Saturday, December 16, 2023

ಗೆಲುವು-ಸೋಲಿನ ಚಿಂತೆ ಬಿಡಿ, ಕ್ರೀಡೆಯಲ್ಲಿ ಪಾಲ್ಗೊಳ್ಳಿ : ಮಹೇಶ್ವರಯ್ಯ

ಶಿವಮೊಗ್ಗ ಜಿಲ್ಲಾ ಪವರ್‌ಲಿಫ್ಟಿಂಗ್ ಅಸೋಸಿಯೇಷನ್ ವತಿಯಿಂದ ಶನಿವಾರ ಭದ್ರಾವತಿ ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಪುರುಷರ ಹಾಗೂ ಮಹಿಳೆಯರ ಓಪನ್ ಪವರ್ ಲಿಫ್ಟಿಂಗ್ ಸ್ಪರ್ಧೆ ಹಾಗೂ ರಾಜ್ಯಮಟ್ಟದ ಎಲ್ಲಾ ವಿಭಾಗದ ಸ್ಪರ್ಧೆಗಳಿಗೆ ಆಯ್ಕೆ ಪ್ರಕ್ರಿಯೆ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್.ಚಂದ್ವಾನಿ ಉದ್ಘಾಟಿಸಿದರು.
    ಭದ್ರಾವತಿ: ಕ್ರೀಡಾಕೂಟಗಳಲ್ಲಿ ಯುವಜನತೆಯ ಪಾಲ್ಗೊಳ್ಳುವಿಕೆ ಮುಖ್ಯ. ಪಾಲ್ಗೊಳ್ಳುವ ಮೊದಲೆ ಗೆಲುವು-ಸೋಲಿನ ಬಗ್ಗೆ ಚಿಂತಿಸಬಾರದು. ಪಾಲ್ಗೊಳ್ಳುವಿಕೆಯಿಂದ ಸಾಮರ್ಥ್ಯ ವೃದ್ಧಿಸುತ್ತದೆ ಎಂದು ಅಂತಾರಾಷ್ಟ್ರೀಯ ಪವರ್ ಲಿಫ್ಟರ್ ಮಹೇಶ್ವರಯ್ಯ ಹೇಳಿದರು.
    ಶಿವಮೊಗ್ಗ ಜಿಲ್ಲಾ ಪವರ್‌ಲಿಫ್ಟಿಂಗ್ ಅಸೋಸಿಯೇಷನ್ ವತಿಯಿಂದ ಶನಿವಾರ ನಗರದ ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಪುರುಷರ ಹಾಗೂ ಮಹಿಳೆಯರ ಓಪನ್ ಪವರ್ ಲಿಫ್ಟಿಂಗ್ ಸ್ಪರ್ಧೆ ಹಾಗೂ ರಾಜ್ಯಮಟ್ಟದ ಎಲ್ಲಾ ವಿಭಾಗದ ಸ್ಪರ್ಧೆಗಳಿಗೆ ಆಯ್ಕೆ ಪ್ರಕ್ರಿಯೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ, ಅಂತರಾಷ್ಟ್ರೀಯ ಪವರ್ ಲಿಫ್ಟರ್ ಪ್ರಕಾಶ್ ಕಾರಂತ್ ಮಾತನಾಡಿ, ೮೦ರ ದಶಕದಲ್ಲಿ ವಿಐಎಸ್‌ಎಲ್ ಕಾರ್ಖಾನೆ ಕ್ರೀಡಾಪಟುಗಳಿಗೆ ನೀಡಿದ ಪ್ರೋತ್ಸಾಹ ಇಂದು ದಂತಕಥೆ. ಅನೇಕ ಕ್ರೀಡಾಪಟುಗಳ ಬೆಳವಣಿಗೆಯಲ್ಲಿ ವಿಐಎಸ್‌ಎಲ್ ಕೊಡುಗೆ ಮಹತ್ವದ್ದಾಗಿದೆ ಎಂದು ಕಾರ್ಖಾನೆ ಸಹಕಾರ ಸ್ಮರಿಸಿದರು.
    ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೈಲಜಾ ಎಸ್. ಹೊಸಳ್ಳೇರ ಮಾತನಾಡಿ,  ಕಾಲೇಜು ಹಲವಾರು ಪ್ರತಿಭಾನ್ವಿತ ಪವರ್ ಲಿಪ್ಟರ್ ಪ್ರತಿಭೆಗಳನ್ನು ಒಳಗೊಂಡಿದೆ. ಈ ಕಾಲೇಜಿಗೆ ಲಭಿಸಿರುವ ಬಹುಮಾನಗಳ ಪಟ್ಟಿಯನ್ನು ಗಮನಿಸಿದರೆ ಈ ಕಾಲೇಜಿನ ಕ್ರೀಡಾ ಸಾಧನೆ ತಿಳಿಯುತ್ತದೆ ಎಂದರು.
    ವೇದಿಕೆಯಲ್ಲಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್.ಚಂದ್ವಾನಿ, ಶಿವಮೊಗ್ಗ ಜಿಲ್ಲಾ ಪವರ್‌ಲಿಫ್ಟಿಂಗ್ ಅಸೋಸಿಯೇಷನ್ ಅಧ್ಯಕ್ಷ ವೈ. ನಟರಾಜ್, ಹಿರಿಯ ಕ್ರೀಡಾಪಟುಗಳಾ ವೀರಭದ್ರಯ್ಯ, ಮಸ್ತಾನ್, ವರದರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಎಚ್.ಎಸ್ ಶಿವರುದ್ರಪ್ಪ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲೆಯ ವಿವಿಧೆಡೆಗಳಿಂದ ಕ್ರೀಡಾಪಟುಗಳು ಪಾಲ್ಗೊಂಡಿದ್ದರು.

