Monday, August 30, 2021

ಕಟ್ಟಡ ಕಾರ್ಮಿಕರು ಕಡ್ಡಾಯವಾಗಿ ಗುರುತಿನ ಚೀಟಿ ಪಡೆಯಿರಿ : ಬಿ.ಕೆ ಮೋಹನ್

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದ ಸಮುದಾಯ ಭವನದಲ್ಲಿ ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ಸೆಂಟ್ರಲ್ ಯೂನಿಯನ್ ವತಿಯಿಂದ ಕೂಡ್ಲಿಗೆರೆ ಹಾಗು ಹರಳಿಹಳ್ಳಿ ಗ್ರಾಮದ ವ್ಯಾಪ್ತಿಯ ಕಟ್ಟಡ ಕಾರ್ಮಿಕರಿಗೆ ದಿನಸಿ ಸಾಮಗ್ರಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  
    ಭದ್ರಾವತಿ, ಆ. ೩೦: ಕಟ್ಟಡ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಕಡ್ಡಾಯವಾಗಿ ಗುರುತಿನ ಚೀಟಿ ಮಾಡಿಸಿಕೊಳ್ಳಬೇಕೆಂದು ನಗರಸಭಾ ಸದಸ್ಯ ಬಿ.ಕೆ ಮೋಹನ್ ಹೇಳಿದರು.
    ಅವರು ತಾಲೂಕಿನ ಕೂಡ್ಲಿಗೆರೆ ಗ್ರಾಮದ ಸಮುದಾಯ ಭವನದಲ್ಲಿ ಕರ್ನಾಟಕ ಸ್ಟೇಟ್ ಕನ್ಸ್‌ಸ್ಟ್ರಕ್ಷನ್ ಸೆಂಟ್ರಲ್ ಯೂನಿಯನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೂಡ್ಲಿಗೆರೆ ಹಾಗು ಹರಳಿಹಳ್ಳಿ ಗ್ರಾಮದ ವ್ಯಾಪ್ತಿಯ ಕಟ್ಟಡ ಕಾರ್ಮಿಕರಿಗೆ ದಿನಸಿ ಸಾಮಗ್ರಿ ವಿತರಿಸಿ ಮಾತನಾಡಿದರು.
    ಕಟ್ಟಡ ಕಾರ್ಮಿಕರು ಗುರುತಿನ ಚೀಟಿ ಹೊಂದುವುದರಿಂದ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ತಕ್ಷಣ ಪಡೆದುಕೊಳ್ಳಬಹುದಾಗಿದೆ. ಅರ್ಹ ಕಾರ್ಮಿಕರು ಸೌಲಭ್ಯಗಳಿಂದ ವಂಚಿತವಾಗಬಾರದು ಎಂದರು.
    ಯೂನಿಯನ್ ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಸಂಜಯ್‌ಕುಮಾರ್, ತಾಲೂಕು ಅಧ್ಯಕ್ಷ ಚಂದ್ರಶೇಖರ್, ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಲೂಕು ಕಾರ್ಯಾಧ್ಯಕ್ಷ ಅಭಿಲಾಷ್, ತಾಂತ್ರಿಕ ಸಲಹೆಗಾರ ಮನೋಹರ್, ಸಂಘಟನಾ ಕಾರ್ಯದರ್ಶಿ ಕುಮಾರ್, ಉಪಾಧ್ಯಕ್ಷ ನಾಗೇಂದ್ರರೆಡ್ಡಿ, ಕೂಡ್ಲಿಗೆರೆ ಭಾಗದ ಅಧ್ಯಕ್ಷ ರುದ್ರಮುನಿ, ತಾಲೂಕು ಗ್ರಾಮಾಂತರ ಅಧ್ಯಕ್ಷ ಹಬೀಬ್, ಶಿವಣ್ಣಗೌಡ ಹಾಗು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.


