿಕೆ, ವಾರ ಪತ್ರಿಕೆ ಹಾಗು ದಿನಪತ್ರಿಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸಿದ್ದಾರೆ.
ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ :
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಂ. ವಿರುಪಾಕ್ಷಪ್ಪ ನೇತೃತ್ವದಲ್ಲಿ ಭಾನುವಾರ ಸಮ್ಮೇಳನಾಧ್ಯಕ್ಷೆ ವೀಣಾ ಎಸ್ ಭಟ್‌ರನ್ನು ಅಧಿಕೃತವಾಗಿ ಆಹ್ವಾನಿಸಲಾಯಿತು.
ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ, ನೇತ್ರ ತಜ್ಞ ಡಾ. ಕುಮಾರಸ್ವಾಮಿ, ಕತ್ತಲಗೆರೆ ತಿಮ್ಮಪ್ಪ, ಮಲ್ಲಿಕಾರ್ಜುನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಚಿತ್ರ: ಡಿ೨೧-ಬಿಡಿವಿಟಿ೨
ಭದ್ರಾವತಿ ತಾಲೂಕು ೬ನೇ ಶರಣ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ ಡಾ. ವೀಣಾ ಎಸ್. ಭಟ್‌ರನ್ನು ಭಾನುವಾರ ಅಧಿಕೃತವಾಗಿ ಆಹ್ವಾನಿಸಲಾಯಿತು.