Wednesday, June 28, 2023

ವಿಐಎಸ್ಎಲ್ ಗುತ್ತಿಗೆ ಕಾರ್ಮಿಕ ಮಂಜುನಾಥ್ ನಿಧನ



ಭದ್ರಾವತಿ, ಜೂ. 28: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಗುತ್ತಿಗೆ ಕಾರ್ಮಿಕ ಬಿ. ಮಂಜುನಾಥ್(43) ಬುಧವಾರ ಬೆಳಗ್ಗೆ ನಿಧನ ಹೊಂದಿದರು.
          ಪತ್ನಿ, ಓರ್ವ ಪುತ್ರಿ ಇದ್ದರು. ಕಳೆದ ಸುಮಾರು ಒಂದು ವರ್ಷದಿಂದ ಜನ್ನಾಪುರ ಲಿ೦ಗಾಯತರ ಬೀದಿಯಲ್ಲಿ ವಾಸವಾಗಿದ್ದರು.   ಹಲವಾರು ವರ್ಷಗಳಿಂದ ವಿಐಎಸ್ಎಲ್ ಗುತ್ತಿಗೆ ಕಾರ್ಮಿಕರಾಗಿದ್ದು, ಬದುಕು ಸಾಗಿಸುತ್ತಿದ್ದರು. ಕಾರ್ಖಾನೆಯಲ್ಲಿ ಕೇವಲ 13 ದಿನ ಕೆಲಸ ನಿರ್ವಹಿಸಬೇಕಾದ ಹಿನ್ನೆಲೆಯಲ್ಲಿ ಹೊರಗೆ ಪೇಂಟಿಂಗ್ ಕೆಲಸ ಸಹ ನಿರ್ವಹಿಸುತ್ತಿದ್ದರು. ಪೇಂಟಿಂಗ್ ಕೆಲಸ ನಿರ್ವಹಿಸುವಾಗ ಕಟ್ಟಡದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದು, ಇವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
     ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ನಿರ್ದೇಶಕರಾಗಿದ್ದರು. ಇವರ ನಿಧಾನಕ್ಕೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕ ಮತ್ತು ಗುತ್ತಿಗೆ ಕಾರ್ಮಿಕರ ಸಂಘ ಸಂತಾಪ ಸೂಚಿಸಿವೆ.
  

