ಭದ್ರಾವತಿ ನಗರಸಭೆ ಹಾಗು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಶಾಖೆವತಿಯಿಂದ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಉದ್ಘಾಟಿಸಿದರು.
ಭದ್ರಾವತಿ, ಸೆ. ೨೩: ಪೌರ ಕಾರ್ಮಿಕರು ತಮ್ಮ ಮಕ್ಕಳ ಮುಂದಿನ ಭವಿಷ್ಯದ ಬಗ್ಗೆ ಚಿಂತಿಸುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗು ಶೈಕ್ಷಣಿಕವಾಗಿ ಬೆಳವಣಿಗೆ ಹೊಂದಬೇಕೆಂದು ಉಪವಿಭಾಗಾಧಿಕಾರಿ, ನಗಸಭೆ ಆಡಳಿತಾಧಿಕಾರಿ ಟಿ.ವಿ ಪ್ರಕಾಶ್ ಹೇಳಿದರು.
ಅವರು ಗುರುವಾರ ನಗರಸಭೆ ಹಾಗು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಶಾಖೆವತಿಯಿಂದ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಪೌರ ಕಾರ್ಮಿಕರು ಸಹ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು. ಅವರ ಮಕ್ಕಳು ಸಹ ಉನ್ನತ ಸ್ಥಾನಗಳನ್ನು ಅಲಂಕರಿಸುವಂತಾಗಬೇಕು. ಈ ನಿಟ್ಟಿನಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ನೀಡಬೇಕೆಂದರು.
ಪೌರ ಕಾರ್ಮಿಕರ ಸೇವೆ ಸಮಾಜದಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಪೌರಕಾರ್ಮಿಕರು ತಮ್ಮ ಕರ್ತವ್ಯದಲ್ಲಿ ಸುರಕ್ಷತೆಗೆ ಹೆಚ್ಚಿನ ಗಮನ ನೀಡಬೇಕು. ಸುರಕ್ಷತಾ ಸಲಕರಣೆಗಳನ್ನು ಕಡ್ಡಾಯವಾಗಿ ಬಳಸಬೇಕು. ಆರೋಗ್ಯದ ಕಡೆ ಹೆಚ್ಚಿನ ಹರಿಸಬೇಕೆಂದರು.
ನಗರಸಭಾ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ದೇಶದಲ್ಲಿ ಸೈನಿಕರು ಮತ್ತು ಪೌರಕಾರ್ಮಿಕರಿಗೆ ಸಮಾನವಾದ ಗೌರವ ನೀಡಬೇಕು. ಸೈನಿಕರು ದೇಶ ರಕ್ಷಣೆ ಮೂಲಕ ನಮ್ಮನ್ನು ರಕ್ಷಣೆ ಮಾಡುತ್ತಿದ್ದಾರೆ. ಪೌರಕಾರ್ಮಿಕರು ಸ್ವಚ್ಛ ಪರಿಸರ ನಿರ್ಮಾಣ ಮಾಡುವ ಮೂಲಕ ನಮ್ಮ ಆರೋಗ್ಯ ರಕ್ಷಣೆ ಮಾಡುತ್ತಿದ್ದಾರೆ. ಇವರಿಬ್ಬರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇವರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳು ಪ್ರಾಮಾಣಿಕವಾಗಿ ತಲುಪಬೇಕು. ಗುತ್ತಿಗೆದಾರರು ಸಹ ಪೌರಕಾರ್ಮಿಕರಿಗೆ ನೀಡಬೇಕಾದ ಪಿ.ಎಫ್, ಇಎಸ್‌ಐ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿಕೊಡಬೇಕು. ಸರ್ಕಾರ ಪೌರಕಾರ್ಮಿಕರಿಗೆ ಇನ್ನೂ ಹೆಚ್ಚಿನ ವೇತನ ನೀಡಬೇಕೆಂದು ಆಗ್ರಹಿಸಿದರು.
