Monday, November 1, 2021

ಭದ್ರಾವತಿ : ವಿವಿಧೆಡೆ ಕನ್ನಡ ರಾಜ್ಯೋತ್ಸವ

ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಸ್ಥಾನದ ಮುಂಭಾಗದಲ್ಲಿರುವ ಭದ್ರಾವತಿ ಪ್ರಜಾ ವಿಮೋಚನೆ ಸಂಘ (ಬಿ.ಪಿ.ಎಲ್ ಸಂಘ) ವತಿಯಿಂದ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
    ಭದ್ರಾವತಿ, ನ. ೧: ನಗರದ ವಿವಿಧೆಡೆ ೬೬ನೇ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು.
    ಕೋವಿಡ್-೧೯ರ ಹಿನ್ನಲೆಯಲ್ಲಿ ಕಳೆದ ೨ ವರ್ಷಗಳಿಂದ ರಂಗು ಕಳೆದುಕೊಂಡಿದ್ದ ಕನ್ನಡ ರಾಜ್ಯೋತ್ಸವ ಈ ಬಾರಿ ಎಲ್ಲೆಡೆ ಆಚರಿಸಲಾಗುತ್ತಿದ್ದು, ಬಹುತೇಕ ಸಂಘಟನೆಗಳು ನ.೧ರಂದೇ ರಾಜ್ಯೋತ್ಸವ ಆಚರಿಸುವ ಮೂಲಕ ಗಮನ ಸೆಳೆದವು.
       ಬಿ.ಪಿ.ಎಲ್ ಸಂಘ :
    ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಸ್ಥಾನದ ಮುಂಭಾಗದಲ್ಲಿರುವ ಭದ್ರಾವತಿ ಪ್ರಜಾ ವಿಮೋಚನೆ ಸಂಘ (ಬಿ.ಪಿ.ಎಲ್ ಸಂಘ) ವತಿಯಿಂದ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಬೆಳಿಗ್ಗೆ ಕನ್ನಡ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಧ್ವಜಾರೋಹಣ ನೆರವೇರಿಸಿ ಸಿಹಿ ಹಂಚಲಾಯಿತು.
    ಸಂಘದ ಗೌರವಾಧ್ಯಕ್ಷ ಎಸ್.ಕೆ ಸುಧೀಂದ್ರ , ಅಧ್ಯಕ್ಷ ಬಿ. ಜಗದೀಶ್, ಪ್ರಮುಖರಾದ ಎಂ. ರವಿಕುಮಾರ್, ಎ.ವಿ ಮುರುಳಿಕೃಷ್ಣ ಸೇರಿದಂತೆ ಸಂಘದ ಪದಾಧಿಕಾರಿಗಳು, ಸುತ್ತಮುತ್ತ ಅಂಗಡಿಮುಂಗಟ್ಟುಗಳ ವ್ಯಾಪಾರಸ್ಥರು, ಸ್ಥಳೀಯರು ಪಾಲ್ಗೊಂಡಿದ್ದರು.  

ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಭದ್ರಾವತಿ ತಾಲೂಕು ಶಾಖೆವತಿಯಿಂದ ೬೬ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

        ಎಸ್‌ಡಿಪಿಐ :
    ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ತಾಲೂಕು ಶಾಖೆವತಿಯಿಂದ ೬೬ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
    ತಾಲೂಕು ಶಾಖೆಯ ಪ್ರಮುಖರು ಸಂಘದ ಕಛೇರಿ ಮುಂಭಾಗ ಧ್ವಜಾರೋಹಣ ನೆರವೇರಿಸುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಿಸಿ ಗಮನ ಸೆಳೆದರು.


ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿಯಲ್ಲಿ ಕೇರಳ ಸಮಾಜಂ ಕಛೇರಿಯಲ್ಲಿ ೬೬ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
    ಕೇರಳ ಸಮಾಜಂ :
    ಪ್ರತಿ ವರ್ಷದಂತೆ ಈ ಬಾರಿ ಸಹ ಕೇರಳ ಸಮಾಜಂ ಕಛೇರಿಯಲ್ಲಿ ೬೬ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಸಮಾಜಂ ಅಧ್ಯಕ್ಷ ಗಂಗಾಧರ್, ಪ್ರಧಾನ ಕಾರ್ಯದರ್ಶಿ ಜಿ. ಸುರೇಶ್, ಖಜಾಂಚಿ ಎ.ಚಂದ್ರಶೇಖರ್, ಆರ್. ರಾಧಕೃಷ್ಣನ್, ಕೆ.ಸಿ ರಾಜಶೇಖರ್, ಹಾಗು ಮಹಿಳಾ ವಿಭಾಗಂ ಅಧ್ಯಕ್ಷೆ ವಿಜಯಲಕ್ಷ್ಮಿ, ಜಂಟಿ ಕಾರ್ಯದರ್ಶಿ ರೇಖಾ ಚಂದ್ರನ್, ಪ್ರೇಮ ವೇಲಾಯುದನ್, ಯಶೋಧ ಮತ್ತು ಶೈಲಜ ಸುರೇಶ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಸಂಘಟನೆಯಲ್ಲಿ ಒಗ್ಗಟ್ಟು ಮುಖ್ಯ : ಡಾ. ಅನುರಾಧ ಪಟೇಲ್

ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಭದ್ರಾವತಿ ಅಪ್ಪರ್ ಹುತ್ತಾದಲ್ಲಿರುವ ಶ್ರೀ ಕೆಂಪೇಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರ್ವ ಸದಸ್ಯೆಯರ ಮಹಾಸಭೆ ಹಾಗು ೬೬ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಘದ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್ ಉದ್ಘಾಟಿಸಿದರು.
    ಭದ್ರಾವತಿ, ನ. ೧: ಸಂಘಟನೆಯಲ್ಲಿ ಒಗ್ಗಟ್ಟು ಬಹಳ ಮುಖ್ಯವಾಗಿದ್ದು, ಯಾವುದೇ ಸಮಸ್ಯೆ ಇದ್ದರೂ ಸಹ ಪರಸ್ಪರ ನೇರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕೆಂದು ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್ ಹೇಳಿದರು.  
    ಅವರು ಸೋಮವಾರ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ನಗರದ ಅಪ್ಪರ್ ಹುತ್ತಾದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರ್ವ ಸದಸ್ಯೆಯರ ಮಹಾಸಭೆ ಹಾಗು ೬೬ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಸಂಘಟನೆಯಲ್ಲಿನ ಲೋಪದೋಷಗಳ ಬಗ್ಗೆ ಹೊರಗೆ ಮಾತನಾಡುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಇದರಿಂದ ಸಮಾಜಕ್ಕೆ ಬೇರೆ ರೀತಿಯ ಸಂದೇಶ ತಲುಪುತ್ತದೆ. ಎಲ್ಲಾ ಸಂಘಟನೆಗಳು ಒಳ್ಳೆಯ ಉದ್ದೇಶಗಳನ್ನು ಹೊಂದಿರುತ್ತವೆ. ಇದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಯಾವುದೇ ಸಮಸ್ಯೆಗಳಿದ್ದರೂ ಸಹ ನೇರವಾಗಿ ಚರ್ಚಿಸಿ ಬಗೆಹರಿಸಿಕೊಳ್ಳುವುದು ಸೂಕ್ತ ಎಂದರು.
  ವೇದಿಕೆ ವತಿಯಿಂದ ನವಂಬರ್ ೧ರಂದು ಕನ್ನಡ ರಾಜ್ಯೋತ್ಸವ ಆಚರಿಸುವ ಜೊತೆಗೆ ಸರ್ವ ಸದಸ್ಯರ ಸಭೆಯನ್ನು ಸಹ ನಡೆಸಿಕೊಂಡು ಬರುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಕನ್ನಡ ಭಾಷೆಗೆ ವಿಶಿಷ್ಟವಾದ ಶಕ್ತಿ, ಭವ್ಯ ಪರಂಪರೆ ಇದೆ. ಇದನ್ನು ಎಲ್ಲರು ಅರಿತುಕೊಂಡು ನೆಲ, ಜಲ, ಭಾಷೆಯ ಮೇಲಿನ ಅಭಿಮಾನಿ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.  
    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಮಾತನಾಡಿ, ಸಂಘಟನೆಯೊಳಗಿನ ಭಿನ್ನಾಭಿಪ್ರಾಯಗಳು ಯಾವುದೇ ಕಾರಣಕ್ಕೂ ಹೊರಗೆ ಬರಬಾರದು. ಯಾವುದೇ ಸಮಸ್ಯೆಗಳಿದ್ದರೂ ಸಹ ಒಗ್ಗಟ್ಟಾಗಿ ಮುನ್ನಡೆಯಬೇಕು. ಸಂಘಟನೆಗೆ ಅಗತ್ಯವಿರುವ ಎಲ್ಲಾ ಸಹಕಾರ ನೀಡಲು ಬದ್ದವಾಗಿದ್ದೇನೆ ಎಂದರು.
    ಸಂಘದ ಉಪಾಧ್ಯಕ್ಷೆ ಎಂ.ಬಿ ಸುಮ ಚಂದ್ರಶೇಖರ್ ವರದಿ ಮಂಡಿಸಿದರು.  ಕಾರ್ಯದರ್ಶಿ ಲತಾ ಪ್ರಭಾಕರ್, ಸಹ ಕಾರ್ಯದರ್ಶಿ ನಳಿನ ಶ್ರೀನಿವಾಸ್ ಮತ್ತು ಖಜಾಂಚಿ ಶಶಿಕಲಾ ಸೀತರಾಂ ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಸಂಘದ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ನಟ ಪುನೀತ್‌ರಾಜ್‌ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿ ಮೌನಾಚರಣೆ ನಡೆಸುವ ಗೌರವ ಸಲ್ಲಿಸಲಾಯಿತು.