ನಗರಸಭೆ ವಾರ್ಡ್ ನಂ.೨೯ರ ಚುನಾವಣೆ : ೩ ಪಕ್ಷಗಳಿಂದ ಪ್ರಚಾರದ ಭರಾಟೆ

ಪಕ್ಷಗಳಿಗೆ ಗೆಲ್ಲುವ ಪ್ರತಿಷ್ಠೆ, ಉಳಿಸಿಕೊಳ್ಳುವ ತವಕ, ಅದೃಷ್ಟ ಪರೀಕ್ಷೆ


ಭದ್ರಾವತಿ ನಗರಸಭೆ ವಾಡ್ ನಂ.೨೯ರ ಚುನಾವಣೆ ಹಿನ್ನಲೆಯಲ್ಲಿ ಮತದಾರರನ್ನು ಸೆಳೆಯಲು ಮನೆ ಮನೆಗಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ ಎಂದು ಆರೋಪಿಸಿ ೩ ಪಕ್ಷಗಳ ನಡುವೆ ಸೋಮವಾರ ಸಂಜೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು.
    ಭದ್ರಾವತಿ, ಆ. ೩೦; ನಗರಸಭೆ ವಾರ್ಡ್ ನಂ.೨೯ರ ಚುನಾವಣೆ ಪ್ರಚಾರದ ಭರಾಟೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ೩ ಪಕ್ಷಗಳು ತೀವ್ರ ಪೈಪೋಟಿಗೆ ಮುಂದಾಗಿವೆ.
    ಸೆ.೩ರಂದು ಮತದಾನ ನಡೆಯಲಿದ್ದು, ಉಳಿದಿರುವ ೨ ದಿನಗಳಲ್ಲಿ ವ್ಯಾಪಕ ಪ್ರಚಾರಕ್ಕೆ ೩ ಪಕ್ಷಗಳು ಸಿದ್ದತೆಗಳನ್ನು ಕೈಗೊಂಡಿವೆ. ಈಗಾಗಲೇ ವಾರ್ಡ್ ವ್ಯಾಪ್ತಿಯಲ್ಲಿ ೩-೪ ಸುತ್ತಿನ ಪ್ರಚಾರ ನಡೆಸಲಾಗಿದೆ.
    ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆ ಗೆಲ್ಲುವುದು ಪ್ರತಿಷ್ಠೆಯಾಗಿದ್ದರೇ, ಜೆಡಿಎಸ್ ಪಕ್ಷಕ್ಕೆ ಉಳಿಸಿಕೊಳ್ಳುವ ತವಕ, ಈ ನಡುವೆ ಬಿಜೆಪಿ ಅದೃಷ್ಟ ಪರೀಕ್ಷೆಗೆ ಎದುರು ನೋಡುತ್ತಿದೆ. ೩ ಪಕ್ಷಗಳ ಅಭ್ಯರ್ಥಿಗಳು ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಕಾರಣ ಚುನಾವಣೆ ಮತ್ತಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
    ಇವೆಲ್ಲದರ ನಡುವೆ ಚುನಾವಣಾ ಅಕ್ರಮಗಳು ಸಹ ಹೆಚ್ಚಾಗುತ್ತಿದ್ದು, ಮತದಾರರನ್ನು ಸೆಳೆಯಲು ನಾನಾ ರೀತಿಯ ಅಕ್ರಮಗಳನ್ನು ನಡೆಸಲಾಗುತ್ತಿದೆ ಎಂಬ ದೂರುಗಳು ಸ್ಥಳೀಯರಿಂದ ಕೇಳಿ ಬರುತ್ತಿವೆ. ಅಕ್ರಮಗಳ ವಿಚಾರಕ್ಕೆ ಸಂಬಂಧಿಸಿದಂತೆ ೩ ಪಕ್ಷಗಳು ಪರಸ್ಪರ ದೋಷಾರೋಪಣೆಗಳನ್ನು ಮಾಡುತ್ತಿವೆ. ಅಲ್ಲದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ೩ ಪಕ್ಷಗಳ ಮುಖಂಡರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮಾಹಿತಿ ಅರಿತು ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು.