Tuesday, June 27, 2023

ಉತ್ಪಾದನೆ ಸ್ಥಗಿತಗೊಳಿಸದೆ ಗುತ್ತಿಗೆ ಕಾರ್ಮಿಕರ ಹಿತ ಕಾಪಾಡಿ

ವಿಐಎಸ್‌ಎಲ್ ಆಡಳಿತ ಮಂಡಳಿ ಜೊತೆಗೆ ಶಾಸಕ ಸಂಗಮೇಶ್ವರ್ ಚರ್ಚೆ

ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತಗೊಳಿಸದೆ ಗುತ್ತಿಗೆ ಕಾರ್ಮಿಕರಿಗೆ ಉದ್ಯೋಗ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಖಾನೆ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿದರು.
    ಭದ್ರಾವತಿ, ಜೂ. ೨೭: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತಗೊಳಿಸದೆ ಗುತ್ತಿಗೆ ಕಾರ್ಮಿಕರಿಗೆ ಉದ್ಯೋಗ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಖಾನೆ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿದರು.
    ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯುವಂತೆ ಹಾಗು ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವಂತೆ ಮತ್ತು ಗುತ್ತಿಗೆ ಕಾರ್ಮಿಕರ ಹಿತಕಾಪಾಡುವಂತೆ ಆಗ್ರಹಿಸಿ ಕಳೆದ ಸುಮಾರು ೬ ತಿಂಗಳಿನಿಂದ ನಿರಂತರವಾಗಿ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಆರಂಭದಿಂದಲೂ ಶಾಸಕ ಬಿ.ಕೆ ಸಂಗಮೇಶ್ವರ್ ಬೆಂಬಲ ಸೂಚಿಸಿಕೊಂಡು ಬಂದಿದ್ದು, ಈ ನಡುವೆ ವಿಧಾನಸಭಾ ಚುನಾವಣೆ ಎದುರಾದ ಹಿನ್ನಲೆಯಲ್ಲಿ ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಸ್ಪಂದಿಸಲು ಅವರಿಗೆ ಸಾಧ್ಯವಾಗಿರಲಿಲ್ಲ.
    ಕಳೆದ ತಿಂಗಳು ಚುನಾವಣೆ ಮುಕ್ತಾಯಗೊಂಡಿದ್ದು, ೪ನೇ ಬಾರಿಗೆ ಕ್ಷೇತ್ರದ ಶಾಸಕರಾಗಿ ಸಂಗಮೇಶ್ವರ್ ಆಯ್ಕೆಯಾಗಿದ್ದಾರೆ. ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಬೆಂಗಳೂರಿನಲ್ಲಿಯೇ ಉಳಿದುಕೊಂಡಿದ್ದ ಇವರು ಕಳೆದ ೪ ತಿಂಗಳ ಹಿಂದೆ ನಗರಕ್ಕೆ ಆಗಮಿಸಿದ್ದು, ಈ ಹಿನ್ನಲೆಯಲ್ಲಿ ಮಂಗಳವಾರ ಕಾರ್ಖಾನೆ ಆಡಳಿತ ಮಂಡಳಿ ಜೊತೆ ಪ್ರಸ್ತುತ ಬೆಳವಣಿಗೆಗಳ ಕುರಿತು ಮಾಹಿತಿ ಪಡೆದು ಗುತ್ತಿಗೆ ಕಾರ್ಮಿಕರ ಹಿತಕಾಪಾಡುವ ನಿಟ್ಟಿನಲ್ಲಿ ಮುಂದಿನ ಕ್ರಮಗಳನ್ನು ಚರ್ಚಿಸಿದರು.
    ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್‌ಕುಮಾರ್ ಹಾಗು ಕಾಯಂ ಮತ್ತು ಗುತ್ತಿಗೆ ಕಾರ್ಮಿಕರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸದೃಢ ಸಮಾಜ ನಿರ್ಮಾಣಕ್ಕೆ ಯುವ ಸಮೂಹ ಪಾತ್ರ ಅಗತ್ಯ : ಶಾಂತಲಾ

ಮಾದಕ ವಸ್ತುಗಳ ಸಾಗಣಿಕೆ, ಸೇವನೆ ವಿರೋಧ ದಿನದ ಪ್ರಯುಕ್ತ ಭದ್ರಾವತಿ ತರೀಕೆರೆ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಜೂ. ೨೭: ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳ ಸೇವನೆ ಹೆಚ್ಚಾಗುತ್ತಿದ್ದು, ಇದರಿಂದ ಯುವ ಸಮೂಹ ದಾರಿ ತಪ್ಪುತ್ತಿದೆ. ಸದೃಢ ಸಮಾಜ ನಿರ್ಮಾಣಕ್ಕೆ ಯುವ ಸಮೂಹ ಎಚ್ಚೆತ್ತುಕೊಳ್ಳಬೇಕೆಂದು ನಗರದ ಸಂಚಾರಿ ಪೊಲೀಸ್ ಠಾಣಾಧಿಕಾರಿ ಶಾಂತಲಾ ಹೇಳಿದರು.
    ಅವರು ಜಿಲ್ಲಾ ಪೊಲೀಸ್ ಮಾರ್ಗದರ್ಶನದಲ್ಲಿ ಸಂಚಾರಿ ಠಾಣೆ ವತಿಯಿಂದ ಮಾದಕ ವಸ್ತುಗಳ ಸಾಗಣಿಕೆ, ಸೇವನೆ ವಿರೋಧ ದಿನದ ಪ್ರಯುಕ್ತ ನಗರದ ತರೀಕೆರೆ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.
    ವಿದ್ಯಾರ್ಥಿಗಳಿಗೆ ಮಾದಕ ವಸ್ತು  ಸೇವನೆಯಿಂದ ಉಂಟಾಗುವ ದುಷ್ಪಾರಿಣಾಮಗಳು ಹಾಗೂ ಸಂಚಾರ ನಿಯಮ ಪಾಲನೆ ಮತ್ತು ಅಪಘಾತ ನಿಯಂತ್ರಣ ಕುರಿತು ಜಾಗೃತಿ ಮೂಡಿಸಿದರು. ಕಾಲೇಜಿನ ಪ್ರಾಂಶುಪಾಲ ಹಿರಿಯಣ್ಣ ಮತ್ತು ಉಪನ್ಯಾಸಕ ವೃಂದದವರು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಬದುಕು ಸಾರ್ಥಕಗೊಳ್ಳಲು ಮಹಾನ್ ವ್ಯಕ್ತಿಗಳ ಆದರ್ಶತನ ಮೈಗೂಡಿಸಿಕೊಳ್ಳಿ

