ಭದ್ರಾವತಿಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ, ಏ. ೨೨: ಮನುಷ್ಯನಿಗೆ ಆರೋಗ್ಯವೇ ಭಾಗ್ಯ. ಆರೋಗ್ಯವಿಲ್ಲದಿದ್ದರೆ ಏನನ್ನು ಸಹ ಸಾಧಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಆರೋಗ್ಯ ಮೇಳ ಆಯೋಜನೆ ಮಾಡುವ ಮೂಲಕ ಆರೋಗ್ಯದ ಬಗ್ಗೆ ಅರಿವು ಮೂಡಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಅವರು ಶುಕ್ರವಾರ ಆರೋಗ್ಯ ಇಲಾಖೆ ವತಿಯಿಂದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಜಾಗೃತಿ ಹೊಂದಬೇಕು. ಇಲ್ಲವಾದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ಸರ್ಕಾರ ಹಲವಾರು ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದೆ. ಇವುಗಳ ಸದುಪಯೋಗಪಡೆದುಕೊಳ್ಳಬೇಕೆಂದರು.
ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಮಾತನಾಡಿ, ನಮ್ಮ ಆರೋಗ್ಯ ರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ. ಇಂದು ನಾವು ನಮ್ಮ ಮನೆಗಳಲ್ಲಿ ಬೇಕರಿ ಹಾಗು ಹೊರಗಿನಿಂದ ತಂದ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಬಳಸುತ್ತಿದ್ದೇವೆ. ಮಹಿಳೆಯರು ಮನೆಗಳಲ್ಲಿ ತಮಗೆ ಲಭ್ಯವಿರುವ ಸೊಪ್ಪು, ತರಕಾರಿ, ಬೇಳೆ-ಕಾಳುಗಳನ್ನು ಬಳಸಿ ರುಚಿ ಹಾಗು ಶುಚಿಯಾದ ಗುಣಮಟ್ಟದ ಆಹಾರ ಸಿದ್ದಪಡಿಸಿ ಮಕ್ಕಳಿಗೆ ನೀಡಬೇಕು. ಇದರಿಂದ ಆರೋಗ್ಯ ರಕ್ಷಣೆ ಸಾಧ್ಯ. ಇವುಗಳ ಜೊತೆಗೆ ಮಹಿಳೆಯರು ಹೆಚ್ಚಾಗಿ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು. ಮಹಿಳೆಯರು ಆರೋಗ್ಯವಾಗಿದ್ದಾಗ ಮಾತ್ರ ಕುಟುಂಬದಲ್ಲಿ ಎಲ್ಲರೂ ಆರೋಗ್ಯದಿಂದ ಇರಲು ಸಾಧ್ಯ ಎಂದರು.
ಉಪಾಧ್ಯಕ್ಷ ಚನ್ನಪ್ಪ ಮಾತನಾಡಿ, ನಮ್ಮ ದೇಶದಲ್ಲಿ ಪ್ರತಿಯೊಬ್ಬರಿಗೂ ಉಚಿತ ಆರೋಗ್ಯ ಮತ್ತು ಶಿಕ್ಷಣ ಈ ಎರಡು ಸಮರ್ಪಕವಾಗಿ ಲಭಿಸಿದರೆ ಮಾತ್ರ ದೇಶ ಪ್ರಗತಿ ಕಾಣಲು ಸಾಧ್ಯ. ಅಲ್ಲದೆ ಆರೋಗ್ಯವಂತರು ಈ ದೇಶದ ಆಸ್ತಿ. ಅರೋಗ್ಯ ಹಾಳುಮಾಡಿಕೊಂಡವರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಬೇಕಾಗುತ್ತದೆ. ದೇಶದಲ್ಲಿ ಸರ್ಕಾರಿ ಆಸ್ಪತ್ರೆಗಳು, ಸರ್ಕಾರಿ ಶಾಲೆಗಳು ಉಳಿಯಬೇಕೆಂದರು.
ಹಿರಿಯ ವೈದ್ಯಾಧಿಕಾರಿ ಡಾ. ಗುಡದಪ್ಪ ಕಸಬಿ ಪ್ರಾಸ್ತಾವಿಕ ನುಡಿಗಳನ್ನಾಡಿ, ಇಂದು ನಾವುಗಳು ಆರೋಗ್ಯವನ್ನು ನಿರ್ಲಕ್ಷ್ಯ ಮಾಡಿರುವ ಹಿನ್ನೆಲೆಯಲ್ಲಿ ಅತಿಚಿಕ್ಕವಯಸ್ಸಿನಲ್ಲಿಯೇ ಸಾವು ನೋವುಗಳನ್ನು ಎದುರಿಸುವಂತಾಗಿದೆ. ಆರೋಗ್ಯ ಬಗ್ಗೆ ಎಚ್ಚರ ವಹಿಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಆರೋಗ್ಯ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು.
ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ತಹಸೀಲ್ದಾರ್ ಆರ್. ಪ್ರದೀಪ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕರ್ನಾಟಕ ನಗರ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ನಗರಸಭಾ ಸದಸ್ಯರಾದ ಅನುಸುಧಾ ಮೋಹನ್, ಕಾಂತರಾಜ್, ಜಾರ್ಜ್, ರಿಯಾಜ್ ಅಹಮದ್, ಸರ್ವಮಂಗಳ, ಲತಾ ಚಂದ್ರಶೇಖರ್, ಸವಿತಾ ಉಮೇಶ್, ಶಶಿಕಲಾ ನಾರಾಯಣಪ್ಪ, ಎಂ. ಪ್ರಭಾಕರ್, ಕರಿಗೌಡ ಹಾಗು ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅನುಷಾ, ರಾಮನಾಥ್ ಬರ್ಗೆ, ಕೃಷ್ಣಮೂರ್ತಿ, ಗಣೇಶ್‌ರಾವ್, ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಡಾ. ಶಂಕರಪ್ಪ, ಡಾ. ಓ. ಮಲ್ಲಪ್ಪ, ಡಾ. ಶಿವಪ್ರಸಾದ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಿರಿಯ ವೈದ್ಯಾಧಿಕಾರಿ ಡಾ. ಗುಡದಪ್ಪ ಕಸಬಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಸ್ವಾಗತಿಸಿದರು. ನೆಹರೂ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ವಂದಿಸಿದರು. ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು, ವಿವಿಧ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು, ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಮೇಳದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವಿಭಾಗಗಳಿಂದ ಹಾಗು ಶಿಶು ಅಭಿವೃದ್ಧಿ ಇಲಾಖೆ ವತಿಯಿಂದ ವಸ್ತು ಪ್ರದರ್ಶನ ಆಯೋಜಿಸಲಾಗಿತ್ತು.
ಭದ್ರಾವತಿಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳದಲ್ಲಿ ನಗರಸಭೆ ಉಪಾಧ್ಯಕ್ಷ ಚನ್ನಪ್ಪ ವಸ್ತು ಪ್ರದರ್ಶನ ಉದ್ಘಾಟಿಸಿದರು.