Thursday, December 29, 2022

ನೂತನ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಿ

ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ನಾಮಕರಣಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆಆರ್‌ಎಸ್) ಗುರುವಾರ ಭದ್ರಾವತಿಯಲ್ಲಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.
    ಭದ್ರಾವತಿ, ಡಿ. ೨೯: ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ನಾಮಕರಣಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆಆರ್‌ಎಸ್) ಗುರುವಾರ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.
    ಪಕ್ಷದ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ೧೧೯ನೇ ಜನ್ಮದಿನ ಆಚರಿಸಲಾಗುತ್ತಿದ್ದು, ಕನ್ನಡನಾಡು ಅದರಲ್ಲೂ ಶಿವಮೊಗ್ಗ ಜಿಲ್ಲೆಗೆ ಕುವೆಂಪು ಅವರ ಕೊಡುಗೆ ಅನನ್ಯವಾಗಿದೆ. ಸಮಸ್ತ ಜನತೆ ಪರವಾಗಿ ಹುಟ್ಟುಹಬ್ಬದ ಶುಭಾಶಯಗಳೊಂದಿಗೆ ಅವರ ಹೆಸರನ್ನು ಅಜರಾಮರವಾಗಿಸುವ ನಿಟ್ಟಿನಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ಹೆಸರನ್ನು ನಾಮಕರಣಗೊಳಿಸುವಂತೆ ಕೋರಿದೆ.
    ತಹಸೀಲ್ದಾರ್ ಗ್ರೇಡ್-೨ ರಂಗಮ್ಮ  ಮೂಲಕ  ಮನವಿ ಸಲ್ಲಿಸಲಾಯಿತು.  ಪಕ್ಷದ ಅಧ್ಯಕ್ಷ ನಾಗರಾಜ್‌ರಾವ್ ಶಿಂಧೆ, ಯುವ ಘಟಕದ ಅಧ್ಯಕ್ಷ ಅರಳಿಹಳ್ಳಿ ತ್ಯಾಗರಾಜ್, ಕಾರ್ಯದರ್ಶಿ ಶಬರೀಶ್, ಮುಖಂಡರಾದ ತೀರ್ಥಕುಮಾರ್, ರಾಜೇಂದ್ರ, ವೆಂಕಟೇಶ್, ಆನಂದ್, ವಿನೋದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಜಮೀನುಗಳಿಗೆ ರಸ್ತೆ ನಿರ್ಮಾಣ ಕಾಮಗಾರಿಗೆ ಕಾಡಾ ಅಧ್ಯಕ್ಷೆ ಭೂಮಿ ಪೂಜೆ

ಭದ್ರಾವತಿ ತಾಲೂಕಿನ ಭಂಡಾರಹಳ್ಳಿ ವೀರಾಪುರ ಗ್ರಾಮದಲ್ಲಿ ರೈತರ ಜಮೀನುಗಳಿಗೆ ರಸ್ತೆ ನಿರ್ಮಾಣ ಕಾಮಗಾರಿಗೆ ಗುರುವಾರ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಚಾಲನೆ ನೀಡಿದರು.
    ಭದ್ರಾವತಿ, ಡಿ. ೨೯: ತಾಲೂಕಿನ ಭಂಡಾರಹಳ್ಳಿ ವೀರಾಪುರ ಗ್ರಾಮದಲ್ಲಿ ರೈತರ ಜಮೀನುಗಳಿಗೆ ರಸ್ತೆ ನಿರ್ಮಾಣ ಕಾಮಗಾರಿಗೆ ಗುರುವಾರ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಚಾಲನೆ ನೀಡಿದರು.
    ಈ ಸಂದರ್ಭದಲ್ಲಿ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಹಾಗು ನಿಗದಿ ಅವಧಿಯಲ್ಲಿ ಮುಕ್ತಾಯಗೊಳಿಸುವಂತೆ ಗುತ್ತಿಗೆದಾರಿಗೆ ಸೂಚಿಸಿದ ಪವಿತ್ರ ರಾಮಯ್ಯ, ರೈತರು ರಸ್ತೆಗಳನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.