ನಾಡಪ್ರಭು ಕೆಂಪೇಗೌಡರ ಜಯಂತ್ಯೋತ್ಸವದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್

ಭದ್ರಾವತಿ ನಗರಸಭೆ ವ್ಯಾಪ್ತಿಯ ಅಪ್ಪರ್ ಹುತ್ತಾದಲ್ಲಿ ನಾಡಪ್ರಭು ಕೆಂಪೇಗೌಡ ಹಿತರಕ್ಷಣಾ ವೇದಿಕೆ ವತಿಯಿಂದ ಮಂಗಳವಾರ ಕೆಂಪೇಗೌಡರ ಜಯಂತ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು. ಶಾಸಕ ಬಿ.ಕೆ ಸಂಗಮೇಶ್ವರ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
     ಭದ್ರಾವತಿ, ಜೂ. ೨೭ : ನಾಡಪ್ರಭು ಕೆಂಪೇಗೌಡರ ಕೊಡುಗೆ ಅಪಾರವಾಗಿದ್ದು, ಅವರ ಆದರ್ಶತನಗಳು ನಮಗೆ ದಾರಿದೀಪವಾಗಿವೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಮಂಗಳವಾರ ನಗರಸಭೆ ವ್ಯಾಪ್ತಿಯ ಅಪ್ಪರ್ ಹುತ್ತಾದಲ್ಲಿ ನಾಡಪ್ರಭು ಕೆಂಪೇಗೌಡ ಹಿತರಕ್ಷಣಾ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮನುಷ್ಯನ ಹುಟ್ಟು-ಸಾವು ಸಹಜ. ಆದರೆ ಈ ನಡುವೆ ಸಮಾಜಕ್ಕೆ ನಾವು ಏನು ಕೊಡುಗೆ ನೀಡುತ್ತೇವೆ ಎಂಬುದು ಮುಖ್ಯವಾಗಿದೆ. ನಾಡಪ್ರಭು ಕೆಂಪೇಗೌಡರು ಸೇರಿದಂತೆ ಅನೇಕ ಮಹಾನ್ ನಾಯಕರು ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಬದುಕಿಲ್ಲದಿದ್ದರೂ ಸಹ ಮಾನಸಿಕವಾಗಿ ನಮ್ಮೆಲ್ಲರ ಮುಂದೆ ಇಂದಿಗೂ ಉಳಿದುಕೊಂಡಿದ್ದಾರೆ ಎಂದರು.
    ಕೆಂಪೇಗೌಡರು ಅಂದು ನಿರ್ಮಿಸಿರುವ ಕೆರೆಕಟ್ಟೆಗಳು, ಅದರಲ್ಲೂ ವಿಶೇಷವಾಗಿ ಪ್ರಸ್ತುತ ಜಗತ್ತಿನ ಎಲ್ಲಾ ರಾಷ್ಟ್ರಗಳ ಗಮನ ಸೆಳೆಯುತ್ತಿರುವ ಬೆಂಗಳೂರು ನಿರ್ಮಾಣ ಕೆಂಪೇಗೌಡರು ಹೊಂದಿರುವ ಜನಪರ ಕಾಳಜಿಗಳು, ದೂರದೃಷ್ಟಿ ಚಿಂತನೆಗಳು ನಮ್ಮೆಲ್ಲರಿಗೂ ಮಾದರಿಯಾಗಿದೆ. ಈ ಹಿನ್ನಲೆಯಲ್ಲಿ ಕೆಂಪೇಗೌಡರನ್ನು ಸ್ಮರಿಸಿಕೊಳ್ಳುವುದು ನಾಡಿನ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
    ಹಿತರಕ್ಷಣಾ ವೇದಿಕೆ ಪ್ರಮುಖರಾದ ಎಸ್. ಕುಮಾರ್, ಬಾಲಕೃಷ್ಣ, ಟಿ. ಚಂದ್ರೇಗೌಡ, ವೆಂಕಟೇಶ್, ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಲತಾ ಚಂದ್ರಶೇಖರ್, ಮಣಿ ಎಎನ್‌ಎಸ್, ಆರ್. ಮೋಹನ್‌ಕುಮಾರ್, ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಜಿಲ್ಲಾ ಸಂಚಾಲಕ ಚಿನ್ನಯ್ಯ, ದೇವಾಂಗ ಸಮಾಜದ ತಾಲೂಕು ಅಧ್ಯಕ್ಷ ಎಂ. ಪ್ರಭಾಕರ್, ಪ್ರಜಾಪ್ರತಿನಿಧಿ ಸುರೇಶ್, ಎಂ.ಎಸ್ ಸುಧಾಮಣಿ, ಚನ್ನಪ್ಪ, ಕಬಡ್ಡಿ ಕೃಷ್ಣೇಗೌಡ, ಮಹೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ವೇದಿಕೆ ವತಿಯಿಂದ ಸಿಹಿ ಹಂಚಲಾಯಿತು. ಅಲ್ಲದೆ ಸಾವಿರಾರು ಮಂದಿಗೆ ಬಾಡೂಟದ ವ್ಯವಸ್ಥೆ ಕೈಗೊಳ್ಳಲಾಗಿತ್ತು.