ವಿಶಿಷ್ಟ ಚೇತನರಿಗೆ ಪೋಷಕರ ಸಹಕಾರ ಅತಿ ಮುಖ್ಯ : ಎ.ಕೆ ನಾಗೇಂದ್ರಪ್ಪ

ಭದ್ರಾವತಿ ನ್ಯೂಟೌನ್ ಶ್ರೀ ಸತ್ಯಸಾಯಿ ಸೇವಾ ಕೇಂದ್ರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ ಹಾಗು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ೨೦೦೩ ರಿಂದ ೨೦೦೬ನೇ ಸಾಲಿನ ಹಳೇಯ ವಿದ್ಯಾರ್ಥಿಗಳ ಸ್ನೇಹ ಬಳಗದ ಸಹಯೋಗದೊಂದಿಗೆ ವಿಶಿಷ್ಟಚೇತನರಿಗೆ ಅಗತ್ಯ ಸಾಮಗ್ರಿಗಳನ್ನು ವಿತರಿಸಲಾಯಿತು.
    ಭದ್ರಾವತಿ: ವಿಶಿಷ್ಟ ಚೇತನರಿಗೆ ಪೋಷಕರ ಸಹಕಾರ ಅತಿ ಅವಶ್ಯಕವಾಗಿದ್ದು, ಇದರಿಂದ ವಿಶಿಷ್ಟ ಚೇತನರ ಆತ್ಮಬಲ ಮತ್ತಷ್ಟು ಹೆಚ್ಚುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹೇಳಿದರು.
    ಅವರು ಶನಿವಾರ ನಗರದ ನ್ಯೂಟೌನ್ ಶ್ರೀ ಸತ್ಯಸಾಯಿ ಸೇವಾ ಕೇಂದ್ರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ ಹಾಗು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ೨೦೦೩ ರಿಂದ ೨೦೦೬ನೇ ಸಾಲಿನ ಹಳೇಯ ವಿದ್ಯಾರ್ಥಿಗಳ ಸ್ನೇಹ ಬಳಗದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶಿಷ್ಟಚೇತನರಿಗೆ ಅಗತ್ಯ ಸಾಮಗ್ರಿ ವಿತರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
    ಸಮಾಜದ ಎಲ್ಲರೂ ವಿಶಿಷ್ಟ ಚೇತನರ ನೆರವಿಗೆ ಮುಂದಾಗಬೇಕು. ಅವರಿಗೆ ಇನ್ನೂ ಹೆಚ್ಚಿನ ಆತ್ಮಸ್ಥೈರ್ಯ ತುಂಬುವ ಕಾರ್ಯ ನಡೆಯಬೇಕು ಎಂದರು.    
    ಕ್ಷೇತ್ರ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ ಮಾತನಾಡಿ, ವಿಶಿಷ್ಟಚೇತನರ ಬಗ್ಗೆ ಅನುಕಂಪ ಪಡುವುದರಿಂದ ಉಪಯೋಗವಾಗುವುದಿಲ್ಲ. ಬದಲಾಗಿ ಅವರಿಗೆ ಅಗತ್ಯವಿರುವ ಸಹಾಯ, ಸಹಕಾರ ನೀಡುವುದು ಮುಖ್ಯ. ಎಲ್ಲರು ತಮ್ಮ ಸಂಪಾದನೆಯಲ್ಲಿ ಅಲ್ಪ ಮೊತ್ತದ ಹಣ ಈ ರೀತಿಯ ಸೇವಾ ಕಾರ್ಯಗಳಿಗೆ ಬಳಸಿದರೆ ಮಾನವತ್ವ ವೃದ್ಧಿಸುತ್ತದೆ ಎಂದರು.
    ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ. ಪೃಥ್ವಿರಾಜ್ ಮಾತನಾಡಿ, ಹಣವಿದ್ದರಿಗೆ ಮತ್ತಷ್ಟು ಹಣಮಾಡುವ ಆಸೆ ಇರುತ್ತದೆ. ಆದರೆ ಉತ್ತಮ ಮಾನವೀಯ ಮೌಲ್ಯ ಹೊಂದಿದವರಿಂದ ಮಾತ್ರ ಸೇವಾ ಕಾರ್ಯಗಳನ್ನು ಮಾಡಲು ಸಾಧ್ಯ ಎಂದರು.
    ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧಕ್ಷೆ ಎಸ್. ಉಮಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಗೌಡ್ರು, ಶ್ರೀ ಸತ್ಯಸಾಯಿ ಶಿಕ್ಷಣ ಸಂಸ್ಥೆ ಶಿಕ್ಷಣ ಸಂಯೋಜಕ ಪರಮೇಶ್ವರಪ್ಪ, ಸರ್.ಎಂ.ವಿ ಕಾಲೇಜಿನ ೨೦೦೩ ರಿಂದ ೨೦೦೬ನೇ ಸಾಲಿನ ಸ್ನೇಹ ಬಳಗದ ಸದಸ್ಯರಾದ ಸುಬ್ರಮಣ್ಯ, ವೀರೇಂದ್ರ ಪಾಟೀಲ್, ಹೇಮ, ಶ್ರೀಕಾಂತ್, ಶರತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕಾರ್ಯಕ್ರಮದಲ್ಲಿ ಸ್ನೇಹಬಳಗದ ವತಿಂದ ವಿಶಿಷ್ಟಚೇತನ ವಿದ್ಯಾರ್ಥಿಗಳಿಗೆ ಅಗತ್ಯ ಸಾಮಾಗ್ರಿಗಳನ್ನು ವಿತರಿಸಲಾಯಿತು. ಲತಾ ಪ್ರಾರ್ಥಿಸಿದರು. ಟಿ.ಎನ್ ಪ್ರತಿಭಾ ಸ್ವಾಗತಿಸಿದರು. ರೇಣುಕಾ ಸಿ.ಜಿ. ನಿರೂಪಿಸಿ ಡಿ.ಎಚ್ ತೀರ್ಥಪ್ಪ ವಂದಿಸಿದರು.