ವಿಇಎಸ್ ವಿದ್ಯಾಸಂಸ್ಥೆಯಲ್ಲಿ ಯಶಸ್ವಿಯಾಗಿ ಜರುಗಿದ ಬೃಹತ್ ರಕ್ತ ದಾನ ಶಿಬಿರ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
    ಭದ್ರಾವತಿ, ನ. ೧: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ  ಚಾಲನೆ ನೀಡಿದರು.
    ವಿದ್ಯಾಸಂಸ್ಥೆಯ ಪದನಿಮಿತ್ತ ಅಧ್ಯಕ್ಷ ಸಿದ್ದಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ತಹಸೀಲ್ದಾರ್ ಆರ್. ಪ್ರದೀಪ್, ವಿದ್ಯಾಸಂಸ್ಥೆಯ ಅಧ್ಯಕ್ಷ ಬಿ.ಎಲ್ ರಂಗಸ್ವಾಮಿ, ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಸದಸ್ಯರಾದ ಬಿ.ಎಂ ಮಂಜುನಾಥ್, ಸುದೀಪ್ ಕುಮಾರ್, ಶೃತಿ ವಸಂತ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ವಿದ್ಯಾಸಂಸ್ಥೆ ಆಡಳಿತಾಧಿಕಾರಿ ರಾಕೇಶ್, ಸಹಾಯಕ ಆಡಳಿತಾಧಿಕಾರಿ, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ಪ್ರಮುಖರಾದ ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಎಸ್ ಮಹೇಶ್‌ಕುಮಾರ್, ಡಾ. ಜಿ.ಎಂ ನಟರಾಜ್, ರಾಜಪ್ಪ, ಎಂ.ಎಸ್ ಬಸವರಾಜ್, ಎಚ್.ಎಲ್ ಷಡಾಕ್ಷರಿ, ಬಸವಂತರಾವ್ ದಾಳೆ, ಯು. ಮಹಾದೇವಪ್ಪ, ಶ್ರೀಕಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಶಿಬಿರದಲ್ಲಿ ಪ್ರಮುಖರಾದ ತಹಸೀಲ್ದಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ, ಕಸಾಪ ತಾಲೂಕು ಅಧ್ಯಕ್ಷರು ಸೇರಿದಂತೆ ಸುಮಾರು ೫೦ ಮಂದಿ ರಕ್ತದಾನ ಮಾಡಿದರು.

ಭಾಷೆಯ ಮೇಲಿನ ಅಭಿಮಾನ ಹೊಂದುವವರೆಗೂ ಭಾಷೆಯ ಬೆಳವಣಿಗೆ ಅಸಾಧ್ಯ : ಸಂಗಮೇಶ್ವರ್

ಭದ್ರಾವತಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ೬೬ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭಾ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ, ನ. ೧: ಪ್ರತಿಯೊಬ್ಬರು ಸ್ವಯಂ ಪ್ರೇರಿತರಾಗಿ ನೆಲ, ಜಲ, ಭಾಷೆಯ ಮೇಲಿನ ಅಭಿಮಾನ ಹೊಂದುವವರೆಗೂ ಭಾಷೆಯ ಬೆಳವಣಿಗೆ ಅಸಾಧ್ಯ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ೬೬ನೇ ಕನ್ನಡ ರಾಜ್ಯೋತ್ಸವದಲ್ಲಿ ನಾಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
    ಕನ್ನಡ ಭಾಷೆ ನಮ್ಮ ಮಾತೃ ಭಾಷೆಯಾಗಿದ್ದು, ಮೊದಲು ಈ ಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಆಂಗ್ಲ ಭಾಷೆಯ ಮೇಲಿನ ವ್ಯಾಮೋಹದಿಂದಾಗಿ ಕನ್ನಡ ಭಾಷೆಯನ್ನು ಸಮೃದ್ಧವಾಗಿ ಕಟ್ಟಿ ಬೆಳೆಸುವಲ್ಲಿ ಅನೇಕ ಮಹನೀಯರು ನಡೆಸಿರುವ ಹೋರಾಟ ವ್ಯರ್ಥವಾಗದಂತೆ ನಾವುಗಳು ಎಚ್ಚರ ವಹಿಸಬೇಕಾಗಿದೆ. ನಾವು ಯಾವುದೇ ಭಾಷೆಯನ್ನು ವಿರೋಧಿಸಬಾರದು. ಎಲ್ಲಾ ಭಾಷೆಯನ್ನು ಕಲಿಯಬೇಕು. ಆದರೆ ಮೊದಲು ಈ ನಾಡಿನ ಭಾಷೆಯನ್ನು ನಾವುಗಳು ಕಲಿತುಕೊಳ್ಳುವ ಜೊತೆಗೆ ನಮ್ಮ ಮಕ್ಕಳಿಗೂ ಕಲಿಸಬೇಕು. ಆಗ ಮಾತ್ರ ಭವಿಷ್ಯದಲ್ಲಿ ಕನ್ನಡ ಭಾಷೆ ಮತ್ತಷ್ಟು ಸಮೃದ್ಧವಾಗಿ ಬೆಳೆಯಲು ಸಾಧ್ಯ ಎಂದರು.
    ಕನಕ ಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕನ್ನಡ ನಾಡು ಉದಯಿಸಲು ಕಾರಣಕರ್ತರಾದ ಎಲ್ಲಾ ಮಹನೀಯರನ್ನು ಸ್ಮರಿಸುವ ಮೂಲಕ ಪ್ರತಿಯೊಬ್ಬರೂ ನೆಲ, ಜಲ, ಭಾಷೆಯ ಮೇಲಿನ ಅಭಿಮಾನ ಬೆಳೆಸಿಕೊಳ್ಳಬೇಕೆಂದು ಕೆರೆ ನೀಡಿದರು.
ಇದಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಅಂಬೇಡ್ಕರ್ ವೃತ್ತದಿಂದ ತಾಯಿ ಶ್ರೀ ಭುವನೇಶ್ವರಿ ದೇವಿ ಭಾವಚಿತ್ರದೊಂದಿಗೆ ಹಾಗು ಡೊಳ್ಳು ಕುಣಿತ, ವೀರಗಾಸೆ ಹಾಗು ಶಾಲಾ ಮಕ್ಕಳೊಂದಿಗೆ ಕನಕ ಮಂಟಪ ಮೈದಾನದವರೆಗೂ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಗೆ ತಹಸೀಲ್ದಾರ್ ಆರ್. ಪ್ರದೀಪ್ ಚಾಲನೆ ನೀಡಿದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಎಪಿಎಂಸಿ ಅಧ್ಯಕ್ಷ ಲವೇಶ್‌ಗೌಡ,  ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ,  ಪೊಲೀಸ್ ಉಪಾಧೀಕ್ಷಕ ಸಾಹಿಲ್ ಬಾಗ್ಲ, ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಸದಸ್ಯರಾದ ಸರ್ವಮಂಗಳ, ಬಿ.ಕೆ ಮೋಹನ್, ಕಾಂತರಾಜ್, ಲತಾ ಚಂದ್ರಶೇಖರ್, ಶೃತಿ ವಸಂತ್, ಮಂಜುಳ ಸುಬ್ಬಣ್ಣ, ಅನುಪಮ ಚನ್ನೇಶ್, ಉದಯಕುಮಾರ್, ಬಿ.ಎಂ ಮಂಜುನಾಥ್, ಸುದೀಪ್ ಕುಮಾರ್, ಎಸ್.ಎಸ್ ಭೈರಪ್ಪ, ಮೋಹನ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಸ್ವಾಗತಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅಪೇಕ್ಷ ಮಂಜುನಾಥ್ ನಿರೂಪಸಿದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲಾ ಮಕ್ಕಳಿಂದ ನೃತ್ಯ ಪ್ರದರ್ಶನ ಪ್ರದರ್ಶನ ನಡೆಯಿತು.