ಭದ್ರಾವತಿ ವಿವಿಧೆಡೆ ನಾಡಪ್ರಭು ಕೆಂಪೇಗೌಡರ ಜಯಂತ್ಯೋತ್ಸವ

ಭದ್ರಾವತಿಯಲ್ಲಿ ನಾಡಹಬ್ಬ ಜಯಂತ್ಯೋತ್ಸವದ ಅಂಗವಾಗಿ ಮಂಗಳವಾರ ತಾಲೂಕು ಒಕ್ಕಲಿಗರ ಸಂಘದ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯದ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಗೆ ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಚಾಲನೆ ನೀಡಿದರು.
    ಭದ್ರಾವತಿ, ಭದ್ರಾವತಿ, ಜೂ. ೨೭: ನಗರದ ವಿವಿಧೆಡೆ  ಮಂಗಳವಾರ ನಾಡಪ್ರಭು ಕೆಂಪೇಗೌಡ ಜಯಂತ್ಯೋತ್ಸವ  ವಿಜೃಂಭಣೆಯಿಂದ ಆಚರಿಸಲಾಯಿತು.
    ತಾಲೂಕು ಒಕ್ಕಲಿಗರ ಸಂಘದ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯದ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಗೆ ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಚಾಲನೆ ನೀಡಿದರು.
    ನಗರದ ಬಿ.ಎಚ್ ರಸ್ತೆ, ಹುತ್ತಾ ಕಾಲೋನಿ ಬಸ್ ನಿಲ್ದಾಣದಿಂದ ವಿವಿಧ ಕಲಾತಂಡಗಳೊಂದಿಗೆ ಆರಂಭಗೊಂಡ ಮೆರವಣಿಗೆ ಕೆಎಸ್‌ಆರ್ ಟಿಸಿ ಮುಖ್ಯ ಬಸ್ ನಿಲ್ದಾಣ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ರಂಗಪ್ಪ ವೃತ್ತ ಮೂಲಕ ತಾಲೂಕು ಕಛೇರಿವರೆಗೂ ತಲುಪಿತು.
    ಮೆರವಣಿಗೆಯಲ್ಲಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಸ್. ಮಣಿಶೇಖರ್, ಒಕ್ಕಲಿಗ ಸಮುದಾಯದ ವಿವಿಧ ಸಂಘಟನೆಗಳ ಪ್ರಮುಖರು ಪಾಲ್ಗೊಂಡಿದ್ದರು.
    ಆಟೋ ಚಾಲಕರು ಮತ್ತು ಸ್ನೇಹ ಜೀವಿ ಬಳಗದಿಂದ ಜಯಂತಿ ಆಚರಣೆ :
    ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗ ಈ ಬಾರಿ ಸಹ ಸರ್.ಎಂ ವಿಶ್ವೇಶ್ವರಾಯ ಆಟೋ ಚಾಲಕರು, ಮಾಲೀಕರ ಸಂಘ ಹಾಗು ಸ್ನೇಹ ಜೀವಿ ಬಳಗದಿಂದ ನಾಡಪ್ರಭು ಕೆಂಪೇಗೌಡರ ಜಯಂತ್ಯೋತ್ಸವ ಆಚರಿಸಲಾಯಿತು.
    ಶಾಸಕ ಬಿ.ಕೆ ಸಂಗಮೇಶ್ವರ್ ಸರ್.ಎಂ ವಿಶ್ವೇಶ್ವರಾಯ ಪ್ರತಿಮೆಗೆ ಹಾಗು ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಒಕ್ಕಲಿಗ ಸಮಾಜದ ಮುಖಂಡ ಅರುಣ್‌ಗೌಡ ಸಾವಿರಾರು ಮಂದಿಗೆ ಮೈಸೂರು ಪ್ಯಾಕ್ ವಿತರಿಸಿದರು. ಅಲ್ಲದೆ ಸುಮಾರು ೩ ಸಾವಿರ ಮಂದಿಗೆ ಬಾಡೂಟದ ವ್ಯವಸ್ಥೆ ಕೈಗೊಳ್ಳಲಾಗಿತ್ತು.