Friday, December 15, 2023

ಕೋಟ್ಪಾ ಕಾಯ್ದೆಯಡಿ ೩೨ ಪ್ರಕರಣ ದಾಖಲು : ರು. ೬ ಸಾವಿರ ದಂಡ ವಸೂಲಿ

ಕೋಟ್ಪಾ ಕಾಯ್ದೆಯಡಿ ಭದ್ರಾವತಿ  ನಗರದ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಜಯಶ್ರೀ ವೃತ್ತ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ) ಸುತ್ತಾಮುತ್ತ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಿರುವ ಘಟನೆ ನಡೆದಿದೆ.
    ಭದ್ರಾವತಿ :  ಕೋಟ್ಪಾ ಕಾಯ್ದೆಯಡಿ ನಗರದ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಜಯಶ್ರೀ ವೃತ್ತ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ) ಸುತ್ತಾಮುತ್ತ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಿರುವ ಘಟನೆ ನಡೆದಿದೆ.
    ೩೨ ಪ್ರಕರಣಗಳನ್ನು ದಾಖಲಿಸಿ ಒಟ್ಟು ರು. ೬ ಸಾವಿರ ದಂಡ ವಿಧಿಸಲಾಗಿದೆ. ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್, ಸಮಾಜ ಕಾರ್ಯಕರ್ತ ರವಿರಾಜ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಆನಂದಮೂರ್ತಿ, ಚೇತನ್,  ಆಕಾಶ್ ಹಾಗೂ ಪೊಲೀಸ್ ಸಿಬ್ಬಂದಿ ಎಚ್. ಪ್ರಸನ್ನ  ಪಾಲ್ಗೊಂಡಿದ್ದರು.  

ಹುಟ್ಟುಹಬ್ಬಕ್ಕೆ ರಕ್ತದಾನ ಮಾಡಿ ಮಾದರಿಯಾದ ಯುವ ಮುಖಂಡ ಬಿ.ಎಸ್ ಬಸವೇಶ್

ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳ ಮೂಲಕ ಹುಟ್ಟುಹಬ್ಬ ಆಚರಣೆ

ಭದ್ರಾವತಿಯಲ್ಲಿ ಈ ಬಾರಿ ಯುವ ಮುಖಂಡ ಬಿ.ಎಸ್ ಬಸವೇಶ್ ಹುಟ್ಟುಹಬ್ಬ ಹಲವು ವಿಭಿನ್ನ ಸಾಮಾಜಿಕ ಸೇವಾ ಕಾರ್ಯಕ್ರಮಗಳ ಆಯೋಜನೆ ಮೂಲಕ ವಿಶೇಷವಾಗಿ ಆಚರಿಸಲಾಯಿತು.
ಭದ್ರಾವತಿ : ಈ ಬಾರಿ ಯುವ ಮುಖಂಡ ಬಿ.ಎಸ್ ಬಸವೇಶ್ ಹುಟ್ಟುಹಬ್ಬ ಹಲವು ವಿಭಿನ್ನ ಸಾಮಾಜಿಕ ಸೇವಾ ಕಾರ್ಯಕ್ರಮಗಳ ಆಯೋಜನೆ ಮೂಲಕ ವಿಶೇಷವಾಗಿ ಆಚರಿಸಲಾಯಿತು.


    ಹುಟ್ಟುಹಬ್ಬ ಆಚರಣೆಗಾಗಿ ಸುಮಾರು ೧ ತಿಂಗಳಿನಿಂದ ಸಿದ್ದತೆಗಳನ್ನು ಕೈಗೊಳ್ಳಲಾಗಿದ್ದು, ಸಂಗೊಳ್ಳಿ ರಾಯಣ್ಣ ಯುವ ವೇದಿಕೆ, ಬಸವೇಶ್ ಅಭಿಮಾನಿ ಬಳಗ ಹಾಗು ಸ್ಪುಟ್ನಿಕ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್ ಮತ್ತು ಇನ್ನಿತರ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಹಳೇನಗರದ ಕನಕಮಂಟಪ ಮೈದಾನದಲ್ಲಿ ಬೃಹತ್ ಉಚಿತ ರಕ್ತದಾನ, ನೇತ್ರದಾನ ನೋಂದಣಿ ಶಿಬಿರ ಹಾಗು ಕನ್ನಡಕ ವಿತರಣೆ ಮತ್ತು ರಾಜ್ಯಮಟ್ಟದ ಬಾಲಕ ಮತ್ತು ಬಾಲಕಿಯರ ಜ್ಯೂನಿಯರ್ ಬಾಲ್ ಬ್ಯಾಡ್ಮಿಂಟನ್ ಲೀಗ್ ಚಾಂಪಿಯನ್ ಶಿಪ್ ಪಂದ್ಯಾವಳಿ ಆಯೋಜಿಸಲಾಗಿತ್ತು.


    ಬಸವೇಶ್ ತಮ್ಮ ಹುಟ್ಟುಹಬ್ಬಕ್ಕೆ ತಾವೇ ರಕ್ತದಾನ ಮಾಡುವ ಮೂಲಕ ಗಮನ ಸೆಳೆದರು. ತಾಲೂಕು ಸವಿತಾ ಸಮಾಜ ಮತ್ತು ದಯಾ ಸಾಗರ ಟ್ರಸ್ಟ್ ವತಿಯಿಂದ ಉಚಿತ ಕೇಶವಿನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದೆ ರೀತಿ ನಗರದ ವಿವಿಧೆಡೆ ವಿವಿಧ ಸಂಘ-ಸಂಸ್ಥೆಗಳಿಂದ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಉದ್ಯಮಿ ಬಿ.ಕೆ ಶಿವಕುಮಾರ್, ಮುಖಂಡರಾದ ಎಸ್. ಅರುಣ್‌ಕುಮಾರ್, ಎಚ್. ರವಿಕುಮಾರ್,  ಸಂಗೊಳ್ಳಿ ರಾಯಣ್ಣ ಯುವ ವೇದಿಕೆ ಪ್ರಮುಖರಾದ ಅಭಿಲಾಷ್, ನಾಗಭೂಷಣ್, ರಬ್ಬರ್ ಕಾಡು ನಾಗರಾಜ್, ಕುಮಾರ್(ಮಾಸ್ಟರ್), ಸ್ಪುಟ್ನಿಕ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್ ರಾಜು, ತಮಿಳ್ ಸಂಗಮ್ ಅಧ್ಯಕ್ಷ ಚಂದ್ರಶೇಖರ್, ಕೇಸರಿ ಪಡೆ ಗಿರೀಶ್, ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್ ಮುಸ್ವೀರ್ ಬಾಷಾ  ಸೇರಿದಂತೆ ನೂರಾರು ಮಂದಿ ಮುಖಂಡರು, ಅಭಿಮಾನಿಗಳು ಹುಟ್ಟುಹಬ್ಬ ಯಶಸ್ವಿಗಾಗಿ ಶ್ರಮಿಸಿದರು.


ಭದ್ರಾವತಿಯಲ್ಲಿ  ಈ ಬಾರಿ ಯುವ ಮುಖಂಡ ಬಿ.ಎಸ್ ಬಸವೇಶ್ ಹುಟ್ಟುಹಬ್ಬ ಹಲವು ವಿಭಿನ್ನ ಸಾಮಾಜಿಕ ಸೇವಾ ಕಾರ್ಯಕ್ರಮಗಳ ಆಯೋಜನೆ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಬಸವೇಶ್ ಅವರನ್ನು , ಸ್ಪುಟ್ನಿಕ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಸುಶ್ರೀಂದ್ರತೀರ್ಥ ಶ್ರೀಪಾದರು

 


    ಭದ್ರಾವತಿ : ಉಡುಪಿ ಪುತ್ತಿಗೆ ಮಠದ ಸುಶ್ರೀಂದ್ರತೀರ್ಥ ಶ್ರೀಪಾದರು ಹಳೇನಗರದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು ನಂತರ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಕ್ತರಿಗೆ ಆಶೀರ್ವಚನ ನೀಡಿದರು.