    ಗ್ರಾಮ ಪಂಚಾಯಿತಿ ಹಾಗು ನೀರು ಬಳಕೆದಾರರ ಸಂಘದ ಸದಸ್ಯರು, ರೈತ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪವಿತ್ರ ರಾಮಯ್ಯರವರು ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಬಹುತೇಕ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಆಲಿಸುವ ಜೊತೆಗೆ ಅವುಗಳನ್ನು ಪರಿಹರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ನಿವಾಸಿಗಳು ಅವರನ್ನು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.

ಸರ್ಕಾರಿ ಆಸ್ಪತ್ರೆ ಮುಖ್ಯ ರಸ್ತೆಯಲ್ಲಿ ವಾಹನ ದಟ್ಟಣೆ ನಿವಾರಿಸಿ

ಭದ್ರಾವತಿ ನಗರದ ಹೃದಯ ಭಾಗದಲ್ಲಿ ಹಳೇನಗರದಲ್ಲಿರುವ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಮುಖ್ಯ ರಸ್ತೆಯಲ್ಲಿ ದಿನದಿಂದ ದಿನಕ್ಕೆ ವಾಹನಗಳ ದಟ್ಟಣೆ ಹೆಚ್ಚಾಗುತ್ತಿದ್ದು, ಅದರಲ್ಲೂ ಈ ರಸ್ತೆಯಲ್ಲಿ ಅನಗತ್ಯವಾಗಿ ವಾಹನಗಳ ನಿಲುಗಡೆಯಾಗುತ್ತಿರುವುದು ಸಮಸ್ಯೆ ಮತ್ತಷ್ಟು ಉಲ್ಬಣವಾಗಲು ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ಸಂಬಂಧಪಟ್ಟ ಇಲಾಖೆಯವರು ಗಮನ ಹರಿಸಬೇಕಾಗಿದೆ.
    ಭದ್ರಾವತಿ, ಡಿ. ೨೯: ನಗರದ ಹೃದಯ ಭಾಗದಲ್ಲಿ ಹಳೇನಗರದಲ್ಲಿರುವ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಮುಖ್ಯ ರಸ್ತೆಯಲ್ಲಿ ದಿನದಿಂದ ದಿನಕ್ಕೆ ವಾಹನಗಳ ದಟ್ಟಣೆ ಹೆಚ್ಚಾಗುತ್ತಿದ್ದು, ಅದರಲ್ಲೂ ಈ ರಸ್ತೆಯಲ್ಲಿ ಅನಗತ್ಯವಾಗಿ ವಾಹನಗಳ ನಿಲುಗಡೆಯಾಗುತ್ತಿರುವುದು ಸಮಸ್ಯೆ ಮತ್ತಷ್ಟು ಉಲ್ಬಣವಾಗಲು ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ಸಂಬಂಧಪಟ್ಟ ಇಲಾಖೆಯವರು ಗಮನ ಹರಿಸಬೇಕಾಗಿದೆ.
    ಆಸ್ಪತ್ರೆಗೆ ಪ್ರತಿದಿನ ಸಾವಿರಾರು ಜನ ಬಂದು ಹೋಗುತ್ತಿದ್ದು, ಆಸ್ಪತ್ರೆಯ ಮುಖ್ಯ ರಸ್ತೆ ಕಿರಿದಾದ ಕಾರಣ ವಾಹನಗಳು ಸುಗಮವಾಗಿ ಸಂಚರಿಸಲು ಅಸಾಧ್ಯವಾಗಿದೆ. ಅದರಲ್ಲೂ ವಾಣಿಜ್ಯ ರಸ್ತೆಯಾಗಿರುವ ಹಿನ್ನಲೆಯಲ್ಲಿ ಸದಾ ಜನಸಂದಣಿಯಿಂದ ಕೂಡಿರುತ್ತದೆ. ಸಂಬಂಧಪಟ್ಟ ಇಲಾಖೆಯವರು ಈ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಫಲಕ ಅಳವಡಿಸದ ಕಾರಣ ವಾಹನಗಳನ್ನು ಎಲ್ಲೆಬೇಕೆಂದರಲ್ಲಿ ನಿಲುಗಡೆ ಮಾಡಲಾಗುತ್ತಿದೆ. ಅಲ್ಲದೆ ಬೀದಿಬದಿ ವ್ಯಾಪಾರಿಗಳು ಸಹ ಈ ರಸ್ತೆಯನ್ನು ಆಶ್ರಯಿಸಿಕೊಂಡಿದ್ದು, ಇದರಿಂದಾಗಿ ತುರ್ತು ವಾಹನಗಳು ಸಹ ಸುಗಮವಾಗಿ ಸಂಚರಿಸಲು ಅಸಾಧ್ಯವಾಗಿದೆ.
    ತಕ್ಷಣ ಈ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಫಲಕ ಅಳವಡಿಸುವ ಜೊತೆಗೆ ಅನಗತ್ಯವಾಗಿ ವಾಹನ ನಿಲುಗಡೆ ಮಾಡುವವರ ವಿರುದ್ಧ  ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರು ಸಾರ್ವಜನಿಕರು ಮನವಿ ಮಾಡಿದ್ದಾರೆ.  

೫೧ನೇ ವರ್ಷದ ಅಯ್ಯಪ್ಪಸ್ವಾಮಿ ದೀಪೋತ್ಸವಕ್ಕೆ ಚಾಲನೆ

ಡಿ.೩೧ರಂದು ಸಾಮೂಹಿಕ ಅನ್ನ ಸಂತರ್ಪಣೆ, ಉತ್ಸವ ಮೆರವಣಿಗೆ

ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ವತಿಯಿಂದ ೫೧ನೇ ವರ್ಷದ ಅಯ್ಯಪ್ಪಸ್ವಾಮಿ ದೀಪೋತ್ಸವ ೩ ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದು, ಗುರುವಾರ ಧ್ವಜಾರೋಹಣ ನೆರವೇರಿಸುವುದರ ಮೂಲಕ ದೀಪೋತ್ಸವಕ್ಕೆ ಸಮಿತಿ ಅಧ್ಯಕ್ಷ ಎಸ್. ಜಯಕೃಷ್ಣ ಚಾಲನೆ ನೀಡಿದರು.
    ಭದ್ರಾವತಿ, ಡಿ. ೨೯: ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ವತಿಯಿಂದ ೫೧ನೇ ವರ್ಷದ ಅಯ್ಯಪ್ಪಸ್ವಾಮಿ ದೀಪೋತ್ಸವ ೩ ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದು, ಗುರುವಾರ ಧ್ವಜಾರೋಹಣ ನೆರವೇರಿಸುವುದರ ಮೂಲಕ ದೀಪೋತ್ಸವಕ್ಕೆ ಸಮಿತಿ ಅಧ್ಯಕ್ಷ ಎಸ್. ಜಯಕೃಷ್ಣ ಚಾಲನೆ ನೀಡಿದರು.
    ಬೆಳಿಗ್ಗೆ ನಿರ್ಮಾಲ್ಯದರ್ಶನಂ, ಮಹಾಗಣಪತಿ ಹೋಮ, ಉಷಃ ಪೂಜೆ, ಅಷ್ಟಾಭಿಷೇಕ, ಕಳಸ ಪೂಜೆ ನವಗಂ ನಂತರ ಕಳಸಾಭಿಷೇಕ, ಸಂಜೆ ಅಲಂಕಾರ, ದೀಪಾರಾಧನೆ ಉತ್ಸವ ಮೂರ್ತಿ ಮೆರವಣಿಗೆ ನಡೆಯಿತು.
    ಡಿ.೩೦ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಮಹಾಮೃತ್ಯುಂಜಯ ಹೋಮ, ನಂತರ ಶ್ರೀ ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಪೂಜೆ, ಅಯ್ಯಪ್ಪಸ್ವಾಮಿಗೆ ಕಳಸಾಭಿಷೇಕ,  ಭಗವತಿಗೆ ಕುಂಕುಮಾಭಿಷೇಕ, ಶಿವನಿಗೆ ಭಸ್ಮಾಭಿಷೇಕ, ಸಂಜೆ ಭಗವತಿ ಸೇವೆ, ಅಲಂಕಾರ ದೀಪಾರಾಧನೆ, ರಾತ್ರಿ ಅತ್ತಾಳ ಪೂಜೆ ನಂತರ ಚಂಡೆವಾದ್ಯ ನಡೆಯಲಿದೆ.
    ಡಿ.೩೧ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಅಷ್ಟಾಭಿಷೇಕ, ಅಯ್ಯಪ್ಪಸ್ವಾಮಿ ಹಾಗು ಭಗವತಿಗೆ ಚಂದನಾಲಂಕಾರ, ಹೂವಿನ ಅಭಿಷೇಕ, ಮಧ್ಯಾಹ್ನ ೧೨ಕ್ಕೆ ಸಾಮೂಹಿಕ ಅನ್ನಸಂತರ್ಪಣೆ ಹಾಗು ಸಂಜೆ ರಾಜಬೀದಿ ಉತ್ಸವ ಮೆರವಣಿಗೆ ನಡೆಯಲಿದೆ.
    ಧ್ವಜಾರೋಹಣ ಸಂದರ್ಭದಲ್ಲಿ ಸೇವಾ ಸಮಿತಿ ಉಪಾಧ್ಯಕ್ಷ ವಿ. ಬಾಬು, ಪ್ರಧಾನ ಕಾರ್ಯದರ್ಶಿ ಟಿ.ಪಿ ಸುಬ್ರಮಣ್ಯ, ಕಾರ್ಯದರ್ಶಿ ಶೇಖ್ಯಾನಾಯ್ಕ, ಖಜಾಂಚಿ ರಾಮಮೊಗವೀರ, ಸದಸ್ಯರಾದ ಪಿ.ಆರ್ ಪ್ರಭಾಕರ್, ಆರ್. ರಾಧಕೃಷ್ಣನ್, ಡಿ. ಗಿರೀಶ್ ಪಿಳ್ಳೆ, ಕೆ.ಸಿ ರಾಜಶೇಖರ್, ಕೆ. ಮಧುಕುಮಾರ್ ಹಾಗು ಕೇರಳ ಸಮಾಜಂ ಹಾಗು ಮಹಿಳಾ ಘಟಕ ಮತ್ತು ಯುವ ಘಟಕದ ಪದಾಧಿಕಾರಿಗಳು ಹಾಗು ಅಯ್ಯಪ್ಪ ಸ್ವಾಮಿ ಗುರುಮೂರ್ತಿ, ಮಾಲಾಧಾರಿಗಳು ಮತ್ತು ಭಕ್ತರು ಉಪಸ್ಥಿತರಿದ್ದರು.

