ಭದ್ರಾ ಜಲಾಶಯದಿಂದ ನದಿಗೆ ಬಿಡುತ್ತಿರುವ ನೀರಿನ ಪ್ರಮಾಣ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಭದ್ರಾವತಿ ನಗರದ ಹೃದಯ ಭಾಗದಲ್ಲಿರುವ ಹೊಸ ಸೇತುವೆ ಮುಳುಗಡೆ ಹಂತಕ್ಕೆ ತಲುಪಿದೆ. ಈ ಹಿನ್ನಲೆಯಲ್ಲಿ ಸೇತುವೆ ಮೇಲೆ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಸೇತುವೆ ಎರಡು ಬದಿ ಬ್ಯಾರಿಗೇಡ್‌ಗಳನ್ನು ಅಳವಡಿಸಿ ಬಂದ್ ಮಾಡಲಾಗಿದೆ.
ಭದ್ರಾವತಿ: ಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಕ್ಷಣದಿಂದ ಕ್ಷಣಕ್ಕೆ ಏರಿಕೆಯಾಗುತ್ತಿದೆ. ಜಲಾಶಯದ ಸುರಕ್ಷತೆ ಹಿನ್ನಲೆಯಲ್ಲಿ ಹೆಚ್ಚುವರಿ ನೀರು ನದಿಗೆ ಹರಿಸಲಾಗುತ್ತಿದೆ. ಇದರಿಂದಾಗಿ ನಗರದ ಹೃದಯ ಭಾಗದಲ್ಲಿರುವ ಹೊಸ ಸೇತುವೆ ಶನಿವಾರ ಸಂಜೆ ವೇಳೆಗೆ ಮುಳುಗಡೆ ಹಂತಕ್ಕೆ ತಲುಪಿದೆ.
ಪ್ರತಿ ವರ್ಷದಂತೆ ಈ ಬಾರಿ ಸಹ ಪ್ರವಾಹ ಉಂಟಾಗುವ ಭೀತಿ ಎದುರಾಗಿದ್ದು, ಹೊಸ ಸೇತುವೆ ಮುಳುಗಡೆ ಹಂತಕ್ಕೆ ತಲುಪಿರುವ ಹಿನ್ನಲೆಯಲ್ಲಿ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸಲಾಗಿದೆ. ಸೇತುವೆ ಎರಡು ಬದಿ ಬ್ಯಾರಿಕೇಡ್‌ಗಳ ಮೂಲಕ ಬಂದ್ ಮಾಡಲಾಗಿದ್ದು, ಪೊಲೀಸ್ ಹಾಗು ಗೃಹ ರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸೇತುವೆ ಮೇಲಿನ ಸಂಚಾರ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ನಗರದಲ್ಲಿ ವಾಹನಗಳ ದಟ್ಟಣೆ ಅಧಿಕವಾಗಿದ್ದು, ಸಂಚಾರಿ ಪೊಲೀಸರು ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡಿದ್ದಾರೆ. ಈ ನಡುವೆ ಹಳೇಸೇತುವೆ ಬಳಿ ಇರುವ ಶ್ರೀ ಸಂಗಮೇಶ್ವರ ದೇವಸ್ಥಾನ ಸಂಪೂರ್ಣವಾಗಿ ಮುಳುಗಡೆಗೊಂಡಿದೆ.
ಪ್ರವಾಹ ಭೀತಿ:
ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಇದರಿಂದಾಗಿ ನೀರಿನ ಪ್ರವಾಹ ಉಂಟಾಗಿ ತಗ್ಗು ಪ್ರದೇಶಗಳಿಗೆ ನುಗ್ಗುವ ಸಾಧ್ಯತೆ ಹೆಚ್ಚಾಗಿದೆ. ಪ್ರತಿ ವರ್ಷ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದ್ದು, ಇದರಿಂದಾಗಿ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ.
ಪ್ರವಾಹ ಎದುರಿಸಲು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು ನಗರಸಭೆ ಆಡಳಿತಗಳು ಈಗಾಗಲೇ ಸಿದ್ದತೆ ಕೈಗೊಂಡಿವೆ. ಸಂತ್ರರಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ತೆರಳಲು ಈಗಾಗಲೇ ಸೂಚಿಸಲಾಗಿದ್ದು, ಮುಂದಿನ ಕೆಲವು ದಿನಗಳವರೆಗೆ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನಲೆಯಲ್ಲಿ ಭದ್ರಾ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣ ಏರಿಕೆಯಾಗಲಿದ್ದು, ಅದರಂತೆ ಹೊರಬಿಡುತ್ತಿರುವ ನೀರಿನ ಪ್ರಮಾಣದಲ್ಲೂ ಏರಿಕೆಯಾಗಲಿದೆ. ಈ ನಡುವೆ ಇದೀಗ ಸರ್ಕಾರ ತಗ್ಗು ಪ್ರದೇಶಗಳ ಬಳಿ ತಡೆಗೋಡೆ ನಿರ್ಮಿಸಲು ಅನುದಾನ ಬಿಡುಗಡೆಗೊಳಿಸಿದ್ದು, ಮುಂದಿನ ವರ್ಷದಿಂದ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ.