ಭದ್ರಾವತಿ ನಗರದ ಅಪೇಕ್ಷ ನೃತ್ಯ ಕಲಾವೃಂದ ಮತ್ತು ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ವತಿಯಿಂದ ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವ ಆಂಗವಾಗಿ ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ೬೯ನೇ ಕನ್ನಡ ರಾಜ್ಯೋತ್ಸವ ಮತ್ತು ಡಾ. ವಿಷ್ಣುವರ್ಧನ್ ಪ್ರಶಸ್ತಿ, ಅಪೇಕ್ಷ ರಾಜ್ಯ ಪ್ರಶಸ್ತಿ, ಕನ್ನಡ ಕುವರ ಕುವರಿ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಬಿ.ಕೆ ಮೋಹನ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಭದ್ರಾವತಿ: ಕನ್ನಡ ರಾಜ್ಯೋತ್ಸವ ಕೇವಲ ನ.೧ಕ್ಕೆ ಸೀಮಿತವಾಗಬಾರದು. ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿ ಉಳಿವಿಗಾಗಿ ನಾವು ಯಾವುದೇ ತ್ಯಾಗಕ್ಕೂ ಸಿದ್ಧರಾಗಿರಬೇಕು ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.
ಅವರು ನಗರದ ಅಪೇಕ್ಷ ನೃತ್ಯ ಕಲಾವೃಂದ ಮತ್ತು ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ವತಿಯಿಂದ ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವ ಆಂಗವಾಗಿ ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ೬೯ನೇ ಕನ್ನಡ ರಾಜ್ಯೋತ್ಸವ ಮತ್ತು ಡಾ. ವಿಷ್ಣುವರ್ಧನ್ ಪ್ರಶಸ್ತಿ, ಅಪೇಕ್ಷ ರಾಜ್ಯ ಪ್ರಶಸ್ತಿ, ಕನ್ನಡ ಕುವರ ಕುವರಿ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಡಾ. ರಾಜ್‌ಕುಮಾರ್ ಅವರಂತಹ ಮೇರುನಟರು, ಗೋಕಾಕ್ ಚಳುವಳಿ ಸೇರಿದಂತೆ ಅನೇಕ ಕನ್ನಡ ಪರ ಚಳುವಳಿಗಳಲ್ಲಿ ಭಾಗವಹಿಸುವ ಮೂಲಕ ಕನ್ನಡಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಭಾಷೆ, ಬದುಕು, ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಯಲ್ಲಿ ಕನ್ನಡ ಭಾಷೆಯು ತನ್ನತನವನ್ನು ಹೊಂದಿದೆ ಎಂದರು.
ನಮ್ಮ ಉಸಿರಿರುವವರೆಗೂ ಕನ್ನಡತನವನ್ನು ಮೈಗೂಡಿಸಿಕೊಳ್ಳಬೇಕು. ಕನ್ನಡ ಪುಸ್ತಕಗಳನ್ನು ಹೆಚ್ಚಾಗಿ ಓದುವ, ಕನ್ನಡ ಸಂಸ್ಕೃತಿಯನ್ನು ಅಭಿಮಾನಿಸಿ, ಪ್ರೀತಿಸುವ ಮನೋಭಾವ ನಮ್ಮಲ್ಲಿ ಬರಬೇಕು. ಮೊದಲು ಕನ್ನಡವನ್ನು ಉಳಿಸಿ, ಬೆಳೆಸಿ, ಪ್ರೋತ್ಸಾಹಿಸಿ. ನಮ್ಮ ಆಚಾರ, ವಿಚಾರ, ಸಂಸ್ಕೃತಿ, ಸಂಸ್ಕಾರವನ್ನು ಮರೆಯಬೇಡಿ. ಸರ್ಕಾರಿ ಶಾಲೆಯಲ್ಲಿ ಹಾಗೂ ಕನ್ನಡ ಮಾಧ್ಯಮದಲ್ಲಿ ಓದಿದ ಮಕ್ಕಳಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡುವಂತಾಗಬೇಕು ಎಂದರು.
ಅಪೇಕ್ಷ ಕಲಾವೃಂದದ ವತಿಯಿಂದ ಕ್ಷೇತ್ರದ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಅಭೂತಪೂರ್ವ ಕಾರ್ಯಕ್ರಮ ಮಾಡುತ್ತಿರುವುದು ಅತ್ಯಂತ ಹೆಮ್ಮೆಯ ವಿಚಾರ. ಕಲಾವಿದರಲ್ಲಿ ಕೆಲವರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಅಂತಹ ಕಲಾವಿದರಿಗೆ ಸರ್ಕಾರಿ ಸೌಲಭ್ಯಗಳು ಹಾಗೂ ಆರ್ಥಿಕ ನೆರವು ಸಿಗುವಂತಾಗಬೇಕೆಂದರು.
ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅಪೇಕ್ಷ ಮಂಜುನಾಥ್ ಅವರಿಗೆ ಈ ಬಾರಿ ರಾಷ್ಟ್ರಪ್ರಶಸ್ತಿ ಲಭಿಸಬೇಕಿತ್ತು. ಕಾರಣಾಂತರಗಳಿಂದ ಕೈತಪ್ಪಿದೆ. ೨೦೨೫ರ ರಾಜ್ಯೋತ್ಸವದ ವೇಳೆಗೆ ಅಪೇಕ್ಷ ಮಂಜುನಾಥ್ ಅವರಿಗೆ ಅವರ ಕಲಾ ಸೇವೆ ಗುರುತಿಸಿ ರಾಜ್ಯ ಪ್ರಶಸ್ತಿ ನೀಡುವಂತೆ ತಾವು ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಒಟ್ಟಿಗೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಭರವಸೆ ನೀಡಿದರು.
ಕಲಾ ಸೇವೆಗೆ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ವಿಷ್ಣುವರ್ಧನ್ ಅವರ ಕಲೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ನಮ್ಮೂರಿನ ಹೆಸರನ್ನು ರಾಜ್ಯದ ಉದ್ದಗಲಕ್ಕೂ ಹರಡಿರುವ ಅಪೇಕ್ಷ ಮಂಜುನಾಥ್ ಅವರ ಕಲಾ ಸೇವೆ ಹೀಗೇ ಮುಂದುವರೆಯಲಿ ಎಂದು ಆಶಿಸಿದರು.
ಬೆಂಗಳೂರಿನ ಕೇಶ ವಿನ್ಯಾಸಕ ನಾಗೇಶ್ವರರಾವ್ `ಡಾ. ವಿಷ್ಣುವರ್ಧನ್ ಪ್ರಶಸ್ತಿ' ಸ್ವೀಕರಿಸಿ, ಕಲೆ, ಕಲಾವಿದರ ಮೇಲಿನ ಪ್ರೀತಿ ಹುಟ್ಟಿದ್ದೇ ಭದ್ರಾವತಿಯಲ್ಲಿ ಎನಿಸುತ್ತಿದೆ. ಇಲ್ಲಿನ ಕಲಾವಿದರಿಗೆ, ಮಹಾಜನತೆಗೆ ಧನ್ಯವಾದಗಳು ಎಂದರು.
ಹಿರಿಯ ಗಾಯಕ ಬಿ.ಲೋಕನಾಥ್‌ರವರಿಗೆ ದಿ. ಜಯಶೀಲನ್ ಪ್ರಶಸ್ತಿ ಹಾಗೂ ಹಿರಿಯ ಪತ್ರಕರ್ತ ಸುದರ್ಶನ್‌ರವರಿಗೆ ದಿ.ವೀರಯೋಧ ಮುರಳಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸರ್ಕಾರಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ವರ್ಷಾ, ಕಾರುಣ್ಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಜಿ. ರಾಜು, ಸಮಾಜ ಸೇವಕಿ ಡಾ. ನಾಗರತ್ನ, ಸ್ಟೆಲ್ಲಾ ಮಾರ್ಟಿನ್ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಅಪೇಕ್ಷ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದು ತಾಲೂಕಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವ ತಾಲ್ಲೂಕಿನ ವಿವಿಧ ಶಾಲೆಗಳ ೪೭ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ "ಕನ್ನಡ ಕುವರ - ಕನ್ನಡ ಕುವರಿ" ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಅಪೇಕ್ಷ ನೃತ್ಯ ಕಲಾ ವೃಂದದ ಅಧ್ಯಕ್ಷೆ ಭಾರತಿ ಗೋವಿಂದ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಶ್ರೀ ಬಸವೇಶ್ವರ ಧರ್ಮಸಂಸ್ಥೆ ಸಂಸ್ಥಾಪಕ ಶಿವಕುಮಾರ್, ಹೊಸ ಸಿದ್ದಾಪುರ ವೃದ್ಧಾಶ್ರಮದ ಅಧ್ಯಕ್ಷೆ ಜ್ಯೋತಿ ಸೋಮಶೇಖರ್, ಜೀಡಿಕಟ್ಟೆ ಶ್ರೀ ಮರುಳಸಿದ್ದೇಶ್ವರ ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಅಪೇಕ್ಷ ನೃತ್ಯ ಕಲಾ ವೃಂದ ಕಾರ್ಯದರ್ಶಿ ಡಾ. ಅಪೇಕ್ಷ ಮಂಜುನಾಥ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನೀಲಪ್ಪ ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮೊದಲು ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ಅಧ್ಯಕ್ಷ ಹಾಗೂ ಖ್ಯಾತ ಗಾಯಕ ಬಿ.ಎ ಮಂಜುನಾಥ್, ಗಾಯಕ ಮನೋಹರ್(ಮನು) ಮತ್ತು ಜ್ಯೂ. ವಿಷ್ಣುವರ್ಧನ್ ಖ್ಯಾತಿಯ ಅಪೇಕ್ಷ ನೃತ್ಯ ಕಲಾವೃಂದದವರಿಂದ ಸಂಗೀತ ಸಂಭ್ರಮ ಕಾರ್ಯಕ್ರಮ ಕಲಾಭಿಮಾನಿಗಳ ಮನಸೂರೆಗೊಂಡಿತು.