Wednesday, December 28, 2022

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

ಭದ್ರಾವತಿಯ ರಂಗಕರ್ಮಿ, ಕಿರುತೆರೆ ಕಲಾವಿದ ಅಪರಂಜಿ ಶಿವರಾಜ್‌ರವರು ಬುಧವಾರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸುಮಾರು ೯೦ ನಿಮಿಷ ಕಾರ್ಯಾಗಾರ ನಡೆಸಿಕೊಟ್ಟರು.
    ಭದ್ರಾವತಿ, ಡಿ. ೨೮ : ರಂಗಕರ್ಮಿ, ಕಿರುತೆರೆ ಕಲಾವಿದ ಅಪರಂಜಿ ಶಿವರಾಜ್‌ರವರು ಬುಧವಾರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸುಮಾರು ೯೦ ನಿಮಿಷ ಕಾರ್ಯಾಗಾರ ನಡೆಸಿಕೊಟ್ಟರು.
    ವಿದ್ಯಾರ್ಥಿಗಳಿಗೆ ಓದುವಕ್ರಮ, ನೆನಪಿನ ಶಕ್ತಿ, ಏಕಾಗ್ರತೆ, ಪರೀಕ್ಷಾ ಭಯ ಮತ್ತು ಶಿಸ್ತು ವಿಷಯಗಳಿಗೆ ಸಂಬಂಧಿಸಿದಂತೆ ಅಪರಂಜಿ ಶಿವರಾಜ್‌ರವರು ೨೦೧೭ ರಿಂದಲೂ ಆಪ್ತ ಸಲಹೆಗಾರರಾಗಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ನಡೆಸಿಕೊಂಡು ಬರುತ್ತಿದ್ದಾರೆ.
    ಕಳೆದ ೬ ವರ್ಷಗಳಿಂದಲೂ ಮುಖ್ಯವಾಗಿ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಸುಧಾರಣೆ ಕಂಡುಕೊಳ್ಳುವ ಮೂಲಕ ಉತ್ತಮ ಫಲಿತಾಂಶ ಪಡೆದುಕೊಳ್ಳಲು ಕಾರ್ಯಾಗಾರ ಸಹಕಾರಿಯಾಗಿದೆ ಎನ್ನುತ್ತಾರೆ ಅಪರಂಜಿ ಶಿವರಾಜ್.
    ಕ್ಷೇತ್ರ ಶಿಕ್ಷಣಾಧಿಕಾರಿಗಳು ಇವರ ಕಾರ್ಯಾಗಾರಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದು, ಕಾರ್ಯಾಗಾರ ನಡೆಸಲು ಇಲಾಖೆ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತಿದೆ.