ದಲಿತ ಸಂಘರ್ಷ ಸಮಿತಿ ಮುಖಂಡರಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ


ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಹಾಗು ಪ್ರೊ. ಬಿ. ಕೃಷ್ಣಪ್ಪನವರ ೮೩ನೇ ಜನ್ಮದಿನ  ಅಂಗವಾಗಿ ಸೋಮವಾರ ಶಿವಮೊಗ್ಗ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೊದಲು ನೂರಾರು ದಲಿತ ಮುಖಂಡರು, ಕಾರ್ಯಕರ್ತರು ಭದ್ರಾವತಿ ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಬಳಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
    ಭದ್ರಾವತಿ, ಆ. ೩೦: ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಹಾಗು ಪ್ರೊ. ಬಿ. ಕೃಷ್ಣಪ್ಪನವರ ೮೩ನೇ ಜನ್ಮದಿನ  ಅಂಗವಾಗಿ ಸೋಮವಾರ ಶಿವಮೊಗ್ಗ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೊದಲು ನೂರಾರು ದಲಿತ ಮುಖಂಡರು, ಕಾರ್ಯಕರ್ತರು ನಗರದ ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಬಳಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
    ತಾಲೂಕು ಸಂಚಾಲಕ ರವಿನಾಯ್ಕ ಮಾತನಾಡಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ ಡಾ. ಬಿ.ಆರ್ ಅಂಬೇಡ್ಕರ್ ಹಾಗು ಪ್ರೊ. ಬಿ. ಕೃಷ್ಣಪ್ಪನವರ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.
    ತಾಲೂಕು ನಗರ ಸಂಚಾಲಕ ತಮ್ಮಯ್ಯ, ಸಂಘಟನಾ ಸಂಚಾಲಕರಾದ ಶಿವಾನಾಯಕ, ಮುತ್ತು, ಅಣ್ಣಪ್ಪ, ಜೀವಾ, ನರಸಿಂಹಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Sunday, August 29, 2021

ಬಿಳಿಕಿ ಹಿರೇಮಠಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠಕ್ಕೆ ಗೃಹ ಸಚಿವ ಅರಗಜ್ಞಾನೇಂದ್ರ ಭಾನುವಾರ ರಾತ್ರಿ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದರು.
    ಭದ್ರಾವತಿ, ಆ. ೨೯: ತಾಲೂಕಿನ ಬಿಳಿಕಿ ಹಿರೇಮಠಕ್ಕೆ ಗೃಹ ಸಚಿವ ಅರಗಜ್ಞಾನೇಂದ್ರ ಭಾನುವಾರ ರಾತ್ರಿ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದರು.
    ಹಿರೇಮಠದಲ್ಲಿ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ಜನ್ಮ ಸುವರ್ಣ ಮಹೋತ್ಸವ ಹಾಗು ಸುವರ್ಣ ಭವನ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ರಾತ್ರಿ ಆಗಮಿಸಿ ಶ್ರೀಗಳಿಗೆ ಹುಟ್ಟುಹಬ್ಬದ ಶುಭಕೋರಿದರು. ಈ ಸಂದರ್ಭದಲ್ಲಿ ಹಿರೇಮಠದ ಪ್ರಮುಖರು, ಸ್ಥಳೀಯ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಯುವ ಘಟಕದಿಂದ ಬಿಳಿಕಿ ಶ್ರೀಗಳಿಗೆ ಗುರು ನಮನ

ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ೫೦ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಭಾನುವಾರ ಶ್ರೀ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಶ್ರೀಗಳಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ವತಿಯಿಂದ ಗುರು ನಮನ ಸಲ್ಲಿಸಲಾಯಿತು.
    ಭದ್ರಾವತಿ, ಆ. ೨೯: ತಾಲೂಕಿನ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ೫೦ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಭಾನುವಾರ ಶ್ರೀ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಶ್ರೀಗಳಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ವತಿಯಿಂದ ಗುರು ನಮನ ಸಲ್ಲಿಸಲಾಯಿತು.
    ಯುವ ಘಟಕದ ರಾಜ್ಯಾಧ್ಯಕ್ಷ ಮನೋಹರ್ ಅಬ್ಲಿಗೆರೆ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ತಾಲೂಕು ಅಧ್ಯಕ್ಷ ಎಚ್. ಮಂಜುನಾಥ್, ಉಪಾಧ್ಯಕ್ಷರಾದ ಆರ್.ಎನ್ ರುದ್ರೇಶ್, ಬಿ.ಎಸ್ ಶ್ರೀಕಾಂತ್, ಮಹಾದೇವ, ಪ್ರಧಾನ ಕಾರ್ಯದರ್ಶಿ ಕೆ.ಆರ್ ಆನಂದ್, ಖಜಾಂಚಿ ಬಿ.ಎಂ ರಮೇಶ್, ಸಹ ಕಾರ್ಯದರ್ಶಿ ಬಸವರಾಜ, ತಿಪ್ಪೇಸ್ವಾಮಿ, ಆನಂದಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಧರ್ಮಮಾರ್ಗದಿಂದ ಮಾತ್ರ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಸಾಧ್ಯ : ಕೆ.ಎಸ್ ಈಶ್ವರಪ್ಪ

ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ಜನ್ಮ ಸುವರ್ಣ ಮಹೋತ್ಸವ ಹಾಗು ಸುವರ್ಣ ಭವನ ಉದ್ಘಾಟನಾ ಸಮಾರಂಭ ಪಂಚಾಯತ್ ರಾಜ್ ಹಾಗು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್ ಈಶ್ವರಪ್ಪ ನೆರವೇರಿಸಿದರು.
    ಭದ್ರಾವತಿ, ಆ. ೨೯: ಸಮಾಜದಲ್ಲಿನ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡು ಕೊಳ್ಳಬೇಕಾದರೆ ಎಲ್ಲರೂ ಧರ್ಮ ಮಾರ್ಗದಲ್ಲಿ ಸಾಗುವುದು ಅನಿವಾರ್ಯವಾಗಿದೆ ಎಂದು ಪಂಚಾಯತ್ ರಾಜ್ ಹಾಗು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
    ಅವರು ಭಾನುವಾರ ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ಜನ್ಮ ಸುವರ್ಣ ಮಹೋತ್ಸವ ಹಾಗು ಸುವರ್ಣ ಭವನ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದರು.
ಸಮಾಜದಲ್ಲಿ ನೂರಾರು ಸಮಸ್ಯೆಗಳಿದ್ದು, ಈ ನಡುವೆಯೂ ಮಠಮಂದಿರಗಳು ಸಮಾಜದ ಏಳಿಗೆಗಾಗಿ ಶ್ರಮಿಸುವ ಜೊತೆಗೆ ಉತ್ತಮ ಧರ್ಮ ಸಂಸ್ಕಾರ ನೀಡುತ್ತಿವೆ. ಧರ್ಮ ಮಾರ್ಗದಲ್ಲಿ ಸಾಗಿದರೆ ಮಾತ್ರ ಎಲ್ಲದಕ್ಕೂ ಪರಿಹಾರ ಕೊಂಡುಕೊಳ್ಳಬಹುದಾಗಿದೆ ಎಂದರು.
    ಗುರುಗಳು ತ್ಯಾಗಿಗಳಾಗಿದ್ದು, ಯಾವುದೇ ಸ್ವಾರ್ಥ ಬಯಸದೆ ಸಮಾಜಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡಿರುತ್ತಾರೆ. ಇಂತಹ ಗುರುಗಳಿಗೆ ಬೆಲೆಕಟ್ಟಲು ಸಾಧ್ಯವಿಲ್ಲ. ಸಮಾಜದ ಏಳಿಗೆಗಾಗಿ ಗುರುಗಳು ಹೇಳಿದಂತೆ ನಡೆದುಕೊಳ್ಳಲು ಸಿದ್ದ. ಬಿಳಿಕಿ ಶ್ರೀ ಮತ್ತು ಬೆಕ್ಕಿನ ಕಲ್ಮಠ ಶ್ರೀಗಳಿಗೆ ದೇವರು ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.
    ಬಿಳಿಕಿ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪೀಠಾಧಿಪತಿಯಾಗಿ ೩೧ ವರ್ಷಗಳು ಕಳೆದಿವೆ. ಯಾವುದೇ ಆದಾಯವಿಲ್ಲದಿದ್ದರೂ ಸಹ ಕೇವಲ ಅಂಚಿನ ಮನೆಯಲ್ಲಿದ್ದ ಮಠ ಇಂದು ಬೃಹದಾಗಿ ಬೆಳೆದಿದೆ. ಸಮಾಜದ ಪ್ರತಿಯೊಬ್ಬರು ಮಠದ ಬೆಳವಣಿಗೆಗೆ ಕಾರಣಕರ್ತರಾಗಿದ್ದಾರೆ. ಮಠವಿದ್ದರೆ ಸಮಾಜ, ಸಮಾಜವಿದ್ದರೆ ಮಠ ಎಂಬುದು ಈ ಮೂಲಕ ಸಾಬೀತು ಮಾಡಿ ತೋರಿಸಲಾಗಿದೆ ಎಂದರು.
    ದಿವ್ಯ ಸಾನಿಧ್ಯವಹಿಸಿದ್ದ ಶಿವಮೊಗ್ಗ ಆನಂದಪುರ ಶ್ರೀ ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ಮನೆಗೂ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಮಠಗಳು ಸಮಾಜ ಮುಖಿಯಾಗಿರಬೇಕು. ಸರ್ಕಾರ ಮಾಡುವ ಕೆಲಸಗಳನ್ನು ಮಠಮಂದಿರಗಳು ಮಾಡುತ್ತಿವೆ. ಈ ಹಿನ್ನಲೆಯಲ್ಲಿ ಮಠಮಂದಿರಗಳು ಸಹ ಬೆಳವಣಿಗೆ ಹೊಂದಬೇಕು. ಇವುಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರದ್ದಾಗಿದೆ ಎಂದರು.
    ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಜ್ಞಾನದ ಜೊತೆಗೆ ಉತ್ತಮ ಸಂಸ್ಕಾರ ಅವಶ್ಯಕವಾಗಿದೆ. ಮಠ ಮಂದಿರಗಳು ಪ್ರತಿಯೊಬ್ಬರಿಗೂ ಉತ್ತಮ ಸಂಸ್ಕಾರ ನೀಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ. ಮಾನವ ಕುಲದ ಕಲ್ಯಾಣಕ್ಕಾಗಿ ಶ್ರಮಿಸುತ್ತಿವೆ. ಆದರೆ ಸಮಾಜದಲ್ಲಿ ಕೆಲವರು ಧರ್ಮದ ಹೆಸರಿನಲ್ಲಿ ಅಪಪ್ರಚಾರ ನಡೆಸುತ್ತಿರುವುದು ವಿಷಾದನೀಯ ಬೆಳವಣಿಗೆಯಾಗಿದೆ ಎಂದರು.
    ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಶ್ರೀ ಜ್ಞಾನಪ್ರಭು ಸಿದ್ದರಾಮ ರಾಜದೇಶೀಕೇಂದ್ರ ಸ್ವಾಮೀಜಿ, ಶ್ರೀ ವಿರೂಪಾಕ್ಷ ಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ಮಹಾಂತ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ಗುದ್ದಲೀಶ್ವರ ಸ್ವಾಮೀಜಿ, ಡಾ. ಶ್ರೀ ಮಹಾಂತ ಸ್ವಾಮೀಜಿ, ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ,  ಶ್ರೀ ಚನ್ನವೀರ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಮರುಳಸಿದ್ದ ಶಿವಾಚಾರ್ಯ ಸ್ವಾಮೀಜಿ, ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಡಾ. ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಡಾ. ಶ್ರೀ ಬಸವಜಯಚಂದ್ರ ಸ್ವಾಮೀಜಿ, ಶ್ರೀ ಶಶಿಶೇಖರ ಸಿದ್ದಬಸವ ಸ್ವಾಮೀಜಿ ಮತ್ತು ಶ್ರೀ ಮರುಳಸಿದ್ದ ಪಂಡಿತಾರಾಧ್ಯ ಸ್ವಾಮೀಜಿ ಉಪಸ್ಥಿತರಿರುವರು.
    ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಇ ಕಾಂತೇಶ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ, ಹಿರೇಮಠದ ಗೌರವಾಧ್ಯಕ್ಷ ಟಿ.ವಿ ಈಶ್ವರಯ್ಯ, ಮನೋಹರ್ ಅಬ್ಲಿಗೆರೆ, ಸಿದ್ದಲಿಂಗಯ್ಯ, ಪಾಪಿಬಾಯಿ, ಬಿ.ಎಂ. ಸಂತೋಷ್, ಯಶವಂತರಾವ್ ಘೋರ್ಪಡೆ, ಎ. ಮಾಧು, ಬಿ.ಟಿ ನಾಗರಾಜ್, ಎಂ.ಎಸ್ ಜನಾರ್ಧನ ಅಯ್ಯಂಗಾರ್, ಎ.ಟಿ ರವಿ, ನಂದಿ ಮಲ್ಲಿಕಾರ್ಜುನ, ಡಾ.ಜಿ.ಎಂ ನಟರಾಜ್, ಪ್ರಶಾಂತ್, ಸಿದ್ದಬಸಪ್ಪ, ಎಂ.ಎಸ್ ಬಸವರಾಜ್, ವಸಂತ್, ಮಂಜುನಾಥ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.  



ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ಜನ್ಮ ಸುವರ್ಣ ಮಹೋತ್ಸವ ಹಾಗು ಸುವರ್ಣ ಭವನ ಉದ್ಘಾಟನಾ ಸಮಾರಂಭದಲ್ಲಿ ೫೦ ವರ್ಷ ಪೂರೈಸಿದ ಬಿಳಿಕಿ ಶ್ರೀ ಹಾಗೂ ೭೦ ವರ್ಷ ಪೂರೈಸಿದ ಬೆಕ್ಕಿನಕಲ್ಮಠ ಶ್ರೀಗಳಿಗೆ ಭಕ್ತ ವೃಂದದಿಂದ ಗುರು ನಮನ ಸಲ್ಲಿಸಲಾಯಿತು.  

Saturday, August 28, 2021

ಆ.೩೦ರಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಭದ್ರಾವತಿ, ಆ. ೨೮: ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನಲೆಯಲ್ಲಿ ನಗರಸಭಾ ವ್ಯಾಪ್ತಿಯಲ್ಲಿ ಆ.೩೦ರಂದು ಪ್ರಾಣಿವಧೆ, ಮಾಂಸ ಮಾರಾಟ ಹಾಗು ಮಾಂಸಹಾರ ತಯಾರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಕುರಿ, ಕೋಳಿ ಮತ್ತು ಇತರೆ ಮಾಂಸ ಮಾರಾಟಗಾರರು ಮಾಂಸ ಮಾರಾಟ ಮಾಡುವುದನ್ನು ಹಾಗು ಬಾರ್ & ರೆಸ್ಟೋರೆಂಟ್ ಮತ್ತು ಮಾಂಸಹಾರಿ ಹೋಟೆಲ್‌ಗಳಲ್ಲಿ ಮಾಂಸಹಾರ ತಯಾರಿಸುವುದನ್ನು ಸಹ ನಿಷೇಧಿಸಲಾಗಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ನಗರಸಭೆ ಪೌರಾಯುಕ್ತರು ಎಚ್ಚರಿಸಿದ್ದಾರೆ.