ಕೇರಳ ಸಮಾಜಂ ವತಿಯಿಂದ ಭದ್ರಾವತಿ ಬಿ.ಹೆಚ್ ರಸ್ತೆ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ ೧೧ನೇ ವರ್ಷದ ಓಣಂ ದಿನಾಚರಣೆ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ: ಮಲೆಯಾಳಿ ಭಾಷಿಕರು ದೇಶದ ವಿವಿಧ ಭಾಗಗಳಲ್ಲಿ ನೆಲೆಸಿ ತಮ್ಮದೆ ಆದ ಕೊಡುಗೆಗಳನ್ನು ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು.
ಅವರು ನಗರದ ಕೇರಳ ಸಮಾಜಂ ವತಿಯಿಂದ ಬಿ.ಹೆಚ್ ರಸ್ತೆ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ ೧೧ನೇ ವರ್ಷದ ಓಣಂ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಕೇರಳ ರಾಜ್ಯದಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ವಿದ್ಯಾವಂತರಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಅಲ್ಲದೆ ಎಲ್ಲರೊಂದಿಗೆ ಸೌಹಾರ್ದತೆಯಿಂದ ಬದುಕುವ ಗುಣ ರೂಪಿಸಿಕೊಂಡಿದ್ದಾರೆ. ಇವರ ಏಳಿಗೆಗೆ ಬದ್ಧನಾಗಿದ್ದು, ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಉಡುಪಿಯ ಕೇರಳ ಸಮಾಜಂ ಅಧ್ಯಕ್ಷ ಸುಗುಣ ಕುಮಾರ್ ಮಾತನಾಡಿ, ಮಲಯಾಳಿ ಭಾಷಿಕರು ನಾವೆಲ್ಲರೂ ಒಂದೇ ಎಂಬ ಭಾವನೆ ಎಲ್ಲರಲ್ಲೂ ಮೂಡಿಸಬೇಕು. ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಕೇರಳ ಸಮಾಜಂ ಅಧ್ಯಕ್ಷ ಗಂಗಾಧರ ಮಾತನಾಡಿ, ಸಮಾಜದ ಸದಸ್ಯರುಗಳು ತಮ್ಮ ಸಮುದಾಯದ ಕಷ್ಟದಲ್ಲಿರುವವರಿಗೆ ತಮ್ಮ ಕೈಲಾದ ಮಟ್ಟಿಗೆ ಸಹಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಅಲ್ಲದೆ ಮರಣದ ನಂತರ ತಮ್ಮ ಕಣ್ಣುಗಳನ್ನು ಮತ್ತೊಬ್ಬರಿಗೆ ದಾನ ಮಾಡುವ ಮೂಲಕ ಅವರ ಬಾಳಿಗೆ ಬೆಳಕಾಗಬೇಕೆಂದರು.
ಪ್ರಮುಖರಾದ ಎನ್.ಡಿ.ಸತೀಶ್, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಬಾಲಚಂದ್ರನ್, ಯುವ ಘಟಕದ ಅಧ್ಯಕ್ಷ ಎಸ್.ಪ್ರಸನ್ನ ಕುಮಾರ್, ಅಬ್ದುಲ್ ನಜೀಬ್, ಡಾ.ಪ್ರವೀಣ ಜೇಕೋಬ್, ಕೆ.ಇಬ್ರಾಹಿಂ ಸೇರಿದಂತೆ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಓಣಂ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಹೂವಿನ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಆರ್ಯ ಚಂದ್ರನ್ ಪ್ರಾರ್ಥಿಸಿ, ವಿಜಯ್ ಕುಮಾರ್ ಸ್ವಾಗತಿಸಿದರು. ಪ್ರಶಾಂತ್ ನಿರೂಪಿಸಿ, ವಂದಿಸಿದರು.