ಭದ್ರಾವತಿ ಕಾಗದನಗರದ ಆಂಗ್ಲ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ವ್ಯಸನ ಮತ್ತು ಕಳ್ಳ ಸಾಗಣೆ ವಿರುದ್ಧ ಜಾಗೃತಿ ಮಾಸಾಚರಣೆ ಕಾರ್ಯಕ್ರಮವನ್ನು ಪೇಪರ್‌ಟೌನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಇ.ಓ ಮಂಜುನಾಥ್ ಉದ್ಘಾಟಿಸಿ ಮಾತನಾಡಿದರು.
ಭದ್ರಾವತಿ, ಜೂ. ೨೬: ಮಾದಕ ವಸ್ತುಗಳ ಸೇವನೆಯಿಂದಾಗಿ ಸಮಾಜದಲ್ಲಿ ಕಾನೂನು ಬಾಹಿರ ಕೃತ್ಯಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಯುವ ಸಮೂಹ ದಾರಿ ತಪ್ಪುವಂತಾಗಿದೆ ಎಂದು ಪೇಪರ್‌ಟೌನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಇ.ಓ ಮಂಜುನಾಥ್ ಆತಂಕ ವ್ಯಕ್ತಪಡಿಸಿದರು.
ಅವರು ಕಾಗದನಗರದ ಆಂಗ್ಲ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ವ್ಯಸನ ಮತ್ತು ಕಳ್ಳ ಸಾಗಣೆ ವಿರುದ್ಧ ಜಾಗೃತಿ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಾದಕ ವಸ್ತುಗಳ ಸೇವನೆ ಚಟಕ್ಕೆ ಒಳಗಾದವರನ್ನು ಗುರಿಯಾಗಿಸಿಕೊಂಡು ಕಳ್ಳ ಸಾಗಣೆದಾರರು ಅಕ್ರಮವಾಗಿ ಮಾದಕ ವಸ್ತುಗಳನ್ನು ದೇಶಕ್ಕೆ ಸಾಗಾಣೆ ಮಾಡಿಕೊಳ್ಳುವ ಮೂಲಕ ದೇಶದ ಯುವ ಶಕ್ತಿಗೆ ಮಾರಕವಾಗುತ್ತಿದ್ದಾರೆ. ಮಾದಕ ವಸ್ತುಗಳ ಬಳಕೆ ಮತ್ತು ಅವುಗಳ ಕಳ್ಳ ಸಾಗಣೆ ಜಾಗತಿಕ ಸಮಸ್ಯೆಯಾಗಿದ್ದು, ಯುವಕರು ಜಾಗೃತರಾಗಿ ಇದರ ವಿರುದ್ಧ ಹೋರಾಟ ನಡೆಸಬೇಕೆಂದು ಕರೆ ನೀಡಿದರು.
ಎಂಪಿಎಂ ಶಿಕ್ಷಣ ಸಂಸ್ಥೆ ಖಜಾಂಚಿ ರವಿಕುಮಾರ್ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದಾಗಿ ಯುವ ಸಮುದಾಯ ಹಲವು ಕಾಯಿಲೆಗಳಿಗೆ ತುತ್ತಾಗುವ ಜೊತೆಗೆ ಸಮಾಜದಲ್ಲಿ ದಾರಿ ತಪ್ಪುವಂತಾಗುತ್ತದೆ. ಈ ಹಿನ್ನಲೆಯಲ್ಲಿ ಎಚ್ಚರ ವಹಿಸುವ ಮೂಲಕ ಮಾದಕ ವಸ್ತುಗಳಿಂದ ದೂರವಿರಬೇಕೆಂದರು.
ಪ್ರಾಂಶುಪಾಲ ಆರ್. ಸತೀಶ್ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಡಿ. ನಾಗರಾಜ್ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗು ಚಿತ್ರಕಲಾ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಿಕ್ಷಕರಾದ ಹೆನ್ರಿ, ಅನುರಾಧ, ದಿವ್ಯ, ವರಲಕ್ಷ್ಮಿ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.