    ಉಡುಪಿ ಪುತ್ತಿಗೆ ಮಠದಲ್ಲಿ ಹಮ್ಮಿಕೊಳ್ಳಲಾಗಿರುವ ಶ್ರೀಕೃಷ್ಣನ ಭಾವಿ ಪರ್ಯಾಯ ಪೀಠಾಧ್ಯಕ್ಷರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ನಾಲ್ಕನೇ ಪರ್ಯಾಯ ಮಹೋತ್ಸವದ ಅಂಗವಾಗಿ ಆಹ್ವಾನ ಪತ್ರಿಕೆ ನೀಡಲು ಸುಶ್ರೀಂದ್ರತೀರ್ಥ ಶ್ರೀಪಾದರು ನಗರಕ್ಕೆ ಆಗಮಿಸಿದ್ದರು.

   ವಿವಿಧ ಭಜನಾ ಮಂಡಳಿ ಹಾಗೂ ಸಂಘ ಸಂಸ್ಥೆಗಳಿಂದ ಶ್ರೀಪಾದರಿಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಲಾಯಿತು. ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರುಳಿಧರ್ ತಂತ್ರಿ, ಉಪಾಧ್ಯಕ್ಷೆ ಸುಮಾರಾ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಜಿ. ರಮಾಕಾಂತ್, ನಿರಂಜನಾಚಾರ್ಯ, ಗೋಪಾಲಕೃಷ್ಣ ಆಚಾರ್, ಮಧುರ ಸುಧೀಂದ್ರ, ಜಯತೀರ್ಥ, ನಿತ್ಯಾನಂದ ನಾಯಕ, ಶುಭ ಗುರುರಾಜ್, ಸುಪ್ರಿತ ತಂತ್ರಿ, ಸತ್ಯನಾರಾಯಣಚಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ವಾಟರ್ ಪ್ಯೂರಿಫೈಯರ್ ವಿತರಣೆ

ಭ್ರಷ್ಟಾಚಾರದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಿ : ಕರವೇ ಪ್ರತಿಭಟನೆ

ಭದ್ರಾವತಿ ತಾಲೂಕಿನ ಗ್ರಾಮೀಣ ಪ್ರದೇಶದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ವಾಟರ್ ಪ್ಯೂರಿಫೈಯರ್ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರ ವಿರೋಧಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಉಪತಹಸೀಲ್ದಾರ್ ಮಂಜಾನಾಯ್ಕ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ: ತಾಲೂಕಿನ ಗ್ರಾಮೀಣ ಪ್ರದೇಶದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ವಾಟರ್ ಪ್ಯೂರಿಫೈಯರ್ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರ ವಿರೋಧಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಉಪತಹಸೀಲ್ದಾರ್ ಮಂಜಾನಾಯ್ಕ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
    ತಾಲೂಕಿನ ಗ್ರಾಮೀಣ ಭಾಗದಲ್ಲಿ ಕುಡಿಯಲು ಗಡಸು ನೀರು ಬಳಸುತ್ತಿರುವ ಪ್ರದೇಶಗಳ ಸುಮಾರು ೮೦ ಅಂಗನವಾಡಿ ಕೇಂದ್ರಗಳಿಗೆ ತಾಲೂಕು ಪಂಚಾಯಿತಿ ವತಿಯಿಂದ ೨೦೨೩-೨೪ನೇ ಸಾಲಿನ ಸಂಯುಕ್ತ ಅನುದಾನದ ಸುಮಾರು ೪,೭೬,೦೦೦ ರು. ವೆಚ್ಚದಲ್ಲಿ ವಾಟರ್ ಪ್ಯೂರಿಫೈಯರ್‌ಗಳನ್ನು ಖರೀದಿಸಿ ತಲಾ ಒಂದರಂತೆ ನೀಡಲಾಗಿದೆ. ಒಂದು ವಾಟರ್ ಪ್ಯೂರಿಫೈಯರ್‌ಗೆ ೫,೯೫೦ ರು. ದಾಖಲಿಸಲಾಗಿದ್ದು, ಆದರೆ ವಾಸ್ತವವಾಗಿ ಅಂಗನವಾಡಿ ಕೇಂದ್ರಗಳಿಗೆ ನೀಡಲಾಗಿರುವ ಪ್ಯೂರಿಫೈಯರ್ ಐಎಸ್‌ಐ ಪ್ರಮಾಣಿಕೃತ ಹೊಂದಿಲ್ಲ. ಕಳಪೆ ಗುಣಮಟ್ಟದಿಂದ ಕೂಡಿದ್ದು, ಮಾರುಕಟ್ಟೆಯಲ್ಲಿ ಇದರ ೧,೨೦೦ ರು. ಮೌಲ್ಯ ಹೊಂದಿರುವಂತೆ ಕಂಡು ಬರುತ್ತಿದೆ. ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
    ವಾಟರ್ ಪ್ಯೂರಿಫೈಯರ್‌ಗಳನ್ನು ಅಂಗಡಿವಾಡಿ ಕೇಂದ್ರಗಳಿಗೆ ವಿತರಿಸಿ ಸುಮಾರು ೮ ತಿಂಗಳುಗಳು ಕಳೆದಿವೆ. ಕಳಪೆ ಗುಣಮಟ್ಟದ ವಾಟರ್ ಪ್ಯೂರಿಫೈಯರ್‌ಗಳನ್ನು ವಿತರಿಸಲಾಗಿದ್ದರೂ ಸಹ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಮನ ಹರಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ. ಸಾಮಾಜಿಕ ಹೋರಾಟಗಾರ ಶಿವಕುಮಾರ್‌ರವರು ಈ ಭ್ರಷ್ಟಾಚಾರ ಪ್ರಶ್ನಿಸಿದ್ದು, ಸಮಗ್ರ ಮಾಹಿತಿ ಸಂಗ್ರಹಿಸಿ ಮೇಲಾಧಿಕಾರಿಗಳಿಗೆ ದೂರು ನೀಡಿದ ಹಿನ್ನಲೆಯಲ್ಲಿ ೩ನೇ ವ್ಯಕ್ತಿಗಳಿಂದ ತನಿಖೆ ನಡೆಸಲಾಗಿದ್ದು, ಇಲ್ಲೂ ಸಹ ಭ್ರಷ್ಟಾಚಾರ ನಡೆದಿದೆ. ಸರ್ಕಾರಕ್ಕೆ ಸುಳ್ಳು ವರದಿಯನ್ನು ನೀಡಲಾಗಿದೆ. ಇದನ್ನು ಗಮನಿಸಿದಾಗ ಈ ಭ್ರಷ್ಟಾಚಾರದಲ್ಲಿ ಅಧಿಕಾರಿಗಳ ದೊಡ್ಡ ಜಾಲವೇ ಭಾಗಿಯಾಗಿರುವುದು ಕಂಡು ಬರುತ್ತಿದೆ. ಸರ್ಕಾರ ತಕ್ಷಣ ಸಮಗ್ರ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
    ವೇದಿಕೆ ನಗರ ಅಧ್ಯಕ್ಷ ಎ. ಸಂದೇಶ್ ಕುಮಾರ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಬೆಂಗಳೂರು ನಗರ ಅಧ್ಯಕ್ಷ ಆರ್. ಬಾಲಮುರಳಿ, ತಾಲೂಕು ಅಧ್ಯಕ್ಷ ಎನ್. ನಾಗರಾಜ, ಪ್ರಧಾನ ಕಾರ್ಯದರ್ಶಿ ರಾಜುನಾಯ್ಕ, ಸಂಘಟನಾ ಕಾರ್ಯದರ್ಶಿ ಎ. ಗಿರೀಶ್, ಉಪಾಧ್ಯಕ್ಷ ಹೆಬ್ರಿಯಸ್, ಮುತ್ತಣ್ಣ, ನಾಗರಾಜ್, ಎಲ್. ಶ್ರೀನಿವಾಸ್, ಬಿ.ಪಿ ಚಂದ್ರಶೇಖರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Thursday, December 14, 2023