ಕಲಿಕೆ ಜೊತೆಗೆ ಉತ್ತಮ ಗುಣಗಳನ್ನು ರೂಢಿಸಿಕೊಳ್ಳಿ : ಬಿ.ಕೆ ಸಂಗಮೇಶ್ವರ್


ಭದ್ರಾವತಿ ಗಾಂಧಿನಗರ ಕುವೆಂಪು ಬಡಾವಣೆಯಲ್ಲಿರುವ ಸ್ವಾಮಿ ವಿವೇಕಾನಂದ ಎಜುಕೇಷನ್ ಟ್ರಸ್ಟ್‌ನ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಿರಿಯ ಪ್ರಾಥಮಿಕ ಪಾಠಶಾಲೆ ಹಾಗು ಆಂಗ್ಲ ಮಾಧ್ಯಮ ಪ್ರೌಢಶಾಲೆ ೨೫ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.      
    ಭದ್ರಾವತಿ, ಡಿ. ೨೮ : ವಿದ್ಯಾರ್ಥಿಗಳು ಕಲಿಕೆಗೆ ಹೆಚ್ಚಿನ ಆಸಕ್ತಿ ನೀಡುವ ಜೊತೆಗೆ ಉತ್ತಮ ಗುಣಗಳನ್ನು ರೂಢಿಸಿಕೊಳ್ಳಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಗಾಂಧಿನಗರ ಕುವೆಂಪು ಬಡಾವಣೆಯಲ್ಲಿರುವ ಸ್ವಾಮಿ ವಿವೇಕಾನಂದ ಎಜುಕೇಷನ್ ಟ್ರಸ್ಟ್‌ನ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಿರಿಯ ಪ್ರಾಥಮಿಕ ಪಾಠಶಾಲೆ ಹಾಗು ಆಂಗ್ಲ ಮಾಧ್ಯಮ ಪ್ರೌಢಶಾಲೆ ೨೫ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರು ಮತ್ತು ಪೋಷಕರದ್ದಾಗಿದ್ದು, ಈ ಹಿನ್ನಲೆಯಲ್ಲಿ ಹೆಚ್ಚಿನ ಗಮನ ಹರಿಸಬೇಕೆಂದರು.
    ವಿದ್ಯಾಸಂಸ್ಥೆ ಅಧ್ಯಕ್ಷ ಎಚ್.ಎಸ್ ಗುರುರಾಜರಾವ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಸಂಪನ್ಮೂಲ ಸಮನ್ವಯಾಧಿಕಾರಿ ಪಂಚಾಕ್ಷರಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಹಿರಿಯ ಸದಸ್ಯರಾದ ವಿ. ಕದಿರೇಶ್, ಬಿ.ಕೆ ಮೋಹನ್, ತಿಪ್ಪೇಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ

ಭದ್ರಾವತಿ ಪೊಲೀಸ್ ಉಪವಿಭಾಗದ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ವತಿಯಿಂದ ತಾಲೂಕಿನ ದೇವರನರಸೀಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಅರಿತು ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಭದ್ರಾವತಿ, ಡಿ. ೨೮: ಪೊಲೀಸ್ ಉಪವಿಭಾಗದ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ವತಿಯಿಂದ ತಾಲೂಕಿನ ದೇವರನರಸೀಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಅರಿತು ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಠಾಣಾಧಿಕಾರಿ ಶಾಂತಲಾ ಅಪರಾಧ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಮುಂಜಾಗ್ರತೆ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಸತಿ ಶಾಲೆಗಳ ಮುಖ್ಯೋಪಾಧ್ಯಾಯ ಬಸವರಾಜ್ ಅಧ್ಯಕ್ಷತೆ ವಹಿಸಿದ್ದರು.
    ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಹಾಗು ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಾಸಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ.