ಸಂಗಮೇಶ್, ಶಾರದ, ರುದ್ರೇಶ್, ಆನಂದ್ ಸೇರಿದಂತೆ ಒಟ್ಟು ೭ ನಾಮಪತ್ರ ಸಲ್ಲಿಕೆ
![](https://blogger.googleusercontent.com/img/a/AVvXsEhqm8G98I9moA-woXL6YQO-0-drxSv08E_EahbUvadeLByWAt86JlW4SZCAg8S-RV1PCPTgr6rjfh4EagAx-XClHWSVA2vzCus-DCZIgMDCb9iCskhBlWMcivH_FQg0dmR9kmHNGohn3BaWr16TOdN81ERz7qJFbp8wQ83jAbFRMD7FR5fEGkKL2jcO9g=w400-h179-rw)
ವಿಧಾನಸಭಾ ಚುನಾವಣೆಗೆ ಭದ್ರಾವತಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕ ಬಿ.ಕೆ ಸಂಗಮೇಶ್ವರ್ ೬ನೇ ಬಾರಿಗೆ ನಾಮಪತ್ರ ಸಲ್ಲಿಸಿದರು.
ಭದ್ರಾವತಿ, ಏ. ೧೮ : ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಮಂಗಳವಾರ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಮೂಲಕ ಗಮನ ಸೆಳೆದರು.
ನ್ಯಾಯವಾದಿ, ಯುವ ಮುಖಂಡ ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್ ನಾಮಪತ್ರ ಸಲ್ಲಿಕೆಗೂ ಮೊದಲು ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಅಂಬೇಡ್ಕರ್ ವೃತ್ತದಿಂದ ಬೃಹತ್ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಪಕ್ಷದ ಪ್ರಮುಖರಾದ ಪವಿತ್ರ ರಾಮಯ್ಯ, ಡಾ. ಧನಂಜಯ ಸರ್ಜಿ, ಕೂಡ್ಲಿಗೆರೆ ಹಾಲೇಶ್, ತೀರ್ಥಯ್ಯ, ಎಚ್.ಸಿ ರಮೇಶ್, ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ಸತೀಶ್‌ಗೌಡ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.
ವಿಧಾನಸಭಾ ಚುನಾವಣೆಗೆ ಭದ್ರಾವತಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾರದ ಅಪ್ಪಾಜಿ ಮೊದಲ ಬಾರಿಗೆ ನಾಮಪತ್ರ ಸಲ್ಲಿಸಿದರು.
ಬೆಳಿಗ್ಗೆ ಅಭ್ಯರ್ಥಿ ಮಂಗೋಟೆ ರುದ್ರೇಶ್ ತಮ್ಮ ನಿವಾಸದಲ್ಲಿ ತಾಯಿ ರತ್ನಮ್ಮ ಮಂಗೋಟೆ ಮುರಿಗೆಪ್ಪನವರ ಆಶೀರ್ವಾದ ಪಡೆದರು. ಮಧ್ಯಾಹ್ನ ಮಿನಿವಿಧಾನಸೌಧ ತಾಲೂಕು ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಪಕ್ಷದ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಜಿ. ಆನಂದಕುಮಾರ್, ಪದ್ಮನಾಭ ಉಪಸ್ಥಿತರಿದ್ದರು.
ಜೆಡಿಎಸ್ ಪಕ್ಷದ ಅಭ್ಯರ್ಥಿ ಶಾರದ ಅಪ್ಪಾಜಿ ಸಹ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ತಾಲೂಕು ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಂತರ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದರು.
ಇದಕ್ಕೂ ಬೆಳಿಗ್ಗೆ ಗೋಣಿಬೀಡಿನಲ್ಲಿರುವ ಮಾಜಿ ಶಾಸಕ, ಪತಿ ಎಂ.ಜೆ ಅಪ್ಪಾಜಿಯವರ ಶಕ್ತಿಧಾಮಕ್ಕೆ ತೆರಳಿ ಪೂಜೆ ಸಲ್ಲಿಸಿ ನಂತರ ನಗರದ ಅಂಡರ್‌ಬ್ರಿಡ್ಜ್‌ನಲ್ಲಿ ಅಂಬೇಡ್ಕರ್ ಪ್ರತಿಮೆ ಮಾಲಾರ್ಪಣೆ ಮಾಡಿದರು. ವಿವಿಧೆಡೆ ದೇವಸ್ಥಾನ, ಚರ್ಚ್ ಮತ್ತು ಮಸೀದಿಗಳಿಗೆ ತೆರಳಿ ಪೂಜೆ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಗ್ರಾಮಾಂತರ ಧರ್ಮಕುಮಾರ್, ಅಲ್ಪಸಂಖ್ಯಾತರ ಮುಖಂಡ ಮುರ್ತುಜಾಖಾನ್ ಉಪಸ್ಥಿತರಿದ್ದರು.
ವಿಧಾನಸಭಾ ಚುನಾವಣೆಗೆ ಭದ್ರಾವತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮಂಗೋಟೆ ರುದ್ರೇಶ್ ಮೊದಲ ಬಾರಿಗೆ ನಾಮಪತ್ರ ಸಲ್ಲಿಸಿದರು.
ಉಳಿದಂತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಶಾಸಕ ಬಿ.ಕೆ ಸಂಗಮೇಶ್ವರ್ ಈ ಬಾರಿ ಸರಳವಾಗಿ ನಾಮಪತ್ರ ಸಲ್ಲಿಸಿದರು. ಪಕ್ಷದ ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಪಕ್ಷದ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಅಲ್ಪ ಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷೆ ಬಲ್ಕೀಶ್ ಬಾನು ಉಪಸ್ಥಿತರಿದ್ದರು.
ಆಮ್ ಆದ್ಮಿ ಪಾರ್ಟಿ(ಎಎಪಿ) ಪಕ್ಷದ ಅಭ್ಯರ್ಥಿ ಆನಂದ್(ಮೆಡಿಕಲ್)ರವರು ಸಹ ಹೆಚ್ಚಿನ ಪ್ರಚಾರವಿಲ್ಲದೆ ಸರಳವಾಗಿ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ತಾಲೂಕು ಕಛೇರಿಗೆ ಆಗಮಿಸಿದರು.
ವಿಧಾನಸಭಾ ಚುನಾವಣೆಗೆ ಭದ್ರಾವತಿ ಕ್ಷೇತ್ರದಿಂದ ಎಎಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆನಂದ್(ಮೆಡಿಕಲ್) ಮೊದಲ ಬಾರಿಗೆ ನಾಮಪತ್ರ ಸಲ್ಲಿಸಿದರು.
ಉಳಿದಂತೆ ೨ನೇ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ(ಆರ್‌ಪಿಐಕೆ) ಪಕ್ಷದ ಅಭ್ಯರ್ಥಿಯಾಗಿ ಛಲವಾದಿ ಸಮಾಜದ ಮುಖಂಡ ಪಿ.ಇ ಬಸವರಾಜ ನಾಮಪತ್ರ ಸಲ್ಲಿಸಿದರು. ಪಕ್ಷೇತರ ಅಭ್ಯರ್ಥಿಗಳಾಗಿ ಅಹಮದ್ ಆಲಿ ಮತ್ತು ನೀಲಂ ನಾಮಪತ್ರ ಸಲ್ಲಿಸಿದರು.