Sunday, October 31, 2021

ತಾಲೂಕು ಆಡಳಿತದಿಂದ ಕನ್ನಡ ರಾಜ್ಯೋತ್ಸವ


    ಭದ್ರಾವತಿ, ಅ. ೩೧: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನ.೧ರಂದು ಹಳೇನಗರದ ಕನಕಮಂಟಪ ಮೈದಾನದಲ್ಲಿ ೬೬ನೇ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ.
    ಬೆಳಿಗ್ಗೆ ೮ ಗಂಟೆಗೆ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಅಂಬೇಡ್ಕರ್ ವೃತ್ತದಿಂದ ಕನಕ ಮಂಟಪ ಮೈದಾನದವರೆಗೂ ತಾಯಿ ಶ್ರೀ ಭುವನೇಶ್ವರಿ ದೇವಿ ಮೆರವಣಿಗೆ ಹಾಗು ೯ ಗಂಟೆಗೆ ಧ್ವಜಾರೋಹಣ ನಡೆಯಲಿದೆ.
    ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ ಅಶೋಕ್‌ನಾಯ್ಕ್ ಮೆರವಣಿಗೆಗೆ ಚಾಲನೆ ನೀಡಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
    ಸಚಿವ ಕೆ.ಎಸ್ ಈಶ್ವರಪ್ಪ, ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಸಿ.ಎಂ. ಇಬ್ರಾಹಿಂ, ಆರ್. ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಎಸ್. ರುದ್ರೇಗೌಡ, ಭಾರತಿಶೆಟ್ಟಿ, ಎಪಿಎಂಸಿ ಅಧ್ಯಕ್ಷ ಲವೇಶ್‌ಗೌಡ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅಪೇಕ್ಷ ಮಂಜುನಾಥ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ತಹಸೀಲ್ದಾರ್ ಆರ್. ಪ್ರದೀಪ್, ಪೊಲೀಸ್ ಉಪಾಧೀಕ್ಷಕ ಸಾಹಿಲ್ ಬಾಗ್ಲ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ ಗಾಮನಘಟ್ಟಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚುಂಚಾದ್ರಿ ಮಹಿಳಾ ವೇದಿಕೆ ಸರ್ವ ಸದಸ್ಯರ ಸಭೆ, ಕನ್ನಡ ರಾಜ್ಯೋತ್ಸವ