ಭದ್ರಾವತಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗ ಈ ಬಾರಿ ಸಹ ಸರ್.ಎಂ ವಿಶ್ವೇಶ್ವರಾಯ ಆಟೋ ಚಾಲಕರು, ಮಾಲೀಕರ ಸಂಘ ಹಾಗು ಸ್ನೇಹ ಜೀವಿ ಬಳಗದಿಂದ ನಾಡಪ್ರಭು ಕೆಂಪೇಗೌಡರ ಜಯಂತ್ಯೋತ್ಸವ ಆಚರಿಸಲಾಯಿತು. ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಿಹಿ ತಿನಿಸುವ ಮೂಲಕ ಸಂಭ್ರಮಿಸಲಾಯಿತು.
    ಪ್ರಮುಖರಾದ ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್, ಹ ಸರ್.ಎಂ ವಿಶ್ವೇಶ್ವರಾಯ ಆಟೋ ಚಾಲಕರು, ಮಾಲೀಕರ ಸಂಘದ ಅಧ್ಯಕ್ಷ ಲಕ್ಷ್ಮಣ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ನಗರಸಭಾ ಸದಸ್ಯ ಮಣಿ ಎಎನ್‌ಎಸ್, ಅರುಣ್‌ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ತಾಲೂಕು ಕಛೇರಿಯಲ್ಲಿ ಕೆಂಪೇಗೌಡ ಜಯಂತಿ :
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಛೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು.


ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಛೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು. ತಾಲೂಕು ಆಡಳಿತ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರನ್ನು ಅಭಿನಂದಿಸಲಾಯಿತು.
ಶಾಸಕರಾದ ಬಿ.ಕೆ ಸಂಗಮೇಶ್ವರ್ ಮತ್ತು ಶಾರದಪೂರ‍್ಯಾನಾಯ್ಕ ಕಾರ್ಯಕ್ರಮದಲ್ಲಿ ಒಟ್ಟಿಗೆ ಪಾಲ್ಗೊಂಡು ಗಮನ ಸೆಳೆದರು. ತಹಸೀಲ್ದಾರ್ ಸುರೇಶ್ ಆಚಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ, ಕಾರ್ಯದರ್ಶಿ ಪ್ರಭಾಕರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ನಗರಸಭಾ ಸದಸ್ಯ ಮಣಿ ಎಎನ್‌ಎಸ್ ಸೇರಿದಂತೆ ತಾಲೂಕು ಕಛೇರಿ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.

Monday, June 26, 2023

ದುರ್ವಾಸನೆ, ರೋಗರುಜಿನ ಹರಡುವ ಭೀತಿ : ಕೋಳಿ ಪಾರಂ ತೆರವುಗೊಳಿಸಿ

ಬಸವನಗುಡಿ ಗ್ರಾಮಸ್ಥರಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ

ಭದ್ರಾವತಿ ತಾಲೂಕಿನ ಎರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಗುಡಿ ವ್ಯಾಪ್ತಿಯಲ್ಲಿರುವ ಕೋಳಿ ಪಾರಂ ತೆರವುಗೊಳಿಸುವಂತೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಸೋಮವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
    ಭದ್ರಾವತಿ, ಜೂ. ೨೬: ತಾಲೂಕಿನ ಎರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಗುಡಿ ವ್ಯಾಪ್ತಿಯಲ್ಲಿರುವ ಕೋಳಿ ಪಾರಂ ತೆರವುಗೊಳಿಸುವಂತೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಸೋಮವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
    ಗ್ರಾಮದ ಪಕ್ಕದಲ್ಲಿಯೇ ಕಡಿಮೆ ಅಂತರದಲ್ಲಿ ಕೋಳಿ ಪಾರಂ ಇದ್ದು, ಇದರಿಂದ ಈ ಭಾಗದಲ್ಲಿ ದುರ್ವಾಸನೆ ಹೆಚ್ಚಾಗುತ್ತಿದೆ. ಕಪ್ಪು ನೊಣಗಳ ಕಾಟ ಹೆಚ್ಚಾಗಿದ್ದು, ರೋಗರುಜಿನಗಳು ಹರಡುವ ಭೀತಿ ಎದುರಾಗಿದೆ. ಮನೆಗಳಲ್ಲಿ ಊಟ ಮಾಡಲು ಸಾಧ್ಯವಾಗುತ್ತಿಲ್ಲ. ಮಕ್ಕಳಲ್ಲಿ ಆಗಾಗ ವಾಂತಿ ಕಾಣಿಸಿಕೊಳ್ಳುತ್ತಿದ್ದು, ಅಲ್ಲದೆ ಸುತ್ತಮುತ್ತಲ ಪರಿಸರದಲ್ಲಿ ಸ್ವಚ್ಛತೆ ಇಲ್ಲದಂತಾಗಿದೆ. ಎಲ್ಲಿಬೇಕೆಂದರಲ್ಲಿ ಕೋಳಿ ತ್ಯಾಜ್ಯ ಕಂಡು ಬರುತ್ತಿದ್ದು, ನಾಯಿಗಳ ಹಾವಳಿ ಹೆಚ್ಚಾಗಿದೆ. ನಾಯಿಗಳು ಮಕ್ಕಳ ಮೇಲೆ ದಾಳಿ ನಡೆಸುತ್ತಿರುವ ಘಟನೆಗಳು ನಡೆಯುತ್ತಿವೆ. ಇದರಿಂದ ಒಂದೆಡೆ ಭಯದ ವಾತಾವರಣ ನಿರ್ಮಾಣವಾಗಿದ್ದು, ಬಡವರ್ಗಕ್ಕೆ ಸೇರಿರುವ ನಾವುಗಳು ಸಂಕಷ್ಟಕ್ಕೆ ಒಳಗಾಗುವಂತಾಗಿದೆ ಎಂದು ಅಳಲು ತೋರ್ಪಡಿಸಿಕೊಂಡರು.
    ಈಗಾಗಲೇ ಹಲವಾರು ಬಾರಿ ಈ ಸಂಬಂಧ ಮನವಿ ಸಲ್ಲಿಸಲಾಗಿದ್ದು, ಯಾವುದೇ ಪ್ರಯೋಜನವಾಗಿಲ್ಲ. ತಕ್ಷಣ ಕೋಳಿ ಪಾರಂ ತೆರವುಗೊಳಿಸಬೇಕು. ಅಲ್ಲಿಯವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಎಚ್ಚರಿಸಿದರು.
    ಮನವಿ ಆಲಿಸಿದ ತಹಸೀಲ್ದಾರ್‌ರವರು ತಕ್ಷಣ ಸ್ಥಳ ಪರಿಶೀಲನೆಗೆ ತೆರಳಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ನಡುವೆ ಕೋಳಿ ಪಾರಂ ಮಾಲೀಕರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಸಹ ತೆರವುಗೊಳಿಸುವಂತೆ ಸೂಚಿಸಿದ್ದಾರೆ.

