ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ
ಭದ್ರಾವತಿ ರಂಗಪ್ಪ ವೃತ್ತದಲ್ಲಿ ಬುಧವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ಮುಖಂಡರು ಮನ್ ಕೀ ಬಾತ್ ಸಾಕು ಲಸಿಕೆ ಬೇಕು, ಲಸಿಕೆ ರಾಜಕಾರಣ ನಿಲ್ಲಿಸಿ ಇತ್ಯಾದಿ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
ಭದ್ರಾವತಿ, ಜೂ. ೩೦: ಕೋವಿಡ್-೧೯ರ ಸಂಕಷ್ಟದ ಸಮಯದಲ್ಲಿ ಕೇಂದ್ರ ಹಾಗು ರಾಜ್ಯ ಬಿಜೆಪಿ ಸರ್ಕಾರಗಳು ಲಸಿಕಾ ರಾಜಕಾರಣ ನಡೆಸುತ್ತಿದ್ದು, ಪ್ರತಿಯೊಬ್ಬರಿಗೂ ಲಸಿಕೆ ನೀಡುವಲ್ಲಿ ವಿಫಲವಾಗಿವೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಮುಖಂಡರು ಆರೋಪಿಸಿದರು.
ಬುಧವಾರ ನಗರದ ರಂಗಪ್ಪ ವೃತ್ತದಲ್ಲಿ ಮನ್ ಕೀ ಬಾತ್ ಸಾಕು ಲಸಿಕೆ ಬೇಕು, ಲಸಿಕೆ ರಾಜಕಾರಣ ನಿಲ್ಲಿಸಿ ಇತ್ಯಾದಿ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಮುಖಂಡರು, ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಸಹ ಇದುವರೆಗೂ ಕೇಂದ್ರ ಹಾಗು ರಾಜ್ಯ ಬಿಜೆಪಿ ಸರ್ಕಾರಗಳು ಲಸಿಕೆ ನೀಡದೆ ನಿರ್ಲಕ್ಷ್ಯ ವಹಿಸಿವೆ. ತಕ್ಷಣ ಪ್ರತಿಯೊಬ್ಬರು ಲಸಿಕೆ ಹಾಕಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ನೇತೃತ್ವ ವಹಿಸಿದ್ದರು. ನಗರಸಭಾ ಸದಸ್ಯರಾದ ಜಾರ್ಜ್, ಆರ್. ಶ್ರೇಯಸ್, ಲತಾ ಚಂದ್ರಶೇಖರ್, ರಿಯಾಜ್ ಅಹಮದ್, ಮುಖಂಡರಾದ ಎಚ್.ಎಸ್ ಶಂಕರ್‌ರಾವ್, ಎಂ. ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳ ರಾಮಚಂದ್ರ, ಯುವ ಕಾಂಗ್ರೆಸ್ ಗ್ರಾಮಾಂತರ ಘಟಕ ಉಪಾಧ್ಯಕ್ಷ ಪ್ರವೀಣ್ ಕಲ್ಪನಹಳ್ಳಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.