    ಭದ್ರಾವತಿ, ಅ. ೩೧: ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ನ.೧ರಂದು ಬೆಳಿಗ್ಗೆ ೧೦.೩೦ಕ್ಕೆ ಅಪ್ಪರ್ ಹುತ್ತಾದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ಸರ್ವ ಸದಸ್ಯೆಯರ ಮಹಾಸಭೆ ಹಾಗು ೬೬ನೇ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ.
    ಸಂಘದ ಗೌರವಾಧ್ಯಕ್ಷೆ ಡಾ. ಅನುರಾಧ ಪಟೇಲ್ ಸಭೆ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಸಂಘದ ಉಪಾಧ್ಯಕ್ಷೆ ಎಂ.ಬಿ ಸುಮ ಚಂದ್ರಶೇಖರ್, ಕಾರ್ಯದರ್ಶಿ ಲತಾ ಪ್ರಭಾಕರ್, ಸಹ ಕಾರ್ಯದರ್ಶಿ ನಳಿನ ಶ್ರೀನಿವಾಸ್ ಮತ್ತು ಖಜಾಂಚಿ ಶಶಿಕಲಾ ಸೀತರಾಂ ಉಪಸ್ಥಿತರಿರುವರು.
    ಸಂಘದ  ಅಧ್ಯಕ್ಷೆ ಎಂ.ಎಸ್ ಸುಧಾಮಣಿ ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದು, ಸದಸ್ಯೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.  

ಬಂಡವಾಳಶಾಹಿಗಳಿಗೆ ಮಣೆ ಹಾಕಿರುವ ಕೇಂದ್ರ ಸರ್ಕಾರ : ಡಾ.ಕೆ ಪ್ರಕಾಶ್ ಆರೋಪ

ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಭಾರತ ಕಮ್ಯುನಿಸ್ಟ್ ಪಕ್ಷದ ೨೩ನೇ ಜಿಲ್ಲಾ ಸಮ್ಮೇಳನವನ್ನು ರಾಜ್ಯ ಸಮಿತಿ ಸದಸ್ಯ ಡಾ. ಕೆ. ಪ್ರಕಾಶ್ ಉದ್ಘಾಟಿಸಿ ಮಾತನಾಡಿದರು.
    ಭದ್ರಾವತಿ, ಅ. ೩೧: ಕೇಂದ್ರ ಸರ್ಕಾರ ದೇಶದಲ್ಲಿ ಬಂಡವಾಳಶಾಹಿಗಳಿಗೆ ಮಣೆ ಹಾಕುವ ಮೂಲಕ  ಶ್ರೀಸಾಮಾನ್ಯರ ಬಗೆಗಿನ ಕಾಳಜಿಯಿಂದ ವಿಮುಖವಾಗುತ್ತಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ರಾಜ್ಯ ಸಮಿತಿ ಸದಸ್ಯ ಡಾ. ಕೆ. ಪ್ರಕಾಶ್ ಆರೋಪಿಸಿದರು.
    ಅವರು ಭಾನುವಾರ ನಗರದ ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತ ಕಮ್ಯುನಿಸ್ಟ್ ಪಕ್ಷದ ೨೩ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
    ಕಳೆದ ೨ ವರ್ಷಗಳಿಂದ ಮಹಾಮಾರಿ ಕೋವಿಡ್-೧೯ರ ಪರಿಣಾಮ ಪ್ರಪಂಚದಾದ್ಯಂತ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಸೇರಿದಂತೆ ಶ್ರೀಸಾಮಾನ್ಯರಿಗೆ ಅಗತ್ಯವಿರುವ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಈಗಲೂ ತೆರಿಗೆ ಪ್ರಮಾಣ ಇಳಿಸಿ ಶ್ರೀಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಚಿಂತಿಸದೆ ಬಂಡವಾಳಶಾಹಿಗಳ ಪರವಾಗಿ ನಡೆದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ದೇಶದಲ್ಲಿ ಬಂಡವಾಳಶಾಹಿಗಳಿಗೆ ಮಣೆಹಾಕುತ್ತಿರುವ ಪರಿಣಾಮ ಎಲ್ಲಾ ಕ್ಷೇತ್ರಗಳು ಬಂಡವಾಳಶಾಹಿಗಳ ಹಿಡಿತಕ್ಕೆ ಒಳಗಾಗುತ್ತಿವೆ. ಹಂತ ಹಂತವಾಗಿ ಬಂಡವಾಳಶಾಹಿಗಳು ತಮ್ಮ ಪ್ರಾಬಲ್ಯ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ದೇಶದಲ್ಲಿ ಶ್ರೀಸಾಮಾನ್ಯರು ಹಲವು ರೀತಿಯ ಸಂಕಷ್ಟಗಳನ್ನು ಎದುರಿಸುವಂತಾಗಿದೆ ಎಂದರು. ಪ್ರಸ್ತುತ ಕೋವಿಡ್ ಲಸಿಕೆ ನೀಡುವ ವಿಚಾರದಲ್ಲೂ ಕೇಂದ್ರ ಸರ್ಕಾರ ನಿರ್ಲಕ್ಷ್ಯತನ ವಹಿಸುತ್ತಿದೆ. ದೇಶದಲ್ಲಿ ಎಲ್ಲರಿಗೂ ೧ ಮತ್ತು ೨ನೇ ಡೋಸ್ ಲಸಿಕೆ ನೀಡುವುದು ಅನಿವಾರ್ಯವಾಗಿದೆ. ಆದರೆ ಇದೀಗ ನಿಗದಿತ ಸಮಯದಲ್ಲಿ ಅಗತ್ಯವಿರುವಷ್ಟು ಲಸಿಕೆ ಒದಗಿಸಿಟ್ಟುಕೊಳ್ಳುವಲ್ಲಿ ಹಿನ್ನಡೆ ಅನುಭವಿಸುತ್ತಿದೆ ಎಂದು ಆರೋಪಿಸಿದರು.
    ಜಿಲ್ಲಾ ಸಮಿತಿ ಸದಸ್ಯ, ನ್ಯಾಯವಾದಿ ಜಿ.ಎಸ್ ನಾಗರಾಜ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಮಿತಿ ಕಾರ್ಯರ್ಶಿ ಎಂ. ನಾರಾಯಣ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಿಲ್ಲಾ ಸಮಿತಿ ಸದಸ್ಯ ಅನಂತರಾಮು ಸ್ವಾಗತಿಸಿದರು.
    ಸಿಪಿಐ(ಎಂ) ಜಿಲ್ಲಾ ಸಮಿತಿ ಸದಸ್ಯರಾದ ಕೆ. ಪ್ರಭಾಕರನ್ ಮತ್ತು ಕೆ. ಮಂಜಣ್ಣ,  ಬಿಸಿಯೂಟ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಮ್ಮ, ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷೆ ತುಳಸಿ ಪ್ರಭಾ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿರಿತರಿದ್ದರು.