ಸೇತುವೆ ಕಾಮಗಾರಿ ಮುಕ್ತಾಯಗೊಳಿಸಿ ಸಾರ್ವಜನಿಕ ಸೇವೆಗೆ ಸಮರ್ಪಿಸಿ

ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್) ಪಕ್ಷದಿಂದ ಪ್ರತಿಭಟನಾ ಧರಣಿ

ಭದ್ರಾವತಿ ನಗರದ ಹೃದಯ ಭಾಗದಲ್ಲಿ ಹಳೇಸೇತುವೆ ಪಕ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿ ಮುಕ್ತಾಯಗೊಳಿಸಿ ತಕ್ಷಣ ಸಾರ್ವಜನಿಕರ ಸೇವೆಗೆ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್) ಪಕ್ಷದಿಂದ ಗುರುವಾರ ಮಾಧವಚಾರ್ ವೃತ್ತದಲ್ಲಿ ಪ್ರತಿಭಟನಾ ಧರಣಿ ನಡೆಸಲಾಯಿತು.
    ಭದ್ರಾವತಿ : ನಗರದ ಹೃದಯ ಭಾಗದಲ್ಲಿ ಹಳೇಸೇತುವೆ ಪಕ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿ ಮುಕ್ತಾಯಗೊಳಿಸಿ ತಕ್ಷಣ ಸಾರ್ವಜನಿಕರ ಸೇವೆಗೆ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್) ಪಕ್ಷದಿಂದ ಗುರುವಾರ ಮಾಧವಚಾರ್ ವೃತ್ತದಲ್ಲಿ ಪ್ರತಿಭಟನಾ ಧರಣಿ ನಡೆಸಲಾಯಿತು.
    ನಗರದ ಹೃದಯ ಭಾಗದ ಭದ್ರಾನದಿಯಲ್ಲಿ ನಿರ್ಮಿಸಲಾಗಿರುವ ಸುಮಾರು ೧೫೦ ವರ್ಷಗಳಿಗೂ ಹಳೇಯದಾದ ಸೇತುವೆ ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಈ ಸೇತುವೆ ಪಕ್ಕದಲ್ಲಿ ಮತ್ತೊಂದು ಸೇತುವೆ ಕಳೆದ ಸುಮಾರು ೫ ವರ್ಷಗಳಿಂದ ನಿರ್ಮಿಸುತ್ತಿದ್ದು, ಆದರೆ ಇಂದಿಗೂ ಸಾರ್ವಜನಿಕರ ಸೇವೆಗೆ ಕಲ್ಪಿಸಿಕೊಟ್ಟಿಲ್ಲ. ವಿಳಂಬ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಪಕ್ಷದ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದರು.
    ಹಳೇಯ ಸೇತುವೆ ಸಂಪೂರ್ಣವಾಗಿ ಶಿಥಿಲಗೊಳ್ಳುತ್ತಿದ್ದು, ಈ ಸೇತುವೆ ಮೇಲೆ ವಾಹನ ದಟ್ಟಣೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ. ಇದರಿಂದಾಗಿ ಸೇತುವೆ ಕುಸಿಯುವ ಸಾಧ್ಯತೆ ಹೆಚ್ಚಾಗಿದ್ದು, ಜೀವಭಯದಲ್ಲಿ ವಾಹನ ಸವಾರರು, ಪಾದಚಾರಿಗಳು ಸಂಚರಿಸುವಂತಾಗಿದೆ.  ಈ ಹಿನ್ನಲೆಯಲ್ಲಿ ತಕ್ಷಣ ಕೆಆರ್‌ಡಿಸಿಎಲ್ ಇಲಾಖೆ ಸಂಬಂಧಪಟ್ಟ ಅಧಿಕಾರಿಗಳು,  ಜಿಲ್ಲಾಧಿಕಾರಿಗಳು ಗಮನ ಹರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಪಕ್ಷದ ಶಿವಮೊಗ್ಗ ಅಧ್ಯಕ್ಷ ಪ್ರಭು, ತಾಲೂಕು ಅಧ್ಯಕ್ಷ ನಾಗರಾಜರಾವ್ ಶಿಂಧೆ, ಪ್ರಧಾನ ಕಾರ್ಯದರ್ಶಿ ತೀರ್ಥೇಶ್, ತ್ಯಾಗರಾಜ, ಬಿ.ಎಸ್. ದಯಾನಂದ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.