ಮುಂದಿನ ದಿನಗಳಲ್ಲಿ ಪೌರಕಾರ್ಮಿಕರ ದಿನಾಚರಣೆಗೆ ಶಾಸಕರು ವೈಯಕ್ತಿಕವಾಗಿ ೨೫ ಸಾವಿರ ರು. ಧನ ಸಹಾಯ ನೀಡಲಿದ್ದಾರೆ. ಉಳಿದಂತೆ ಎಲ್ಲಾ ನಗರಸಭಾ ಸದಸ್ಯರು ಸಹ ಎಲ್ಲಾ ರೀತಿಯ ಸಹಕಾರ ನೀಡಲಿದ್ದಾರೆ. ಪೌರಕಾರ್ಮಿಕರ ದಿನಾಚರಣೆ ಇನ್ನೂ ಅದ್ದೂರಿಯಾಗಿ ಆಚರಿಸುವಂತಾಗಬೇಕೆಂದರು.
ನಗರಸಭೆ ಕಂದಾಯಾಧಿಕಾರಿ ಎಂ.ಎಸ್ ರಾಜ್‌ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಪೌರಕಾರ್ಮಿಕರು ಸಹ ವೈದ್ಯರಂತೆ ದೇವರಿಗೆ ಸಮಾನ ಎಂದರೆ ತಪ್ಪಿಲ್ಲ. ಇಂತಹ ಪೌರಕಾರ್ಮಿಕರಿಗೆ ಸಮಾಜದಲ್ಲಿ ಗೌರವ ಸಿಗಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಮುಂದೆ ಬರುವಂತಹ ವಾತಾವರಣ ನಿರ್ಮಾಣ ಮಾಡಿಕೊಡಬೇಕಾದ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.
ತಹಸೀಲ್ದಾರ್ ಆರ್. ಪ್ರದೀಪ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷ ಮಂಜುನಾಥ್ ಹಾಗು ಪದಾಧಿಕಾರಿಗಳು, ನಗರಸಭಾ ಸದಸ್ಯರಾದ ಗೀತಾ ರಾಜ್‌ಕುಮಾರ್, ಶೃತಿ ವಂಸತ್, ಜಾರ್ಜ್, ಆರ್. ಶ್ರೇಯಶ್, ಬಿ.ಎಂ ಮಂಜುನಾಥ್, ಚನ್ನಪ್ಪ, ರಿಯಾಜ್ ಅಹಮದ್, ಅನುಸುಧಾ ಮೋಹನ್, ಮಂಜುಳ ಸುಬ್ಬಣ್ಣ, ಟಪ್ಪು ಸುಲ್ತಾನ್, ಬಸವರಾಜ ಬಿ. ಆನೆಕೊಪ್ಪ, ಜಯಶೀಲ ಸುರೇಶ್, ಕೋಟೇಶ್ವರರಾವ್, ಉದಯ್‌ಕುಮಾರ್, ಕಾಂತರಾಜ್, ಸೈಯದ್ ರಿಯಾಜ್, ಪಲ್ಲವಿ ದಿಲೀಪ್ , ಸವಿತಾ ಉಮೇಶ್, ಆರ್. ಮೋಹನ್‌ಕುಮಾರ್ ಮತ್ತು ಲತಾ ಚಂದ್ರಶೇಖರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಗರಸಭೆ ಪರಿಸರ ಅಭಿಯಂತರ ಪ್ರಭಾಕರ್ ಸ್ವಾಗತಿಸಿದರು. ಶಾಂತಕುಮಾರಿ ಪ್ರಾರ್ಥಿಸಿದರು. ನರಸಿಂಹಮೂರ್ತಿ ನಿರೂಪಿಸಿದರು. ಸಹಾಯಕ ಅಭಿಯಂತರ ಶ್ರೀರಂಗರಾಜಪುರೆ, ಸಮುದಾಯ ಸಂಘಟನಾಧಿಕಾರಿ ಎಂ. ಸುಹಾಸಿನಿ, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್, ಕಿರಿಯ ಅಭಿಯಂತರ ಎಸ್.ಆರ್. ಸತೀಶ್ ಸೇರಿದಂತೆ ನಗರಸಭೆ ಅಧಿಕಾರಿಗಳು, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಇದಕ್ಕೂ ಮೊದಲು ರಂಗಪ್ಪ ವೃತ್ತದಿಂದ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದ ವರೆಗೂ ಜಾಗೃತಿ ಜಾಥಾ ನಡೆಸಲಾಯಿತು.
ಭದ್ರಾವತಿ ನಗರಸಭೆ ಹಾಗು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಶಾಖೆವತಿಯಿಂದ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಹಿರಿಯ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.