ಪ್ರತಿಯೊಬ್ಬರಲ್ಲೂ ಮಾನವೀಯ ಮೌಲ್ಯಗಳು ಅತ್ಯವಶ್ಯಕ : ಡಾ. ಗುರುಪಾದ ಎಸ್. ಮರಿಗುದ್ದಿ

ಭದ್ರಾವತಿ ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಹಾಗೂ ಅಭಿನಂದನೆ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಜೂ. ೨೬ : ಪ್ರತಿಯೊಬ್ಬರಲ್ಲೂ ಮಾನವೀಯ ಮೌಲ್ಯಗಳು ಅತ್ಯವಶ್ಯಕವಾಗಿದ್ದು, ೧೨ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರು ಈ ನಿಟ್ಟಿನಲ್ಲಿಯೇ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು ಎಂದು ಸಂಕೇಶ್ವರದ ವಿಶ್ರಾಂತ ಪ್ರಾಧ್ಯಾಪಕ ಡಾ. ಗುರುಪಾದ ಎಸ್. ಮರಿಗುದ್ದಿ ಹೇಳಿದರು.
    ಅವರು ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಹಾಗೂ ಅಭಿನಂದನೆ ಕಾರ್ಯಕ್ರಮದಲ್ಲಿ 'ಮಾನವತೆಯ ಮಹಾಯಾನಿ ಬಸವಣ್ಣ' ವಿಷಯ ಮಾತನಾಡಿದರು.
    ಜಗಜ್ಯೋತಿ ಬಸವಣ್ಣನವರ ವಚನಗಳು ಮಾನವತೆಯ ನೆಲೆಗಟ್ಟಿನ ಮೇಲೆ ರೂಪುಗೊಂಡಿವೆ. ಧರ್ಮ, ಜಾತಿ, ಲಿಂಗ ತಾರತಮ್ಯವಿಲ್ಲದೆ ಭೂಮಿ ಮೇಲೆ ಪ್ರತಿಯೊಬ್ಬರನ್ನು ಸಮಾನವಾಗಿ ಕಾಣುವ, ಪ್ರೀತಿಸುವ, ಗೌರವಿಸುವ, ಸಹಬಾಳ್ವೆ ಬದುಕು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಮಾನವೀಯ ಮೌಲ್ಯಗಳು ಸಹಕಾರಿಯಾಗಿವೆ. ನುಡಿದಂತೆ ನಡೆವ ಬಸವಣ್ಣನವರ ಬದುಕು, ವಚನಗಳು ಇಂದಿಗೂ ನಮ್ಮೆಲ್ಲರಿಗೂ ಆದರ್ಶತನವಾಗಿದೆ. ವಚನಗಳಲ್ಲಿನ ಪ್ರತಿಯೊಂದು ಮೌಲ್ಯಗಳನ್ನು ಅರ್ಥಮಾಡಿಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು.
    ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಸವಣ್ಣನವರ ಬದುಕೇ ನಮ್ಮೆಲ್ಲರಿಗೂ ದಾರಿದೀಪವಾಗಿದೆ. ಅವರ ಆಶಯದಂತೆ ನಾವೆಲ್ಲರೂ ಮುನ್ನಡೆಯಬೇಕಾಗಿದೆ ಎಂದರು.
    ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ೪ನೇ ಬಾರಿಗೆ ಕ್ಷೇತ್ರದ ಶಾಸಕರನ್ನಾಗಿ ಆಯ್ಕೆ ಮಾಡಿರುವ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ರಾಜ್ಯದಲ್ಲಿ ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು,  ಪ್ರತಿಯೊಬ್ಬರ ಏಳಿಗೆಗಾಗಿ ಶ್ರಮಿಸುತ್ತಿದೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನಾನು ಬದ್ಧನಾಗಿದ್ದು, ಈಗಾಗಲೇ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಸಾವಿರಾರು ಕೋ.ರು. ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲಿವೆ. ಕ್ಷೇತ್ರದ ಜನರು ನನ್ನ ಮೇಲೆ ಹೊಂದಿರುವ ವಿಶ್ವಾಸಕ್ಕೆ ಚಿರಋಣಿಯಾಗಿರುವೆ ಎಂದರು.
    ಚಿಕ್ಕಮಗಳೂರು ಶ್ರೀ ಬಸವತತ್ವ ಪೀಠ ಹಾಗು ಶಿವಮೊಗ್ಗ ಬಸವಕೇಂದ್ರದ ಡಾ. ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಿದ್ದರು.
    ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ ಧನಂಜಯ ಅಭಿನಂದನಾ ನುಡಿಗಳನ್ನಾಡಿದರು. ಪರಿಷತ್ ತಾಲೂಕು ಅಧ್ಯಕ್ಷ ಎನ್.ಎಸ್ ಮಲ್ಲಿಕಾರ್ಜುನಯ್ಯ ಅಧ್ಯಕ್ಷತೆ ವಹಿಸಿದ್ದರು.  ಎಂ. ವಿರುಪಾಕ್ಷಪ್ಪ ಕಾರ್ಯಕ್ರಮ ನಿರೂಪಿಸಿದರು. ವಚನ ಗಾಯನ ನಡೆಯಿತು.