ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಭದ್ರಾವತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಗೃಹ ಕಛೇರಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಾಣಿ ಅಭಿಯಾನದ ಸಮಗ್ರ ಮಾಹಿತಿ ಸಂಗ್ರಹ ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿದರು.
ಭದ್ರಾವತಿ, ಏ. ೫: ಮುಂಬರುವ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಬದಲಾವಣೆ ತರಬೇಕು. ಇಲ್ಲವಾದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಳವಾಗುವ ಮೂಲಕ ಊರು ಬಿಡಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ಅವರು ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಗೃಹ ಕಛೇರಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಾಣಿ ಅಭಿಯಾನದ ಸಮಗ್ರ ಮಾಹಿತಿ ಸಂಗ್ರಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದಿನ ಸರ್ಕಾರ ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿತ್ತು. ಆದರೆ ಇದುವರೆಗೂ ದ್ವಿಗುಣಗೊಂಡಿಲ್ಲ. ಉದ್ಯೋಗ ಸೃಷ್ಟಿಸುವ ಭರವಸೆ ನೀಡಿತ್ತು. ಆದರೆ ಯಾವುದೇ ಉದ್ಯೋಗ ಸೃಷ್ಟಿಯಾಗಿಲ್ಲ. ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಕಾರ್ಖಾನೆ ಸ್ಥಾಪನೆಗೊಂಡಿಲ್ಲ ಎಂದು ಆರೋಪಿಸಿದರು.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಧಾರ್ಮಿಕ ವಿಚಾರಗಳಲ್ಲಿ ಗೊಂದಲ ಸೃಷ್ಟಿಸುವ ಮೂಲಕ ಆಶಾಂತಿ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆ ಮುಂದುವರೆದು ನಿರುದ್ಯೋಗಿಗಳು ಉದ್ಯೋಗಕ್ಕಾಗಿ ಸೌದಿ, ಮುಂಬೈ, ಬೆಂಗಳೂರು ಸೇರಿದಂತೆ ಇತರೆಡೆ ವಲಸೆ ಹೋಗುತ್ತಿದ್ದಾರೆ. ಈ ಪರಿಸ್ಥಿತಿ ಶಿವಮೊಗ್ಗ ಜಿಲ್ಲೆಗೂ ವ್ಯಾಪಿಸುವ ಲಕ್ಷಣಗಳು ಕಂಡು ಬರುತ್ತಿವೆ. ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯಲ್ಲೂ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದಂತೆ ಆಶಾಂತಿ ವಾತಾವರಣ ನಿರ್ಮಾಣಗುತ್ತಿದ್ದು, ಇಲ್ಲಿನ ಜನರು ಎಚ್ಚೆತ್ತುಕೊಳ್ಳಬೇಕು. ಮುಂದಿನ ಚುನಾವಣೆಯಲ್ಲಿ ಬದಲಾವಣೆ ತರಬೇಕೆಂದರು.
ಕಾಂಗ್ರೆಸ್ ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸುವ ಉದ್ದೇಶದಿಂದ ರಾಜ್ಯಾದ್ಯಂತ ಡಿಜಿಟಲ್ ಸದಸ್ಯತ್ವ ನೋಂದಾಣಿಗೆ ಚಾಲನೆ ನೀಡಲಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ನಿರೀಕ್ಷೆಗೂ ಮೀರಿ ಸದಸ್ಯತ್ವ ನೋಂದಾಣಿ ನಡೆದಿದ್ದು, ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಹೆಚ್ಚಿನ ಶ್ರಮವಹಿಸುವಂತೆ ಮನವಿ ಮಾಡಿದರು.
ಶಾಸಕ ಬಿ.ಕೆ ಸಂಗಮೇಶ್ವರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್, ಮಾಜಿ ಸಂಸದ ಧ್ರುವ ನಾರಾಯಣ, ವಿಧಾನಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನಕುಮಾರ್, ಆರ್. ವಿ ವೆಂಕಟೇಶ್, ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರಗೌಡ, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ಸೇರಿದಂತೆ ಪಕ್ಷದ ನಗರಸಭೆ, ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು.